ದರ್ಶನ್ ಆರೋಗ್ಯ ಸ್ಥಿತಿಯ ವೈದ್ಯಕೀಯ ವರದಿ ಸಲ್ಲಿಸಿ; ಬಳ್ಳಾರಿ ಜೈಲು ಅಧಿಕಾರಿಗೆ ಹೈಕೋರ್ಟ್ ನಿರ್ದೇಶನ
- by Jagan Ramesh
- October 22, 2024
- 186 Views
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿ ಸಲ್ಲಿಸುವಂತೆ ಬಳ್ಳಾರಿ ಜೈಲು ಅಧಿಕಾರಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ದರ್ಶನ್ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿ, ಅರ್ಜಿದಾರರು ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದು, ಅವರಿಗೆ ವಿಜಯನಗರ ವೈದ್ಯಕೀಯ ಸಂಸ್ಥೆಯಲ್ಲಿ (ವಿಮ್ಸ್) ಸೋಮವಾರ ಎಂಆರ್ಐ ಸ್ಕ್ಯಾನ್ ಮಾಡಿಸಲಾಗಿದೆ. ವೈದ್ಯರು ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಹೇಳಿದ್ದಾರೆ. ಆದ್ದರಿಂದ, ವೈದ್ಯಕೀಯ ಕಾರಣಕ್ಕೆ ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.
ವಾದ ಆಲಿಸಿದ ನ್ಯಾಯಪೀಠ, ದರ್ಶನ್ ಆರೋಗ್ಯ ಸ್ಥಿತಿಗೆ ಸಂಬಂಧಿಸಿದಂತೆ ವೈದ್ಯಕೀಯ ವರದಿಯನ್ನು ನ್ಯಾಯಲಯಕ್ಕೆ ಸಲ್ಲಿಸುವಂತೆ ಬಳ್ಳಾರಿ ಜೈಲು ಅಧಿಕಾರಿಗೆ ನಿರ್ದೇಶಿಸಿತಲ್ಲದೆ, ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಷನ್ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿತು.
ದರ್ಶನ್ ಮನವಿ ಏನು?
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ನಗರದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಅಕ್ಟೋಬರ್ 14ರಂದು ವಜಾಗೊಳಿಸಿತ್ತು. ಇದರಿಂದ, ದರ್ಶನ್ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದಲ್ಲಿ ಪ್ರತ್ಯಕ್ಷ ದರ್ಶಿಗಳ ಹೇಳಿಕೆಯನ್ನು ತಡವಾಗಿ ದಾಖಲಿಸಿಕೊಳ್ಳಲಾಗಿದೆ. ಶವಪರೀಕ್ಷೆಯನ್ನೂ ವಿಳಂಬವಾಗಿ ಮಾಡಲಾಗಿದೆ. ಪ್ರತ್ಯಕ್ಷ ಸಾಕ್ಷಿಗಳನ್ನು ತನಿಖಾಧಿಕಾರಿಗಳೇ ಸೃಷ್ಟಿಸಿದ್ದಾರೆ. ಪ್ರಕರಣದ ಇತರ ಆರೋಪಿಗಳೊಂದಿಗೆ ಒಳಸಂಚು ರೂಪಿಸಿಲ್ಲ. ಈಗಾಗಲೇ ತನಿಖೆ ಪೂರ್ಣಗೊಂಡಿದ್ದು, ಹೆಚ್ಚಿನ ತನಿಖೆಯ ಅಗತ್ಯವಿಲ್ಲ. ಜತೆಗೆ, ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದು, ಸೂಕ್ತ ಚಿಕಿತ್ಸೆ ಪಡೆಯಲು ಜಾಮೀನು ಮಂಜೂರು ಮಾಡಬೇಕು ಎಂದು ದರ್ಶನ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
Related Articles
Thank you for your comment. It is awaiting moderation.
Comments (0)