ಮಾನನಷ್ಟ ಪ್ರಕರಣದಲ್ಲಿ ಯತ್ನಾಳ್ ವಿರುದ್ಧದ ನೋಟಿಸ್ ರದ್ದು; ವಿಚಾರಣಾ ನ್ಯಾಯಾಲಯಕ್ಕೆ ಪ್ರಕರಣ ಹಿಂದಿರುಗಿಸಿದ ಹೈಕೋರ್ಟ್
- by Jagan Ramesh
- September 27, 2024
- 274 Views
ಬೆಂಗಳೂರು: ಸಚಿವ ಶಿವಾನಂದ ಎಸ್. ಪಾಟೀಲ್ ದಾಖಲಿಸಿದ್ದ ಮಾನನಷ್ಟ ಪ್ರಕರಣ ಸಂಬಂಧ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 223 ಅಡಿಯಲ್ಲಿ ಜಾರಿಗೊಳಿಸಿದ್ದ ನೋಟಿಸ್ ರದ್ದುಪಡಿಸಿರುವ ಹೈಕೋರ್ಟ್, ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿದೆ.
ಶಿವಾನಂದ ಪಾಟೀಲ್ ದಾಖಲಿಸಿದ್ದ ಖಾಸಗಿ ದೂರು ಪರಿಗಣಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರಿಗೊಳಿಸಿದ್ದ ನೋಟಿಸ್ ರದ್ದು ಕೋರಿ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಶುಕ್ರವಾರ ಮಾನ್ಯ ಮಾಡಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.
ದೇಶದಲ್ಲೇ ಮೊದಲ ತೀರ್ಪು:
ಇದರೊಂದಿಗೆ, 2024ರ ಜುಲೈನಿಂದ ಹೊಸದಾಗಿ ಜಾರಿಗೆ ಬಂದಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 223ರ ಅಡಿಯಲ್ಲಿ ಪ್ರಕಟಗೊಂಡ ದೇಶದ ಮೊದಲ ತೀರ್ಪು ಇದಾಗಿದೆ. ತೀರ್ಪು ಪ್ರಕಟಿಸಿದ ನಂತರ ನ್ಯಾಯಮೂರ್ತಿಗಳು ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರನ್ನು ಉದ್ದೇಶಿಸಿ, ಬಿಎನ್‌ಎಸ್‌ಸ್ ಸೆಕ್ಷನ್ 223ರ ಅಡಿಯಲ್ಲಿ ಪ್ರಕಟಗೊಂಡ ಮೊದಲ ತೀರ್ಪು ಇದಾಗಿದೆ. ದೇಶದಲ್ಲಿ ಈವರೆಗೂ ಯಾವ ನ್ಯಾಯಾಲಯವೂ ಈ ಕುರಿತ ತೀರ್ಪು ಬರೆದಿಲ್ಲ. ಈ ತೀರ್ಪಿನಿಂದ ಖಾಸಗಿ ದೂರು ದಾಖಲಾದ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯಗಳು ಬಿಎನ್‌ಎಸ್‌ಎಸ್ ಅಡಿಯಲ್ಲಿ ಯಾವ ರೀತಿಯ ಪ್ರಕ್ರಿಯೆ ಅನುಸರಿಸಬೇಕು ಎಂಬ ಬಗ್ಗೆ ಸ್ಪಷ್ಟತೆ ಸಿಗಲಿದೆ ಎಂದರು.
ಕಾಗ್ನಿಜೆನ್ಸ್ ತೆಗೆದುಕೊಳ್ಳುವ ಮುನ್ನ ಆರೋಪಿಗೆ ನೋಟಿಸ್ ಕಡ್ಡಾಯ:
ಪ್ರಕರಣದಲ್ಲಿ ಯತ್ನಾಳ್ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 156 ಅಡಿಯಲ್ಲಿ ವಿಶೇಷ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಅದನ್ನು ವಿಚಾರಣೆಗೆ ಅಂಗೀಕರಿಸಿದ್ದ ವಿಶೇಷ ನ್ಯಾಯಾಲಯ, ಬಿಎನ್‌ಎಸ್‌ಎಸ್ ಸೆಕ್ಷನ್ 223ರ ಅಡಿಯಲ್ಲಿ ಆರೋಪಿಯಾಗಿರುವ ಯತ್ನಾಳ್ ಅವರಿಗೆ ನೇರವಾಗಿ ನೋಟಿಸ್ ಜಾರಿ ಮಾಡಿತ್ತು.
ಈ ಪ್ರಕ್ರಿಯೆಯನ್ನು ಆಕ್ಷೇಪಿಸಿರುವ ಹೈಕೋರ್ಟ್, ಬಿಎನ್‌ಎಸ್‌ಎಸ್ ಸೆಕ್ಷನ್ 223ರ ಪ್ರಕಾರ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸುವ ಮುನ್ನ ಮ್ಯಾಜಿಸ್ಟ್ರೇಟ್ ಅವರು ದೂರುದಾರರ ಸ್ವಯಂ ಹೇಳಿಕೆ ಹಾಗೂ ಪ್ರಕರಣದಲ್ಲಿ ಸಾಕ್ಷಿಗಳಿದ್ದಲ್ಲಿ ಅವರ ಹೇಳಿಕೆಗಳನ್ನೂ ದಾಖಲಿಸಿಕೊಳ್ಳಬೇಕು. ಆ ಬಳಿಕ ಆರೋಪಿಗೆ ನೋಟಿಸ್ ಜಾರಿಗೊಳಿಸಿ ಅವರ ಅಹವಾಲನ್ನೂ ಆಲಿಸಬೇಕು. ಅದು ಬಿಟ್ಟು ದೂರು ದಾಖಲಾಗುತ್ತಿದ್ದಂತೆಯೇ ಕಾಗ್ನಿಜೆನ್ಸ್ (ಪ್ರಕರಣವನ್ನು ವಿಚಾರಣೆಗೆ ಪರಿಗಣಿಸುವ ಪ್ರಕ್ರಿಯೆ) ತೆಗೆದುಕೊಂಡು ನೇರವಾಗಿ ನೋಟಿಸ್ ಜಾರಿ ಮಾಡಲು ಅವಕಾಶವಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ವಿಚಾರಣಾ ಕೋರ್ಟ್‌ಗೆ ಪ್ರಕರಣ ವಾಪಸ್:
ಅರ್ಜಿದಾರರಿಗೆ ನೋಟಿಸ್ ಜಾರಿ ಮಾಡಿರುವ ಪ್ರಕ್ರಿಯೆಯಲ್ಲಿ ಕಾನೂನು ಲೋಪ ಕಂಡುಬಂದಿದೆ. ಆದ್ದರಿಂದ, ಅವರ ವಿರುದ್ಧದ ನೋಟಿಸ್ ರದ್ದುಪಡಿಸಲಾಗುತ್ತಿದೆ ಎಂದು ತಿಳಿಸಿದ ನ್ಯಾಯಪೀಠ, 2024ರ ಜುಲೈ 16ರಂದು ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದುಪಡಿಸಿದೆ. ಇದೇ ವೇಳೆ, ಪ್ರಕರಣವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂದಿರುಗಿಸಿರುವ ಹೈಕೋರ್ಟ್, ಈ ಆದೇಶದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ಗಮನದಲ್ಲಿರಿಸಿಕೊಂಡು ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಬೇಕು. ಆದೇಶ ಪ್ರತಿ ದೊರೆತ ನಾಲ್ಕು ವಾರಗಳ ಒಳಗೆ ಈ ಪ್ರಕ್ರಿಯೆ ಆರಂಭಿಸಬೇಕು ಎಂದು ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿದೆ.
ಪ್ರಕರಣವೇನು?
ಕಳೆದ ಲೋಕಸಭೆ ಚುನಾವಣೆ ವೇಳೆ ಬಾಗಲಕೋಟೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡುವ ಸಂದರ್ಭದಲ್ಲಿ ಯತ್ನಾಳ್ ಅವರು ನನ್ನ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಚಿವ ಶಿವಾನಂದ ಎಸ್. ಪಾಟೀಲ್ ಅವರು ಖಾಸಗಿ ದೂರು ದಾಖಲಿಸಿದ್ದರು. ದೂರಿನ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೂರನ್ನು ವಿಚಾರಣೆಗೆ ಅಂಗೀಕರಿಸಿ ಬಿಎನ್‌ಎಸ್‌ಎಸ್ ಸೆಕ್ಷನ್ 223 ಅಡಿಯಲ್ಲಿ ನೋಟಿಸ್ ಜಾರಿ ಮಾಡಿತ್ತು. ಅದನ್ನು ಪ್ರಶ್ನಿಸಿ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿದಾರ ಯತ್ನಾಳ್ ಪರವಾಗಿ ವಕೀಲ ವೆಂಕಟೇಶ್ ಪಿ. ದಳವಾಯಿ ಹಾಗೂ ಶಿವಾನಂದ ಎಸ್. ಪಾಟೀಲ್ ಪರವಾಗಿ ನಿವೇದಿತಾ ಸಿ. ಶಿವಶಂಕರ್ ವಾದ ಮಂಡಿಸಿದ್ದರು.
Related Articles
Thank you for your comment. It is awaiting moderation.
Comments (0)