ನಟ ದರ್ಶನ್‌ಗೆ ಶಸ್ತ್ರಚಿಕತ್ಸೆಯ ಅಗತ್ಯವಿದೆ; ಹೈಕೋರ್ಟ್‌ಗೆ ವಿಮ್ಸ್ ವೈದ್ಯಕೀಯ ವರದಿ ಸಲ್ಲಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಅವರಿಗೆ ಫಿಸಿಯೋಥೆರಪಿ ಹಾಗೂ ಬೆನ್ನುಹುರಿ ನೋವಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದ್ದು, ಬಳ್ಳಾರಿ ಅಥವಾ ಬೆಂಗಳೂರಿನಲ್ಲಿ ಶಸ್ತ್ರಚಿಕಿತ್ಸೆ ನಡೆಸಬಹುದು ಎಂದು ಹೈಕೋರ್ಟ್‌ಗೆ ಸಲ್ಲಿಸಲಾದ ವೈದ್ಯಕೀಯ ವರದಿಯಲ್ಲಿ ಹೇಳಲಾಗಿದೆ.

ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್‌ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಅರ್ಜಿಯ ಕಳೆದ ವಿಚಾರಣೆ ವೇಳೆ ಹೈಕೋರ್ಟ್ ನೀಡಿದ್ದ ನಿರ್ದೇಶನದಂತೆ ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ವಿಮ್ಸ್) ವೈದ್ಯಕೀಯ ವರದಿಯನ್ನು ಬಳ್ಳಾರಿ ಜೈಲು ಅಧಿಕಾರಿಗಳು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದರು.

ಲಕೋಟೆ ತೆರೆದು ವರದಿ ಪರಿಶೀಲಿಸಿದ ನ್ಯಾಯಪೀಠ, ಅರ್ಜಿದಾರ ದರ್ಶನ್‌ಗೆ ಫಿಸಿಯೋಥೆರಪಿ ಹಾಗೂ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಬಳ್ಳಾರಿ ಅಥವಾ ಬೆಂಗಳೂರಿನಲ್ಲಿ ಶಸ್ತ್ರಚಿಕಿತ್ಸೆ ನಡೆಸಬಹುದು ಎಂದೂ ಹೇಳಲಾಗಿದೆ ಎಂದು ನುಡಿಯಿತು.

ವಿಚಾರಣೆಗೆ ಹಾಜರಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪಿ. ಪ್ರಸನ್ನ ಕುಮಾರ್, ದರ್ಶನ್ ಅವರ ವೈದ್ಯಕೀಯ ವರದಿಯ ಪ್ರತಿಯನ್ನು ನಮಗೆ ನೀಡಬೇಕು. ಅದನ್ನು ಪರಿಶೀಲಿಸಿ, ಅಗತ್ಯಬಿದ್ದರೆ ಆಕ್ಷೇಪಣೆ ಸಲ್ಲಿಸಲಾಗುವುದು. ಆನಂತರ ವಾದ ಮಂಡಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ದರ್ಶನ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿ, ಅರ್ಜಿದಾರರು ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವಿಮ್ಸ್ ಹೇಳಿದೆ. ಶಸ್ತ್ರಚಿಕಿತ್ಸೆ ಮಾಡದಿದ್ದರೆ ಮೂತ್ರಪಿಂಡ ಮತ್ತಿತರ ಅಂಗಾಗಳಿಗೆ ಸಮಸ್ಯೆಯಾಗಲಿದೆ. ಬಳ್ಳಾರಿಯಲ್ಲಿ ಸೌಲಭ್ಯದ ಕೊರತೆಯಿರುವುದರಿಂದ ಬೆಂಗಳೂರಿನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅನುಮತಿಸಬೇಕು ಎಂದು ಮನವಿ ಮಾಡಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರು ಮತ್ತು ಸರ್ಕಾರಿ ಅಭಿಯೋಜಕರಿಗೆ ವೈದ್ಯಕೀಯ ವರದಿಯ ಪ್ರತಿ ಒದಗಿಸುವಂತೆ ಸೂಚಿಸಿ ವಿಚಾರಣೆಯನ್ನು ಮಂಗಳವಾರ (ಅಕ್ಟೋಬರ್ 29) ಮಧ್ಯಾಹ್ನ 2.30ಕ್ಕೆೆ ಮುಂದೂಡಿತು.

ದರ್ಶನ್ ಮನವಿ ಏನು?
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ದರ್ಶನ್‌ ಸಲ್ಲಿಸಿದ್ದ ಅರ್ಜಿಯನ್ನು ನಗರದ 57ನೇ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಅಕ್ಟೋಬರ್ 14ರಂದು ವಜಾಗೊಳಿಸಿತ್ತು. ಇದರಿಂದ, ದರ್ಶನ್ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದಲ್ಲಿ ಪ್ರತ್ಯಕ್ಷ ದರ್ಶಿಗಳ ಹೇಳಿಕೆಯನ್ನು ತಡವಾಗಿ ದಾಖಲಿಸಿಕೊಳ್ಳಲಾಗಿದೆ. ಶವಪರೀಕ್ಷೆಯನ್ನೂ ವಿಳಂಬವಾಗಿ ಮಾಡಲಾಗಿದೆ. ಪ್ರತ್ಯಕ್ಷ ಸಾಕ್ಷಿಗಳನ್ನು ತನಿಖಾಧಿಕಾರಿಗಳೇ ಸೃಷ್ಟಿಸಿದ್ದಾರೆ. ಪ್ರಕರಣದ ಇತರ ಆರೋಪಿಗಳೊಂದಿಗೆ ಒಳಸಂಚು ರೂಪಿಸಿಲ್ಲ. ಈಗಾಗಲೇ ತನಿಖೆ ಪೂರ್ಣಗೊಂಡಿದ್ದು, ಹೆಚ್ಚಿನ ತನಿಖೆಯ ಅಗತ್ಯವಿಲ್ಲ. ಜತೆಗೆ, ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದು, ಸೂಕ್ತ ಚಿಕಿತ್ಸೆ ಪಡೆಯಲು ಜಾಮೀನು ಮಂಜೂರು ಮಾಡಬೇಕು ಎಂದು ದರ್ಶನ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

Related Articles

Comments (0)

Leave a Comment