ಬಿ ಮತ್ತು ಸಿ ವರ್ಗದ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆ; ಮುಜರಾಯಿ ಆಯುಕ್ತರ ಅಧಿಸೂಚನೆ ಪ್ರಶ್ನಿಸಿದ್ದ ಅರ್ಜಿ ವಜಾ

ಬೆಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಬಿ ಮತ್ತು ಸಿ ವರ್ಗದ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆ ಮಾಡುವ ಸಂಬಂಧ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ಆಯುಕ್ತರು 2016ರ ಜುಲೈ 12ರಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆೆಗಳ ದೇವಸ್ಥಾನಗಳ ವ್ಯವಸ್ಥಾಪನಾ ಸಂಘ 2016ರಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್. ಕಮಾಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ದೇವಸ್ಥಾನಗಳಿಗೆ ನಿರ್ವಹಣಾ ಸಮಿತಿಗಳ ರಚನೆಗೆ ಅವಕಾಶ ಮಾಡಿಕೊಡುವ ತಿದ್ದುಪಡಿ ಕಾಯ್ದೆಯನ್ನು ಅನೂರ್ಜಿತಗೊಳಿಸಿ, ಈ ಹಿಂದೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಹೊರಡಿಸಿದ ಆದೇಶಕ್ಕೆ ಸುಪ್ರೀಂಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆಯಲ್ಲಿ ತಿದ್ದುಪಡಿ ಕಾಯ್ದೆಯಂತೆ ವ್ಯವಸ್ಥಾಪನಾ ಸಮಿತಿಗಳನ್ನು ರಚಿಸುವ ಅಧಿಕಾರ ಸರ್ಕಾರ ಹೊಂದಿದೆ ಎಂದು ಅಭಿಪ್ರಾಯಪಟ್ಟು, ಅರ್ಜಿ ವಜಾಗೊಳಿಸಿತು.

ಪ್ರಕರಣವೇನು?
ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿಗಳ ಕಾಯ್ದೆ-1997ರ ಸೆಕ್ಷನ್ 25ಕ್ಕೆೆ 2011 ಹಾಗೂ 2012ರಲ್ಲಿ ತಿದ್ದುಪಡಿ ತಂದು ವ್ಯವಸ್ಥಾಪನಾ ಸಮಿತಿಗಳ ನೇಮಕಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದನ್ನು ಪ್ರಶ್ನಿಸಿ ಕೆಲವು ದೇವಾಲಯಗಳ ಪಾರಂಪರಿಕ ಟ್ರಸ್ಟೀಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 2015ರ ನವೆಂಬರ್ 17ರಂದು ಅರ್ಜಿ ಮಾನ್ಯ ಮಾಡಿದ್ದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ತಿದ್ದುಪಡಿ ಕಾಯ್ದೆಯನ್ನು ಅನೂರ್ಜಿತಗೊಳಿಸಿ ತೀರ್ಪು ನೀಡಿತ್ತು.

ಇದನ್ನು ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಹೈಕೋರ್ಟ್ ತೀರ್ಪಿಗೆ 2016ರ ಏಪ್ರಿಲ್ 8ರಂದು ಸುಪ್ರೀಂಕೋರ್ಟ್ ತಡೆ ನೀಡಿತ್ತು. ಅದರ ಬಳಿಕ ತಿದ್ದುಪಡಿ ಕಾಯ್ದೆಯಂತೆ ಬಿ ಮತ್ತು ಸಿ ದೇವಸ್ಥಾನಗಳಿಗೆ ನಿರ್ವಹಣಾ ಸಮಿತಿಗಳನ್ನು ರಚಿಸಲು 2016ರ ಜುಲೈ 12ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅದನ್ನು ಪ್ರಶ್ನಿಸಿ ಪರಂಪರಾಗತವಾಗಿ ದೇವಸ್ಥಾನಗಳನ್ನು ನಿರ್ವಹಣೆ ಮಾಡುತ್ತಿರುವ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆೆಗಳ ದೇವಸ್ಥಾನಗಳ ವ್ಯವಸ್ಥಾಪನಾ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು.

Related Articles

Comments (0)

Leave a Comment