ಮುಡಾ ನಿವೇಶನ ಹಂಚಿಕೆ ಪ್ರಕರಣ; ಸಿದ್ದರಾಮಯ್ಯ ಮತ್ತಿತರರ ವಿರುದ್ಧ ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್ಗೆ ಅರ್ಜಿ
- by Jagan Ramesh
- September 27, 2024
- 229 Views
ಬೆಂಗಳೂರು: ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ ಇಡೀ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ಸಂಸ್ಥೆಗೆ (ಸಿಬಿಐ) ವಹಿಸುವಂತೆ ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ.
ಮುಡಾ ಬದಲಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿರುವ ಕೋಟ್ಯಂತರ ರೂ. ಅವ್ಯವಹಾರದ ಕುರಿತು ತನಿಖೆ ನಡೆಸಲು ಸಿಬಿಐಗೆ ನಿರ್ದೇಶಿಸುವಂತೆ ಕೋರಿ ಮೈಸೂರಿನ ಸ್ನೇಹಮಯಿ ಕೃಷ್ಣ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಗೃಹ ಸಚಿವಾಲಯ, ಗೃಹ ಇಲಾಖೆ, ಸಿಬಿಐ, ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ ಸೇರಿ ಅರ್ಜಿಯಲ್ಲಿ 12 ಪ್ರತಿವಾದಿಗಳಿದ್ದು, ಅರ್ಜಿಯು ಸೋಮವಾರ ನ್ಯಾಯಾಲಯದ ಮುಂದೆ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ಮನವಿ ಏನು?
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈಗಾಗಲೇ ಲೋಕಾಯುಕ್ತ ಪೊಲೀಸರಿಗೆ ವಹಿಸಿರುವ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು. ಎಫ್ಐಆರ್ ದಾಖಲಿಸಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸಬೇಕು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ನಾಮ ನಿರ್ದೇಶಿಸುವಂತಹ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳೊಬ್ಬರಿಂದ ಸಿಬಿಐ ತನಿಖೆ ಮೇಲ್ವಿಚಾರಣೆ ನಡೆಸಲು ನಿರ್ದೇಶಿಸಬೇಕು ಅಥವಾ ರಾಜ್ಯಪಾಲರ ಆದೇಶ ಎತ್ತಿಹಿಡಿದು ಹೊರಡಿಸಿರುವ ತೀರ್ಪಿನಲ್ಲಿ ಹೈಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ಗಮನದಲ್ಲಿ ಇರಿಸಿಕೊಂಡು ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಅರ್ಜಿಯಲ್ಲೇನಿದೆ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾದಿಂದ 55.80 ಕೋಟಿ ಮೌಲ್ಯದ ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಈ ಸಂಬಂಧ ತನಿಖೆ ನಡೆಸಿ ಕ್ರಮ ಜರುಗಿಸುವಂತೆ ಕೋರಿ ಮೊದಲಿಗೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿತ್ತು. ಆದರೆ, ಪೊಲೀಸರು ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಲು ನಿರಾಕರಿಸಿದ್ದರು. ಬಳಿಕ ಸಿಬಿಐ ಸೇರಿ ವಿವಿಧ ತನಿಖಾ ಸಂಸ್ಥೆಗಳಿಗೆ ಪ್ರಕರಣದ ತನಿಖೆ ನಡೆಸುವಂತೆ ದೂರು ನೀಡಲಾಗಿತ್ತು. ಆ ದೂರಿನ ಆಧಾರದ ಮೇಲೆ ಯಾವುದೇ ಕ್ರಮ ಜರುಗಿಸದ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಲಾಗಿತ್ತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಈ ನಡುವೆ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ/ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಲಾಗಿತ್ತು. ಅದನ್ನು ಪುರಸ್ಕರಿಸಿದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್/ತನಿಖೆಗೆ ಅನುಮತಿ ನೀಡಿ ಆಗಸ್ಟ್ 16ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಸೆಪ್ಟೆಂಬರ್ 24ರಂದು ವಜಾಗೊಳಿಸಿದ್ದ ಹೈಕೋರ್ಟ್, ರಾಜ್ಯಪಾಲರ ಆದೇಶ ಎತ್ತಿಹಿಡಿದಿದೆ. ಹೈಕೋರ್ಟ್ ತೀರ್ಪಿನ ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಕರಣ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶಿಸಿ ಆಗಸ್ಟ್ 25ರಂದು ಆದೇಶಿಸಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ನಿಷ್ಪಕ್ಷಪಾತ ತನಿಖೆ ಅಸಾಧ್ಯ:
ಸಿದ್ದಾರಾಮಯ್ಯ ಅವರು ರಾಜ್ಯದ ಹಾಲಿ ಮುಖ್ಯಮಂತ್ರಿಗಳಾಗಿದ್ದು, ರಾಜ್ಯದ ಇಲಾಖೆಗಳ ಮೇಲೆ ಅದರಲ್ಲೂ ಮುಖ್ಯವಾಗಿ ಲೋಕಾಯುಕ್ತ ಮತ್ತು ಪೊಲೀಸ್ ಪ್ರಾಧಿಕಾರಗಳಂತಹ ರಾಜ್ಯ ತನಿಖಾ ಸಂಸ್ಥೆಗಳ ಮೇಲೆ ಭಾರೀ ಪ್ರಭಾವ ಬೀರುವ ಸಾಧ್ಯತೆಯಿದೆ. ಇಂತಹ ಸಂಸ್ಥೆಗಳು ಮುಖ್ಯಮಂತ್ರಿಗಳ ವಿರುದ್ಧದ ಆರೋಪಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವ ಸಾಧ್ಯತೆಯಿಲ್ಲ. ರಾಜ್ಯ ಸರ್ಕಾರದ ಮುಖ್ಯಸ್ಥರಾಗಿರುವ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ರಾಜ್ಯ ಆಡಳಿತ ಯಂತ್ರದ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಒಂದು ವೇಳೆ ತನಿಖಾಧಿಕಾರಿಗಳ ಮೇಲೆ ಪ್ರಭಾವ ಬೀರಿದರೆ ತನಿಖೆಯ ಫಲಿತಾಂಶ ನ್ಯಾಯಸಮ್ಮತ ಮತ್ತು ನಿಷ್ಪಕ್ಷಪಾತವಾಗಿರುವುದಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.
Related Articles
Thank you for your comment. It is awaiting moderation.
Comments (0)