ಅಲ್ಲಮಪ್ರಭು ದೇವಾಲಯ ಪ್ರಾಚೀನ ಸ್ಮಾರಕವೇ ಎಂಬುದನ್ನು ನಿರ್ಧರಿಸಲು ತ್ರಿಸದಸ್ಯ ಸಮಿತಿ ರಚನೆಗೆ ಹೈಕೋರ್ಟ್ ನಿರ್ದೇಶನ
- by Jagan Ramesh
- November 11, 2024
- 50 Views
ಬೆಂಗಳೂರು: ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿರುವ ಅಲ್ಲಮಪ್ರಭು ಸ್ವಾಮಿ ದೇವಸ್ಥಾನ, ಅದರ ಶಿಲ್ಪಕಲೆ ಹಾಗೂ ಪ್ರಾಚೀನತೆಯು ಕರ್ನಾಟಕ ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕಗಳು ಹಾಗೂ ಪುರಾತತ್ವ ಸ್ಥಳಗಳ ಮತ್ತು ಅವಶೇಷಗಳ ಅಧಿನಿಯಮ-1961ರ ಅನ್ವಯ ಪುರಾತನ ಸ್ಮಾರಕಗಳ ವ್ಯಾಪ್ತಿಗೆ ಬರಲಿದೆಯೇ ಎಂಬ ಬಗ್ಗೆ ನಿರ್ಧರಿಸಲು ತ್ರಿಸದಸ್ಯ ತಜ್ಞರ ಸಮಿತಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಅಪಾಯದ ಅಂಚಿನಲ್ಲಿರುವ ಅಲ್ಲಮಪ್ರಭು ಸ್ವಾಮಿ ದೇವಸ್ಥಾನವನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರಿಸಬೇಕು ಹಾಗೂ ದೇವಸ್ಥಾನವನ್ನು ಸಂರಕ್ಷಿತ ಪುರಾತನ ಸ್ಮಾರಕವೆಂದು ಘೋಷಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಮಹಾರಾಷ್ಟ್ರದ ಕೊಲ್ಹಾಪುರದ ಕಾನೂನು ವಿದ್ಯಾರ್ಥಿ ನಿಖಿಲ್ ವಿಠಲ್ ಪಾಟೀಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಕೇಂದ್ರ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ವಾದ ಮಂಡಿಸಿ, 17-18ನೇ ಶತಮಾನದಲ್ಲಿ ನಿರ್ಮಾಣಗೊಂಡಿರುವ ಅಲ್ಲಮ ಪ್ರಭು ದೇವಾಲಯ ಪ್ರಾಚೀನ ಸ್ಮಾರಕದ ಎಲ್ಲ ಗುಣಲಕ್ಷಣಗಳನ್ನು ಹೊಂದಿದೆ. 1961ರ ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕಗಳು ಹಾಗೂ ಪುರಾತತ್ವ ಸ್ಥಳಗಳ ಮತ್ತು ಅವಶೇಷಗಳ ಅಧಿನಿಯಮದ ಅನುಸಾರ ಈ ದೇವಾಲಯ ಪ್ರಾಚೀನ ಸ್ಮಾರಕಗಳ ವ್ಯಾಖ್ಯಾನದ ವ್ಯಾಪ್ತಿಗೆ ಬರಲಿದೆ. ಆದರೆ, ಕಾಯ್ದೆಯಡಿ ದೇವಸ್ಥಾನವನ್ನು ರಾಷ್ಟ್ರೀಯ ಮಹತ್ವದ ಸ್ಮಾರಕ ಎಂದು ಘೋಷಿಸಲಾಗಿಲ್ಲ. ಒಂದೊಮ್ಮೆ, ಕೇಂದ್ರ ಸರ್ಕಾರ ಘೋಷಣೆ ಮಾಡಿಲ್ಲ ಎಂದಾದರೆ ಅದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರಲಿದೆ. ಆ ಬಗ್ಗೆ ರಾಜ್ಯ ಸರ್ಕಾರ ನಿರ್ಧರಿಸಬೇಕು ಎಂದರು.
ವಾದ ಆಲಿಸಿದ ಪೀಠ, ಅಲ್ಲಮಪ್ರಭು ಸ್ವಾಮಿ ದೇವಾಲಯವು 1961ರ ಅಧಿನಿಯಮಗಳ ಅನುಸಾರ ಪುರಾತನ ಸ್ಮಾರಕಗಳ ವ್ಯಾಪ್ತಿಗೆ ಬರಲಿದೆಯೇ ಎಂಬುದನ್ನು ನಿರ್ಧರಿಸಲು ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿಯನ್ನೊಳಗೊಂಡ ಮೂವರು ಸದಸ್ಯರ ಸಮಿತಿ ರಚನೆ ಮಾಡಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿತಲ್ಲದೆ, ಆ ಸಮಿತಿಯು ಅಧ್ಯಯನ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಡಿಸೆಂಬರ್ 10ಕ್ಕೆೆ ಮುಂದೂಡಿತು.
Related Articles
Thank you for your comment. It is awaiting moderation.
Comments (0)