ರೇಣುಕಾಸ್ವಾಮಿ ಕೊಲೆ ಪ್ರಕರಣ; ಚಾರ್ಜ್‌ಶೀಟ್ ಮಾಹಿತಿ ಬಿತ್ತರಿಸದಂತೆ ಮಾಧ್ಯಮಗಳಿಗೆ ಹೈಕೋರ್ಟ್ ನಿರ್ಬಂಧ
- by Jagan Ramesh
- September 10, 2024
- 233 Views
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ದೋಷಾರೋಪ ಪಟ್ಟಿಯಲ್ಲಿನ ರಹಸ್ಯ ಮಾಹಿತಿಗಳನ್ನು ಪ್ರಸಾರ, ಪ್ರಕಟಣೆ ಅಥವಾ ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ ಹಾಗೂ ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶಿಸಿದೆ.
ಆರೋಪ ಪಟ್ಟಿಯಲ್ಲಿರುವ ಮಾಹಿತಿ ಬಿತ್ತರಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ನಿರ್ದೇಶಿಸುವಂತೆ ಕೋರಿ ಪ್ರಕರಣದ 2ನೇ ಆರೋಪಿ ದರ್ಶನ್ ಶ್ರೀನಿವಾಸ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿತು. ಜತೆಗೆ, ಅರ್ಜಿಯಲ್ಲಿ ಹೊಸದಾಗಿ ಪ್ರತಿವಾದಿಗಳಾಗಿ ಸೇರಿಸಲಾಗಿರುವ 38 ಮಾಧ್ಯಮ ಸಂಸ್ಥೆಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಿತು.
ಇದಕ್ಕೂ ಮುನ್ನ ದರ್ಶನ್ ಪರ ಹಿರಿಯ ವಕೀಲ ಪ್ರಭುಲಿಂಗ ಕೆ. ನಾವದಗಿ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ. ಅರವಿಂದ್ ಕಾಮತ್ ಅವರ ವಾದ ಆಲಿಸಿದ ನ್ಯಾಯಪೀಠ, ಮೇಲ್ನೋಟಕ್ಕೆ ಏಕಪಕ್ಷೀಯ ಮಧ್ಯಂತರ ಆದೇಶ ಪಡೆಯಲು ಅರ್ಜಿದಾರರು ತಮ್ಮ ಪ್ರಕರಣ ಸಾಬೀತುಪಡಿಸಿದ್ದಾರೆ. ಆದ್ದರಿಂದ, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪ ಪಟ್ಟಿಯಲ್ಲಿನ ರಹಸ್ಯ ಮಾಹಿತಿಯನ್ನು ಮುಂದಿನ ಆದೇಶದವರೆಗೆ ಮಾಧ್ಯಮಗಳು ಮುದ್ರಣ, ಪ್ರಸಾರ, ಹಂಚಿಕೆ ಮಾಡಬಾರದು ಎಂದು ಆದೇಶಿಸಿತು.
ನ್ಯಾಯಾಲಯದ ಈ ಆದೇಶವನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಮಾಧ್ಯಮ ಸಂಸ್ಥೆಗಳಿಗೆ ರವಾನಿಸಬೇಕು. ನಿಯಮ ಮತ್ತು ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಳ್ಳುವ ಮಾಧ್ಯಮಗಳ ವಿರುದ್ಧ ಕಾನೂನಿನ ಅನ್ವಯ ಕ್ರಮ ಜರುಗಿಸಬೇಕು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಹೈಕೋರ್ಟ್ ನಿರ್ದೇಶಿಸಿತು.
ಪ್ರತಿಬಂಧಕಾದೇಶವಿದ್ದರೂ ಪ್ರಸಾರ:
ದರ್ಶನ್ ಪರ ಹಿರಿಯ ವಕೀಲ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿ, ಪ್ರಕರಣದ ತನಿಖೆಗೆ ಸಂಬಂಧಿಸಿದ ಮಾಹಿತಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಶಾಶ್ವತ ಪ್ರತಿಬಂಧಕಾದೇಶ ಹೊರಡಿಸುವಂತೆ ಕೋರಿ ದರ್ಶನ್ ಅವರ ಪತ್ನಿ ಸಿವಿಲ್ ನ್ಯಾಯಾಲಯದಲ್ಲಿ ಅಸಲು ದಾವೆ ಹೂಡಿದ್ದರು. ಅದರ ವಿಚಾರಣೆ ನಡೆಸಿದ್ದ ಕೋರ್ಟ್, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಗೆ ಸಂಬಂಧಿಸಿದ ಅಂತಿಮ ವರದಿ, ಎಫ್‌ಎಸ್‌ಎಲ್ ವರದಿ, ತಪ್ಪೊಪ್ಪಿಗೆ ಹೇಳಿಕೆಗಳು ಸೇರಿ ಯಾವುದೇ ವಿಚಾರವಾಗಿ ಸುದ್ದಿ ಬಿತ್ತರಿಸದಂತೆ, ಚರ್ಚೆ, ಸಂದರ್ಶನಗಳನ್ನು ನಡೆಸದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಿ ಆಗಸ್ಟ್ 27ರಂದು ಏಕಪಕ್ಷೀಯ ತಾತ್ಕಾಲಿಕ ಪ್ರತಿಬಂಧಕಾದೇಶ ಹೊರಡಿಸಿದೆ. ಇದರ ಹೊರತಾಗಿಯೂ ಮಾಧ್ಯಮ ಸಂಸ್ಥೆಗಳು ದೋಷಾರೋಪ ಪಟ್ಟಿಯಲ್ಲಿರುವ ಗೌಪ್ಯ ಮಾಹಿತಿಯನ್ನು ಸುದ್ದಿಯ ರೂಪದಲ್ಲಿ ಬಿತ್ತರಿಸುತ್ತಿವೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ಅವರು, ಅರ್ಜಿದಾರರು ದೂರು ನೀಡಿದರೆ ಅದನ್ನು ಆಧರಿಸಿ ನಾವು ಮಾಧ್ಯಮ ಸಂಸ್ಥೆಗಳ ವಿರುದ್ಧ ಕ್ರಮಕೈಗೊಳ್ಳಬಹುದು. ಆದರೆ, ಅಂತಹ ಯಾವುದೇ ದೂರು ಬಂದಿಲ್ಲ. ಯಾವ ಕಾರ್ಯಕ್ರಮದಲ್ಲಿ ಸಂಹಿತೆ ಉಲ್ಲಂಘಿಸಲಾಗಿದೆ ಎಂಬ ಮಾಹಿತಿ ನೀಡಿ, ಸಾಕ್ಷ್ಯ ಒದಗಿಸಿದರೆ ಕಾನೂನಿನ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಅಂತಿಮವಾಗಿ ನ್ಯಾಯಪೀಠ, ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದಾಖಲಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ಆರೋಪ ಪಟ್ಟಿಯ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಮುದ್ರಣ, ವಿದ್ಯುನ್ಮಾನ ಮತ್ತು ಸಾಮಾಜಿಕ ಮಾಧ್ಯಮಗಳನ್ನು ನಿರ್ಬಂಧಿಸಿ, ಆದೇಶಿಸಿತು.
Related Articles
Thank you for your comment. It is awaiting moderation.
Comments (0)