ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಎಸ್‌ಪಿಪಿಯಾಗಿ ಪ್ರೊ. ರವಿವರ್ಮ ಕುಮಾರ್ ನೇಮಕ; ಹೈಕೋರ್ಟ್‌ಗೆ ಮಾಹಿತಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ದಾಖಲಾಗಿರುವ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಹೈಕೋರ್ಟ್‌ಗೆ ಮಾಹಿತಿ ನೀಡಲಾಗಿದೆ.

ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಸಿಐಡಿ ಪರವಾಗಿ ಹಾಜರಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ್ ಅವರು, ರಾಜ್ಯ ಸರ್ಕಾರ ಸೆಪ್ಟೆಂಬರ್ 3ರಂದು ಪ್ರೊ. ರವಿವರ್ಮ ಕುಮಾರ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿದ್ದು, ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ರವಿವರ್ಮ ಕುಮಾರ್ ವಾದ ಮಂಡಿಸಲಿದ್ದಾರೆ. ಅವರಿಗೆ ಪ್ರಕರಣ ಕುರಿತು ವಿವರಿಸಲಾಗುವುದು. ಅದಕ್ಕಾಗಿ ಕಾಲಾವಕಾಶ ಬೇಕಿದ್ದು, ಅರ್ಜಿ ವಿಚಾರಣೆ ಮುಂದೂಡಬೇಕು ಎಂದು ಕೋರಿದರು.

ಅದನ್ನು ಪರಿಗಣಿಸಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿದ ನ್ಯಾಯಾಲಯ, ಅಲ್ಲಿಯವರೆಗೆ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಮತ್ತು ಅವರಿಗೆ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶ ಮುಂದುವರಿಯಲಿದೆ ಎಂದು ತಿಳಿಸಿತು.

Related Articles

Comments (0)

Leave a Comment