ಫ್ರೀಡಂ ಪಾರ್ಕ್ನಲ್ಲಿ ಐದನೇ ದಿನವೂ ಮುಂದುವರಿದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
- by Legal Samachar
- November 21, 2026
- 11 Views
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ತಿಂಗಳಿಗೆ ₹15 ಸಾವಿರ ಗೌರವಧನ ನೀಡಬೇಕು ಹಾಗೂ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದ ಸರ್ಕಾರದ ಆದೇಶದ ಪ್ರತಿಯನ್ನು ನೀಡಬೇಕು ಎಂದು ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ.
ಐದು ದಿನಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ಬೇಡಿಕೆಗಳು ಈಡೇರುವವರೆಗೂ ಹೋರಾಟ ಕೈಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧವೂ ಕಾರ್ಯಕರ್ತೆಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಹಿಳಾ ಕಾರ್ಯಕರ್ತೆಯರ ಬಗ್ಗೆ ಮುಖ್ಯಮಂತ್ರಿಗಳಿಗೆ ಕಾಳಜಿ ಇಲ್ಲವೇ? ಸೌಜನ್ಯಕ್ಕಾದರೂ ತಮ್ಮತ್ತ ತಿರುಗಿ ನೋಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಗೌರವಧನ ಹೆಚ್ಚಳ ಸೇರಿದಂತೆ ತಮ್ಮ ಬೇಡಿಕೆಗಳ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿರುವ ಕಾರ್ಯಕರ್ತೆಯರು, “ಕಲ್ಲುಬಂಡೆಯಂತಿರುವ ಮುಖ್ಯಮಂತ್ರಿಗಳ ಮನಸ್ಸನ್ನೂ ನಮ್ಮ ಹೋರಾಟ ಕರಗಿಸಲಿದೆ. ಕಲ್ಲುಬಂಡೆಯನ್ನೂ ಕೆತ್ತಿ ಮೂರ್ತಿಯನ್ನಾಗಿ ಮಾಡುವ ಶಕ್ತಿ ನಮ್ಮ ಹೋರಾಟಕ್ಕಿದೆ” ಎಂದು ಹೇಳಿದ್ದಾರೆ.
ಸರ್ಕಾರ ಕೂಡಲೇ ಸಮಸ್ಯೆ ಬಗೆಹರಿಸಿ ಜನರ ಮೆಚ್ಚುಗೆಗೆ ಪಾತ್ರವಾಗಬೇಕು. ಇಲ್ಲದಿದ್ದರೆ ಹೋರಾಟವನ್ನು ಮುಂದುವರಿಸುವುದಾಗಿ ಆಶಾ ಕಾರ್ಯಕರ್ತೆಯರು ಎಚ್ಚರಿಸಿದ್ದಾರೆ.


Comments (0)