ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ಗೆ ಹೈಕೋರ್ಟ್ ನೋಟಿಸ್; ಆಯ್ಕೆ ಅಸಿಂಧು ಕೋರಿದ ಅರ್ಜಿ ವಿಚಾರಣೆ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‌ ಮೂಲಕ ಮತದಾರರಿಗೆ ಹಲವು ಉಚಿತ ಸೌಲಭ್ಯಗಳು ಹಾಗೂ ಹಣದ ಆಮಿಷ ಒಡ್ಡಿ ಅಕ್ರಮವಾಗಿ ಆಯ್ಕೆಯಾಗಿದ್ದಾರೆ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಪ್ರಭಾ ಮಲ್ಲಿಕಾರ್ಜುನ್ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಪರಾಜಿತ ಅಭ್ಯರ್ಥಿ ಜಿ.ಎಸ್. ಗಾಯತ್ರಿ ಸಿದ್ದೇಶ್ವರ್ ಹಾಗೂ ದಾವಣಗೆರೆ ನಿವಾಸಿ ಸುಭಾನ್ ಖಾನ್ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಪ್ರಭಾ ಮಲ್ಲಿಕಾರ್ಜುನ್ ಸೇರಿ ದಾವಣಗೆರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಹಾಗೂ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತಲ್ಲದೆ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಸೆ.19ಕ್ಕೆೆ ಮುಂದೂಡಿತು.

ಅರ್ಜಿದಾರರ ಆರೋಪವೇನು?
ಪ್ರಭಾ ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಿ ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ. ಗ್ಯಾರಂಟಿ ಕಾರ್ಡ್‌ನಲ್ಲಿ ಹಲವು ಆಮಿಷಗಳನ್ನು ಒಡ್ಡಲಾಗಿದ್ದು, ಪ್ರಮುಖವಾಗಿ ಯುವಜನತೆಗೆ 1 ಲಕ್ಷ ರೂ. ವೇತನ, ಬಡ ಕುಟುಂಬದ ಪ್ರತಿ ಮಹಿಳೆಗೆ 1 ಲಕ್ಷ ರೂ. ಹಣ, ಸಾಲ ಮನ್ನಾ ಇನ್ನಿತರ ಸೌಲಭ್ಯಗಳ ಆಮಿಷ ಒಡ್ಡಲಾಗಿತ್ತು. ಈ ರೀತಿಯ ಚುನಾವಣಾ ಅಕ್ರಮಗಳನ್ನು ಎಸಗುವ ಮೂಲಕ 26,094 ಮತಗಳ ಅಂತರದಿಂದ ಪ್ರಭಾ ಮಲ್ಲಿಕಾರ್ಜುನ್ ಗೆದ್ದಿದ್ದಾರೆ. ಚುನಾವಣಾ ಫಲಿತಾಂಶ ಘೋಷಣೆಯಾದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ, ತಮ್ಮ ಗೆಲುವಿಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಸಹ ಕಾರಣವಾಗಿದೆ ಎಂದು ಪ್ರಭಾ ಮಲ್ಲಿಕಾರ್ಜುನ್ ಅವರೇ ಹೇಳಿದ್ದಾರೆ. ಮತದಾರರ ಮೇಲೆ ಪ್ರಭಾವ ಬೀರಿರುವುದು ಪ್ರಜಾಪ್ರತಿನಿಧಿ ಕಾಯ್ದೆಗೆ ವಿರುದ್ಧವಾಗಿದೆ. ಆದ್ದರಿಂದ, ಅವರ ಆಯ್ಕೆ ಅಸಿಂಧು ಎಂದು ಘೋಷಿಸಬೇಕೆಂದು ಅರ್ಜಿದಾರರು ಮನವಿ ಮಾಡಿದ್ದಾರೆ.

Related Articles

Comments (0)

Leave a Comment