ಬಾಂಬ್ ಬ್ಲಾಸ್ಟ್‌ಗೆ ತಮಿಳುನಾಡಿನ ಸಂಬಂಧ ಕಲ್ಪಿಸಿ ಆಕ್ಷೇಪಾರ್ಹ ಹೇಳಿಕೆ; ಶೋಭಾ ಕರಂದ್ಲಾಜೆ ವಿರುದ್ಧದ ಪ್ರಕರಣ ರದ್ದು
- by Jagan Ramesh
- September 20, 2024
- 70 Views
ಬೆಂಗಳೂರು: ನಗರದ ಬ್ರೂಕ್‌ಫೀಲ್ಡ್‌ನಲ್ಲಿರುವ ‘ದಿ ರಾಮೇಶ್ವರಂ ಕೆಫೆ’ ಬಾಂಬ್ ಸ್ಫೋಟ ಪ್ರಕರಣಕ್ಕೆ ತಮಿಳುನಾಡಿನ ಸಂಬಂಧ ಕಲ್ಪಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣ ಸಂಬಂಧ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಹಾಗೂ ಆ ಸಂಬಂಧ 5ನೇ ಎಸಿಎಂಎಂ ನ್ಯಾಯಾಲಯದ ಮುಂದಿರುವ ಪ್ರಕರಣ ರದ್ದು ಕೋರಿ ಶೋಭಾ ಕರಂದ್ಲಾಜೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.
ಅರ್ಜಿದಾರರ ವಿರುದ್ಧ ಇದೇ ಘಟನೆಯ ಬಗ್ಗೆ ಮದುರೈ ನಗರ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ 2024ರ ಸೆಪ್ಟೆಂಬರ್ 5ರಂದು ರದ್ದುಗೊಳಿಸಿದೆ. ಅದೇ ಆಧಾರದಲ್ಲಿ ಈ ಪ್ರಕರಣವನ್ನೂ ರದ್ದುಗೊಳಿಸಲಾಗುವುದು ಎಂದು ತಿಳಿಸಿದ ನ್ಯಾಯಪೀಠ, ಶೋಭಾ ವಿರುದ್ಧ ಪ್ರಜಾ ಪ್ರತಿನಿಧಿ ಕಾಯ್ದೆ ಸೆಕ್ಷನ್ 123(3), 123(3)ಎ ಮತ್ತು 125ರಡಿ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿ ಆದೇಶಿಸಿತು.
ವಿಚಾರಣೆ ವೇಳೆ ಶೋಭಾ ಕರಂದ್ಲಾಜೆ ಪರ ವಾದ ಮಂಡಿಸಿದ ವಕೀಲ ವೆಂಕಟೇಶ್ ದಳವಾಯಿ, ಮೇಲ್ನೋಟಕ್ಕೆ ಅರ್ಜಿದಾರರ ವಿರುದ್ಧದ ಆರೋಪಗಳು ಚುನಾವಣೆಗೆ ಸಂಬಂಧಿಸಿದವಲ್ಲ. ಪ್ರಜಾಪ್ರತಿನಿಧಿ ಕಾಯ್ದೆಯ 123(3), 123(3)ಎ ಸೆಕ್ಷನ್‌ಗಳು ಧರ್ಮ ಜಾತಿ, ಸಮುದಾಯ ಅಥವಾ ಭಾಷೆಯ ಆಧಾರದಲ್ಲಿ ಮತ ಚಲಾಯಿಸಲು ಅಥವಾ ಮತದಾನದಿಂದ ದೂರವಿರಲು ಮತದಾರರನ್ನು ಉತ್ತೇಜಿಸುವುದಕ್ಕೆ ಸಂಬಂಧಿಸಿವೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ. ಎನ್. ಜಗದೀಶ್, ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ಯಾಡ್ ಅಧಿಕಾರಿ ಪ್ರಕರಣವನ್ನು ಪ್ರಜಾಪ್ರತಿನಿಧಿ ಕಾಯ್ದೆ ಬದಲು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 153ರಡಿ ದಾಖಲಿಸಬೇಕಾಗಿತ್ತು ಎಂದರು.
ಪ್ರಕರಣದ ಹಿನ್ನೆಲೆ:
ಕಳೆದ ಲೋಕಸಭೆ ಚುನಾವಣೆಗೂ ಮುನ್ನ ನಗರ್ತಪೇಟೆಯಲ್ಲಿ ನಡೆದ ಪ್ರತಿಭಟನೆ ವೇಳೆ, ತಮಿಳುನಾಡಿನಿಂದ ನಗರಕ್ಕೆ ಬಂದು ಬಾಂಬ್ ಬ್ಲಾಸ್ಟ್ ಮಾಡುತ್ತಾರೆ ಎಂದು ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ವಿರೋಧ ವ್ಯಕ್ತವಾಗುತ್ತಿದ್ದಂತೆ ಶೋಭಾ ಕರಂದ್ಲಾಜೆ ಕ್ಷಮೆ ಯಾಚಿಸಿದ್ದರು. ಈ ನಡುವೆ, ಪ್ರಕರಣದ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗವು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು. ಅದರಂತೆ, ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದರಿಂದ, ಪ್ರಕರಣ ರದ್ದು ಕೋರಿ ಶೋಭಾ ಕರಂದ್ಲಾಜೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
Related Articles
Thank you for your comment. It is awaiting moderation.
Comments (0)