ಅಲ್ಪ ಸಂಖ್ಯಾತರ ವಿರುದ್ಧ ಅವಹೇಳನಕಾರಿ ಪೋಸ್ಟ್; ಜೆ.ಪಿ. ನಡ್ಡಾ ವಿರುದ್ಧದ ಪ್ರಕರಣಕ್ಕೆ ತಡೆ ನೀಡಿದ ಹೈಕೋರ್ಟ್
- by Jagan Ramesh
- September 26, 2024
- 98 Views
ಬೆಂಗಳೂರು: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ಕಲಬುರಗಿಯ ಸಿಇಎನ್ (ಸೈಬರ್ ಕ್ರೈಂ, ಆರ್ಥಿಕ ಅಪರಾಧಗಳು ಮತ್ತು ಮಾದಕ ದ್ರವ್ಯ ತನಿಖಾ ವಿಭಾಗ) ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಜೇವರ್ಗಿ ತಾಲೂಕಿನ ಹಾರವಾಳ ಗ್ರಾಮದ ಪ್ರವೀಣ್ ಕುಮಾರ್ ಪಾಟೀಲ್ ಎಂಬುವರು ಕಲಬುರಗಿ ಸಿಇಎನ್ ಠಾಣೆಯಲ್ಲಿ ದಾಖಲಿಸಿರುವ ದೂರು ಹಾಗೂ ಅದರ ಸಂಬಂಧ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣಾ ಪ್ರಕ್ರಿಯೆ ರದ್ದು ಕೋರಿ ಜೆ.ಪಿ. ನಡ್ಡಾ ಹಾಗೂ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲ ಎಂ. ವಿನೋದ್ ಕುಮಾರ್ ಹಾಜರಾಗಿ, ದೂರಿನಲ್ಲಿ ಐಪಿಸಿ ಸೆಕ್ಷನ್ 153 (ಎ) ಅಡಿ ಆರೋಪಿಸಲಾಗಿದೆ. ಆದರೆ, ಅದಕ್ಕೆ ಪೂರಕ ಪುರಾವೆಗಳಿಲ್ಲ. ದೆಹಲಿಯಲ್ಲಿ ಟ್ವೀಟ್ ಮಾಡಿರುವುದಕ್ಕೂ ಕಲಬುರಗಿಗೂ ಏನು ಸಂಬಂಧ? ಅರ್ಜಿದಾರರ ವಿರುದ್ಧದ ಇಂತಹದ್ದೇ ಬೇರೊಂದು ಪ್ರಕರಣವನ್ನು ನ್ಯಾಯಾಲಯ ರದ್ದುಪಡಿಸಿದೆ. ಈ ಹಂತದಲ್ಲಿ ಪ್ರಕರಣಕ್ಕೆ ಸಂಪೂರ್ಣ ತಡೆ ನೀಡಬೇಕು ಎಂದು ಕೋರಿದರು.
ವಾದ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿತು. ಇದೇ ವೇಳೆ, ದೂರುದಾರ ಪ್ರವೀಣ್ ಕುಮಾರ್ ಪಾಟೀಲ್‌ಗೆ ನೋಟಿಸ್ ಜಾರಿಗೊಳಿಸಿದ ಪೀಠ, ಹೈಕೋರ್ಟ್ ಅನುಮತಿ ಇಲ್ಲದೆ ವಿಚಾರಣಾ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಬಾರದು ಎಂದು ತನಿಖಾಧಿಕಾರಿಗಳಿಗೆ ನಿರ್ದಶಿಸಿ ವಿಚಾರಣೆಯನ್ನು ಅಕ್ಟೋಬರ್ 24ಕ್ಕೆ ಮುಂದೂಡಿತು.
ಪ್ರಕರಣವೇನು?
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಫಾರ್ ಇಂಡಿಯಾ ಇನ್ಸ್ಟಾಗ್ರಾಮ್ ಖಾತೆಯಲ್ಲಿ ‘ಅಬ್‌ಕಿಬಾರ್ ಚಾರ್ ಸೋ ಪಾರ್’ ಹ್ಯಾಷ್‌ಟ್ಯಾಗ್‌ನಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ಹಿಂದುಗಳ ಆಸ್ತಿಯನ್ನು ಕಸಿದು ಮುಸ್ಲಿಮರಿಗೆ ಹಂಚಲಾಗುತ್ತದೆ. ದೇಶದ ಸಂಪತ್ತನ್ನು ಲೂಟಿ ಮಾಡಿರುವ ಮುಸ್ಲಿಂ ಸಮುದಾಯವನ್ನು ಕಾಂಗ್ರೆಸ್ ಪೋಷಿಸುತ್ತಿದೆ ಎಂಬ ವಿಡಿಯೋಗಳನ್ನು ಹಾಕಲಾಗುತ್ತಿದೆ ಎಂದು ಆರೋಪಿಸಿ ಜೆ.ಪಿ. ನಡ್ಡಾ, ಅಮಿತ್ ಮಾಳವಿಯಾ ವಿರುದ್ಧ ದೂರು ನೀಡಲಾಗಿತ್ತು. ದೂರು ಆಧರಿಸಿ ಐಪಿಸಿ ಸೆಕ್ಷನ್‌ಗಳಾದ 505(2), 504, 153(ಎ), 171(ಸಿ)(ಎಫ್)(ಜಿ), ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 125, ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಡಿ) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
Related Articles
Thank you for your comment. It is awaiting moderation.
Comments (0)