ಮುಡಾ ಹಗರಣದ ತನಿಖೆ ಸಿಬಿಐಗೆ ವಹಿಸಲು ಕೋರಿದ ಅರ್ಜಿ; ಸಿಎಂ ಸಿದ್ದರಾಮಯ್ಯಗೆ ತುರ್ತು ನೋಟಿಸ್ ಜಾರಿ

ಬೆಂಗಳೂರು: ಮುಡಾ ಹಗರಣದ ತನಿಖೆಯನ್ನು ಕೇಂದ್ರೀಯ ತನಿಖಾ ಸಂಸ್ಥೆಗೆ (ಸಿಬಿಐ) ವಹಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿರುವ ಹೈಕೋರ್ಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಪತ್ನಿ ಸೇರಿ ಪ್ರಕರಣದ ನಾಲ್ವರು ಆರೋಪಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಿದೆ.

ಸಿಎಂ ಸಿದ್ದರಾಮಯ್ಯ ಮತ್ತವರ ಕುಟುಂಬ ಸದಸ್ಯರು ಭಾಗಿಯಾಗಿದ್ದಾರೆಂದು ಆರೋಪಿಸಲಾದ ಮುಡಾ ಬದಲಿ ನಿವೇಶನಗಳ ಹಂಚಿಕೆ ಹಗರಣದ ತನಿಖೆ ನಡೆಸಲು ಸಿಬಿಐ‌ಗೆ ನಿರ್ದೇಶಿಸುವಂತೆ ಕೋರಿ ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿದಾರರ ಪರ ಹಿರಿಯ ವಕೀಲ ಕೆ.ಜಿ. ರಾಘವನ್ ಅವರ ವಾದ ಆಲಿಸಿದ ನ್ಯಾಯಪೀಠ, ಗೃಹ ಸಚಿವಾಲಯ, ಗೃಹ ಇಲಾಖೆ, ಸಿಬಿಐ, ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿತು. ಜತೆಗೆ, ಪ್ರಕರಣದ ಆರೋಪಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜೆ. ದೇವರಾಜು ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಿತು.

ಅರ್ಜಿ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ 2 ವಾರಗಳಲ್ಲಿ ಸಲ್ಲಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿ ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿದ ನ್ಯಾಯಪೀಠ, ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ನವೆಂಬರ್ 25ರ ವರೆಗಿನ ವಸ್ತುಸ್ಥಿತಿ ವರದಿಯನ್ನು‌ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿತು.

ತನಿಖೆ ವಿಶ್ವಾಸಾರ್ಹವಾಗಿರಬೇಕು:
ವಿಚಾರಣೆ ಆರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ಹಿರಿಯ ವಕೀಲ ಕೆ.ಜಿ. ರಾಘವನ್‌, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂಬುದು ನಮ್ಮ ಕೋರಿಕೆಯಾಗಿದೆ ಎಂದರು. ಆಗ ನ್ಯಾಯಪೀಠ, ಲೋಕಾಯುಕ್ತ ತನಿಖೆ ನಡೆಸುತ್ತಿಲ್ಲವೇ? ಎಂದು ಪ್ರಶ್ನಿಸಿತು. ಅದಕ್ಕೆ ಪ್ರತಿಕ್ರಿಯಿಸಿದ ರಾಘವನ್‌, ಈಗ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಇಂಥ ಪ್ರಕರಣಗಳಲ್ಲಿ ತನಿಖಾ ಪ್ರಕ್ರಿಯೆ ಸಾರ್ವಜನಿಕರ ವಿಶ್ವಾಸ ಉಳಿಯುವಂತೆ ನಡೆಯಬೇಕು. ಆದ್ದರಿಂದ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿದರಲ್ಲದೆ, ಪ್ರಕರಣ ಸಿಬಿಐ ತನಿಖೆಯ ವ್ಯಾಪ್ತಿಗೆ ಒಳಪಡಲಿದೆಯೇ ಎಂಬುದನ್ನು ಕಾನೂನು ಮಾನದಂಡಗಳ ಮೂಲಕ ನೋಡಿ ನ್ಯಾಯಾಲಯ ನಿರ್ಧರಿಸಬಹುದು ಎಂದು ಹೇಳಿದರು.

ಅರ್ಜಿಯಲ್ಲೇನಿದೆ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾದಿಂದ 55.80 ಕೋಟಿ ಮೌಲ್ಯದ ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಈ ಸಂಬಂಧ ತನಿಖೆ ನಡೆಸಿ ಕ್ರಮ ಜರುಗಿಸುವಂತೆ ಕೋರಿ ಮೊದಲಿಗೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿತ್ತು. ಆದರೆ, ಪೊಲೀಸರು ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಿಸಲು ನಿರಾಕರಿಸಿದ್ದರು. ಬಳಿಕ ಸಿಬಿಐ ಸೇರಿ ವಿವಿಧ ತನಿಖಾ ಸಂಸ್ಥೆಗಳಿಗೆ ಪ್ರಕರಣದ ತನಿಖೆ ನಡೆಸುವಂತೆ ದೂರು ನೀಡಲಾಗಿತ್ತು. ಆ ದೂರಿನ ಆಧಾರದ ಮೇಲೆ ಯಾವುದೇ ಕ್ರಮ ಜರುಗಿಸದ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಲಾಗಿತ್ತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಈ ನಡುವೆ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ/ಪ್ರಾಸಿಕ್ಯೂಷನ್‌‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಲಾಗಿತ್ತು. ಅದನ್ನು ಪುರಸ್ಕರಿಸಿದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‌/ತನಿಖೆಗೆ ಅನುಮತಿ ನೀಡಿ ಆಗಸ್ಟ್ 16ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಸೆಪ್ಟೆಂಬರ್ 24ರಂದು ವಜಾಗೊಳಿಸಿದ್ದ ಹೈಕೋರ್ಟ್‌, ರಾಜ್ಯಪಾಲರ ಆದೇಶ ಎತ್ತಿಹಿಡಿದಿದೆ. ಹೈಕೋರ್ಟ್‌ ತೀರ್ಪಿನ ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಕರಣ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿಗೆ ನಿರ್ದೇಶಿಸಿ ಆಗಸ್ಟ್ 25ರಂದು ಆದೇಶಿಸಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ನಿಷ್ಪಕ್ಷಪಾತ ತನಿಖೆ ಅಸಾಧ್ಯ:
ಸಿದ್ದಾರಾಮಯ್ಯ ಅವರು ರಾಜ್ಯದ ಹಾಲಿ ಮುಖ್ಯಮಂತ್ರಿಗಳಾಗಿದ್ದು, ರಾಜ್ಯದ ಇಲಾಖೆಗಳ ಮೇಲೆ ಅದರಲ್ಲೂ ಮುಖ್ಯವಾಗಿ ಲೋಕಾಯುಕ್ತ ಮತ್ತು ಪೊಲೀಸ್‌ ಪ್ರಾಧಿಕಾರಗಳಂತಹ ರಾಜ್ಯ ತನಿಖಾ ಸಂಸ್ಥೆಗಳ ಮೇಲೆ ಭಾರೀ ಪ್ರಭಾವ ಬೀರುವ ಸಾಧ್ಯತೆಯಿದೆ. ಇಂತಹ ಸಂಸ್ಥೆಗಳು ಮುಖ್ಯಮಂತ್ರಿಗಳ ವಿರುದ್ಧದ ಆರೋಪಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವ ಸಾಧ್ಯತೆಯಿಲ್ಲ. ರಾಜ್ಯ ಸರ್ಕಾರದ ಮುಖ್ಯಸ್ಥರಾಗಿರುವ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ರಾಜ್ಯ ಆಡಳಿತ ಯಂತ್ರದ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಒಂದು ವೇಳೆ ತನಿಖಾಧಿಕಾರಿಗಳ ಮೇಲೆ ಪ್ರಭಾವ ಬೀರಿದರೆ ತನಿಖೆಯ ಫಲಿತಾಂಶ ನ್ಯಾಯಸಮ್ಮತ ಮತ್ತು ನಿಷ್ಪಕ್ಷಪಾತವಾಗಿರುವುದಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ಅರ್ಜಿದಾರರ ಮನವಿ ಏನು?
ಈ ಎಲ್ಲ ಕಾರಣಗಳಿಂದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈಗಾಗಲೇ ಲೋಕಾಯುಕ್ತ ಪೊಲೀಸರಿಗೆ ವಹಿಸಿರುವ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು. ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸಬೇಕು. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ನಾಮ ನಿರ್ದೇಶಿಸುವಂತಹ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳೊಬ್ಬರಿಂದ ಸಿಬಿಐ ತನಿಖೆ ಮೇಲ್ವಿಚಾರಣೆ ನಡೆಸಲು ನಿರ್ದೇಶಿಸಬೇಕು ಅಥವಾ ರಾಜ್ಯಪಾಲರ ಆದೇಶ ಎತ್ತಿಹಿಡಿದು ಹೊರಡಿಸಿರುವ ತೀರ್ಪಿನಲ್ಲಿ ಹೈಕೋರ್ಟ್‌ ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ಗಮನದಲ್ಲಿ ಇರಿಸಿಕೊಂಡು ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Related Articles

Comments (0)

Leave a Comment