ಕೆಎಎಸ್ ಪೂರ್ವಭಾವಿ ಪರೀಕ್ಷೆ ಮರಳಿ ನಡೆಸಲು ಕೋರಿದ ಅರ್ಜಿ; ಸರ್ಕಾರ, ಕೆಪಿಎಸ್‌ಸಿ‌ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಕೆ‌ಎಎಸ್ ಅಧಿಕಾರಿಗಳ ನೇಮಕಾತಿಗೆ ಕಳೆದ ಡಿಸೆಂಬರ್ 29ರಂದು ನಡೆಸಲಾಗಿದ್ದ ಮರುಪರೀಕ್ಷೆ ರದ್ದುಪಡಿಸಿ ಮತ್ತೊಮ್ಮೆ ಪೂರ್ವಭಾವಿ ಪರೀಕ್ಷೆ ನಡೆಸಲು ಆದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಹೈಕೋರ್ಟ್ ನೋಟಿಸ್‌ ಜಾರಿಗೊಳಿಸಿದೆ.

ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕಾಂತಕುಮಾರ್‌ ಸಲ್ಲಿಸಿರುವ ರಿಟ್ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್‌.ದೇವದಾಸ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರತಿವಾದಿಗಳಾದ ಸರ್ಕಾರ, ಕೆಪಿಎಸ್‌ಸಿ, ಗೃಹ ಇಲಾಖೆಗೆ ನೋಟಿಸ್‌ ಜಾರಿಗೊಳಿಸಿ, ವಿಚಾರಣೆಯನ್ನು ಜ.30ಕ್ಕೆ ಮುಂದೂಡಿತು.

ಇದೇ ವೇಳೆ, ಬೇಡಿಕೆ ಈಡೇರುವವರೆಗೆ ಅನಿರ್ದಿಷ್ಟಾವಧಿ ಧರಣಿ ಮುಂದುವರಿಸಲು ವಿದ್ಯಾರ್ಥಿಗಳ ಸಂಘಕ್ಕೆ ಅವಕಾಶ ನೀಡಬೇಕೆಂಬ ಅರ್ಜಿದಾರರ ಪರ ವಕೀಲರ ಮಧ್ಯಂತರ ಮನವಿಯನ್ನು ತಳ್ಳಿ ಹಾಕಿದ ನ್ಯಾಯಪೀಠ, ಧರಣಿ ಮುಂದುವರಿಸಲು ಅನುಮತಿ ನೀಡಲಾಗದು. ಅದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ನೀವು ಏನೇ ಮಾಡಿದರೂ ಕಾನೂನಿನ‌ ಅನುಸಾರವೇ ಮಾಡಿ, ಆಗಲೂ ಸರ್ಕಾರ ಏನಾದರೂ ಕ್ರಮ ಕೈಗೊಂಡರೆ ನ್ಯಾಯಾಲಯ ನಿಮ್ಮ ನೆರವಿಗೆ ಧಾವಿಸುತ್ತದೆ ಎಂದು ಭರವಸೆ ನೀಡಿತು.

ಅರ್ಜಿದಾರರ ವಾದವೇನು?
ವಿಚಾರಣೆ ವೇಳೆ ವಾದ ಮಂಡಿಸಿದ ಅರ್ಜಿದಾರರ ಪರ ವಕಿಲರು, 2024ರ ಆಗಸ್ಟ್ 27ರಂದು 384 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ ಕೆಪಿ‌ಎಸ್‌ಸಿ ಪೂರ್ವಭಾವಿ ಪರೀಕ್ಷೆ ನಡೆಸಿತ್ತು. ಆದರೆ, ಪ್ರಶ್ನೆಪತ್ರಿಕೆಯನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದ ಮಾಡುವಾಗ ಭಾರಿ ಲೋಪಗಳಾದ ಹಿನ್ನೆಲೆಯಲ್ಲಿ ಆ ಪರೀಕ್ಷೆ ರದ್ದುಗೊಳಿಸಿ ಡಿಸೆಂಬರ್ 29ರಂದು ಮರುಪರೀಕ್ಷೆ ನಡೆಸಲಾಗಿತ್ತು. ಆದರೆ, ಮರುಪರೀಕ್ಷೆಯಲ್ಲೂ ಅನುವಾದದಲ್ಲಿ ಲೋಪಗಳು ಮರುಕಳಿಸಿವೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಮರುಪರೀಕ್ಷೆಯಲ್ಲೂ ಅನುವಾದದಲ್ಲಿ ಲೋಪಗಳಾದ ಕಾರಣ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಅದರಲ್ಲೂ ಕನ್ನಡ ಮಾಧ್ಯಮ ಮತ್ತು ಗ್ರಾಮಾಂತರ ವಿದ್ಯಾರ್ಥಿಗಳಿಗೆ ಭಾರಿ ಅನ್ಯಾಯವಾಗಲಿದೆ. ಆದ್ದರಿಂದ, ಪರೀಕ್ಷೆ ರದ್ದುಪಡಿಸಿ ಮತ್ತೊಮ್ಮೆ ಪರೀಕ್ಷೆ ನಡೆಸುವಂತೆ ಸರ್ಕಾರ ಮತ್ತು ಕೆಪಿಎಸ್‌ಸಿಗೆ ನಿರ್ದೇಶನ ನೀಡಬೇಕು. ಇಲ್ಲವಾದರೆ ಮರುಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡುವಂತೆ ಆಯೋಗಕ್ಕೆ ನಿರ್ದೇಶಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

 

ಪ್ರಕರಣದ ವಿವರ:
WP 1686/2025
All Karnataka State Students Association Vs State Of Karnataka & Others

Related Articles

Comments (0)

Leave a Comment