ಬಗರ್‌ಹುಕುಂ ಭೂಮಂಜೂರಾತಿ ಅಕ್ರಮ; ಮಾಜಿ‌ ಶಾಸಕ ಕೆ.ಎಸ್. ಲಿಂಗೇಶ್ ವಿರುದ್ಧದ ಎಫ್‌ಐ‌ಆರ್ ರದ್ದತಿಗೆ ಹೈಕೋರ್ಟ್ ನಕಾರ

ಬೆಂಗಳೂರು: ಬಗರ್‌ಹುಕುಂ ಸಾಗುವಳಿ ಭೂ ಮಂಜೂರಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ನ ಮಾಜಿ ಶಾಸಕ ಕೆ.ಎಸ್‌. ಲಿಂಗೇಶ್‌ ಸೇರಿ 9 ಮಂದಿಯ ವಿರುದ್ಧ ಹಾಸನದ ಬೇಲೂರು ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

ಎಫ್‌ಐಆರ್ ರದ್ದು ಕೋರಿ ಬಗರ್‌ಹುಕುಂ ಸಾಗುವಳಿ ಸಮಿತಿಯ ಮಾಜಿ ಅಧ್ಯಕ್ಷ ಕೆ.ಎಸ್‌. ಲಿಂಗೇಶ್‌, ಮಾಜಿ ಸದಸ್ಯರಾದ ಜಿ.ಕೆ.ಕುಮಾರ್‌, ಶೈಲಾ ಮೋಹನ್‌, ಟಿ. ಆರ್‌. ರಮೇಶ್‌, ಪರ್ವತಗೌಡ, ಎಂ. ಆರ್‌. ಚೇತನಾ, ಈಶ್ವರ್‌ ಪ್ರಸಾದ್‌, ಎಸ್‌. ಎನ್‌. ಲಿಂಗೇಶ್‌ ಮತ್ತು ರಂಗನಾಥ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ. ತೀರ್ಪಿನ ವಿಸ್ತೃತ ಪ್ರತಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ಆರೋಪವೇನು?
ಕೋಲಾರದ ಸಾಮಾಜಿಕ ಕಾರ್ಯಕರ್ತ ಕೆ.ಸಿ. ರಾಜಣ್ಣ ಅವರ ಖಾಸಗಿ ದೂರನ್ನು ಪರಿಗಣಿಸಿದ್ದ ವಿಚಾರಣಾ ನ್ಯಾಯಾಲಯ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆದೇಶಿಸಿತ್ತು. ಇದರ ಅನುಸಾರ ಎಫ್‌ಐಆರ್‌ ದಾಖಲಾಗಿದ್ದು, ಕೆ. ಎಸ್‌. ಲಿಂಗೇಶ್‌ ಸೇರಿ 16 ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್‌ಗಳಾದ 468, 464, 465, 471, 409, 420, 120ಬಿ ಅಡಿ ಪ್ರಕರಣ ದಾಖಲಿಸಲಾಗಿದೆ.

ಬೇಲೂರು ತಾಲೂಕಿನಲ್ಲಿ 2,750 ಎಕರೆ ಭೂಮಿಯನ್ನು 1,430 ಮಂದಿ ನಕಲಿ ಮತ್ತು ಅಕ್ರಮ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ. ಬೇಲೂರು ತಾಲೂಕು ಬಗರ್‌ ಹುಕುಂ ಸಾಗುವಳಿ ಸಮಿತಿ ಅಧ್ಯಕ್ಷರಾಗಿದ್ದ ಮೊದಲ ಆರೋಪಿ ಮಾಜಿ ಶಾಸಕ ಲಿಂಗೇಶ್‌ ಅವರು 750 ಎಕರೆಗಿಂತ ಹೆಚ್ಚಿನ ಪ್ರಮಾಣದ ಸರ್ಕಾರಿ ಜಮೀನುಗಳ ಅನುದಾನವನ್ನು ಅನುಮೋದಿಸಿದ್ದಾರೆ. ಆರೋಪಿಗಳೆಲ್ಲರೂ ಅಧಿಕಾರಿಗಳ ಜತೆ ಶಾಮೀಲಾಗಿ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ನಕಲಿ ದಾಖಲೆ ದೃಷ್ಟಿಸಲು ಸಹಕರಿಸುವ ಮೂಲಕ, ಸರ್ಕಾರಕ್ಕೆ ವಂಚಿಸುವ ಉದ್ದೇಶದಿಂದ ಅಪರಾಧಿಕ ಒಳಸಂಚು ನಡೆಸಿದ್ದಾರೆ. ಮಾಜಿ ಶಾಸಕ ವೈ.ಎನ್‌. ರುದ್ರೇಶ್‌ ಗೌಡ ಅವರೂ ಅಕ್ರಮ ವಹಿವಾಟಿನ ಭಾಗವಾಗಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

Related Articles

Comments (0)

Leave a Comment