ಓಲಾ ಚಾಲಕನಿಂದ ಲೈಂಗಿಕ ಕಿರುಕುಳ ಪ್ರಕರಣ; ಸಂತ್ರಸ್ತೆಗೆ ಪರಿಹಾರ ಪಾವತಿಸಲು ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ

ಬೆಂಗಳೂರು: ಆರು ವರ್ಷಗಳ ಹಿಂದೆ ಓಲಾ ಕ್ಯಾಬ್‌ನಲ್ಲಿ ಪ್ರಯಾಣಿಸುವ ವೇಳೆ ಚಾಲಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದರೆನ್ನಲಾದ ಯುವತಿಗೆ 5 ಲಕ್ಷ ರೂ. ಪರಿಹಾರ ಪಾವತಿಸುವಂತೆ ಓಲಾ ಮಾತೃ ಸಂಸ್ಥೆ ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್‌ ಲಿಮಿಟೆಡ್‌ಗೆ ನಿರ್ದೇಶಿಸಿ ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ತಡೆಯಾಜ್ಞೆ ನೀಡಿದೆ.

ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಎಎನ್‌ಐ ಟೆಕ್ನಾಲಜೀಸ್‌ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಸ್‌.ಆರ್‌. ಕೃಷ್ಣ ಕುಮಾರ್‌ ಹಾಗೂ ನ್ಯಾಯಮೂರ್ತಿ ಎಂ.ಜಿ. ಉಮಾ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಮೇಲ್ಮನವಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ, ಇದು 5 ಲಕ್ಷ ರೂ. ಪರಿಹಾರ ಪಾವತಿಸುವ ವಿಚಾರವಲ್ಲ. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ನಿಷೇಧ, ತಡೆ ಮತ್ತು ಪರಿಹಾರ) ಕಾಯ್ದೆ-2013ರ ವ್ಯಾಖ್ಯಾನಕ್ಕೆ ಸಂಬಂಧಿಸಿದ ವಿಚಾರವಾಗಿದೆ. ಚಾಲಕರಿಗೆ ನಾವು ಉದ್ಯೋಗ ನೀಡಿಲ್ಲ. ಓಲಾ ಸೇವೆಯನ್ನು ಚಾಲಕರು ಬಳಸಿಕೊಳ್ಳುತ್ತಾರೆ. ಚಾಲಕರು ಸ್ವತಂತ್ರ ಗುತ್ತಿಗೆದಾರರಾಗಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಆಗ ನ್ಯಾಯಪೀಠ, ಪ್ರಕರಣದ ವಿಚಾರಣೆ ಅಗತ್ಯವಿದೆ. ಆದ್ದರಿಂದ, ಏಕಸದಸ್ಯ ಪೀಠದ ಆದೇಶಕ್ಕೆ ಸದ್ಯಕ್ಕೆ ತಡೆ ನೀಡಲಾಗಿದೆ ಎಂದು ತಿಳಿಸಿತು. ಮೇಲ್ಮನವಿಯಲ್ಲಿನ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿದ ಪೀಠ, ವಿಚಾರಣೆಯನ್ನು ಅಕ್ಟೋಬರ್‌ 28ಕ್ಕೆ ಮುಂದೂಡಿತು.

ಪ್ರಕರಣವೇನು?
ಆರು ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಓಲಾ ಕ್ಯಾಬ್‌ನಲ್ಲಿ ಪ್ರಯಾಣಿಸುವಾಗ ಚಾಲಕನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದು, ಚಾಲಕನ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ಸಂತ್ರಸ್ತ ಯುವತಿ ಎಎನ್‌ಐ ಟೆಕ್ನಾಲಜೀಸ್‌ಗೆ ದೂರು ನೀಡಿದ್ದರು. ಆಂತರಿಕ ದೂರುಗಳ ಸಮಿತಿಯು ತಮ್ಮ ದೂರನ್ನು ಪರಿಗಣಿಸಿ ಅದರ ಬಗ್ಗೆ ವಿಚಾರಣೆ ನಡೆಸುವ ಅಧಿಕಾರ ಹೊಂದಿಲ್ಲ ಎಂದು ಕಂಪನಿ ಸಂತ್ರಸ್ತೆಗೆ ತಿಳಿಸಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಯುವತಿಯ ಅರ್ಜಿಯನ್ನು ಸೆಪ್ಟೆಂಬರ್‌ 30ರಂದು ಪುರಸ್ಕರಿಸಿದ್ದ ಏಕಸದಸ್ಯ ನ್ಯಾಯಪೀಠ, ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರದ ಜತೆಗೆ ವ್ಯಾಜ್ಯದ ವೆಚ್ಚವಾಗಿ ಹೆಚ್ಚುವರಿ 50 ಸಾವಿರ ರೂ. ಪಾವತಿಸಬೇಕು ಎಂದು ಕಂಪನಿಗೆ ಆದೇಶಿಸಿತ್ತು. ಇದಲ್ಲದೆ ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರದ ಹೆಚ್ಚುವರಿ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಯವರು ವೈಯಕ್ತಿಕವಾಗಿ 1 ಲಕ್ಷ ರೂ. ಗಳನ್ನು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ (ಕೆಎಸ್‌ಎಲ್‌ಎಸ್‌ಎ) ಪಾವತಿಸಬೇಕು. ಸಂತ್ರಸ್ತೆ ನೀಡಿದ ದೂರಿನ ಕುರಿತು ಕಂಪನಿಯ ಆಂತರಿಕ ದೂರುಗಳ ಸಮಿತಿ ವಿಚಾರಣೆ ನಡೆಸಬೇಕು. ಆ ವಿಚಾರಣಾ ಪ್ರಕ್ರಿಯೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸಬೇಕು. ಸಮಿತಿಯ ವರದಿಯನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಕಂಪನಿ ಮೇಲ್ಮನವಿ ಸಲ್ಲಿಸಿದೆ.

Related Articles

Comments (0)

Leave a Comment