ವೈದ್ಯಕೀಯ ಮೂಲಸೌಕರ್ಯ ಮೇಲ್ವಿಚಾರಣೆಗೆ ತ್ರಿಸದಸ್ಯ ಸಮಿತಿ ರಚಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
- by Jagan Ramesh
- January 25, 2025
- 94 Views

ಬೆಂಗಳೂರು: ರಾಜ್ಯದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ವೈದ್ಯಕೀಯ ಮೂಲಸೌಕರ್ಯ ಒದಗಿಸಲು ಹಾಗೂ ಸಿಬ್ಬಂದಿ ಕೊರತೆಯಾಗದಂತೆ ನಿರಂತರ ಮೇಲ್ವಿಚಾರಣೆ ನಡೆಸಲು ಮೂವರು ಸದಸ್ಯರ ಸಮಿತಿ ನೇಮಕ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ರಾಜ್ಯದಲ್ಲಿ 16 ಸಾವಿರಕ್ಕೂ ಅಧಿಕ ವೈದ್ಯಕೀಯ ಸಿಬ್ಬಂದಿ ಕೊರತೆ ಬಗ್ಗೆ ಮಾಧ್ಯಮದಲ್ಲಿ ಪ್ರಕಟವಾದ ವರದಿ ಆಧರಿಸಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಲೇವಾರಿ ಮಾಡಿರುವ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.
ತ್ರಿಸದಸ್ಯ ಸಮಿತಿ ರಚನೆಗೆ ಆದೇಶ:
ನಗರ, ಜಿಲ್ಲೆ ಮತ್ತು ಗ್ರಾಮೀಣ ಪ್ರದೇಶಗಳೂ ಸೇರಿ ರಾಜ್ಯದೆಲ್ಲೆಡೆ ವೈದ್ಯಕೀಯ ಮೂಲಸೌಕರ್ಯಗಳ ಮೇಲೆ ನಿಗಾವಹಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯ ನೇತೃತ್ವದಲ್ಲಿ ಮೂವರು ಸದಸ್ಯರ ಸಮಿತಿ ರಚಿಸಬೇಕು. ಆ ಸಮಿತಿ ಆರು ತಿಂಗಳಿಗೊಮ್ಮೆ ಸಭೆ ಸೇರಿ ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳೂ (ಪಿಎಚ್‌ಸಿ) ಸೇರಿ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿ, ಮೂಲಸೌಕರ್ಯ ಹಾಗೂ ಔಷಧ ಕೊರತೆ ಎಷ್ಟು ಪ್ರಮಾಣದಲ್ಲಿದೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಮಾಹಿತಿ ಅವಲೋಕಿಸಿ, ಅವುಗಳನ್ನು ಒದಗಿಸಲು ಕಾರ್ಯತಂತ್ರ ಅನುಸರಿಸಿ, ಜಾರಿಗೊಳಿಸುವ ಬಗ್ಗೆ ನಿರಂತರ ನಿಗಾ ವಹಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ರಾಜ್ಯ ಸರ್ಕಾರ ಪ್ರತಿ 6 ತಿಂಗಳಿಗೊಮ್ಮೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಗ್ಗೆ ಸರ್ವೇ ನಡೆಸಿ ಅಲ್ಲಿನ ಕೊರತೆಗಳನ್ನು ನಿವಾರಿಸಿ, ಉನ್ನತೀಕರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಪಿಎಚ್‌ಸಿಗಳನ್ನು ಆರಂಭಿಸಬೇಕು ಎಂದೂ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಆದ್ಯ ಕರ್ತವ್ಯ:
ವೈದ್ಯಕೀಯ ಮತ್ತು ಆರೋಗ್ಯ ರಕ್ಷಣೆಯ ಹಕ್ಕು ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದ್ದು, ಅದಕ್ಕಾಗಿ ಅಗತ್ಯ ಸೌಕರ್ಯಗಳನ್ನು ಒದಗಿಸುವುದು ಸರ್ಕಾರದ ಬಾಧ್ಯತೆಯಾಗಿದೆ. ಈ ನಿಟ್ಟಿನಲ್ಲಿ ಗ್ರಾಮಾಂತರ ಪ್ರದೇಶ ಸೇರಿ ಅಗತ್ಯವಿರುವೆಡೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ, ಸೂಕ್ತ ವೈದ್ಯಕೀಯ ಸಿಬ್ಬಂದಿ ನಿಯೋಜನೆ, ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕಾದ ಸಂವಿಧಾನ ಬದ್ಧ ಕರ್ತವ್ಯವನ್ನು ಸರ್ಕಾರ ನಿರ್ವಹಿಸಬೇಕಾಗುತ್ತದೆ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.
ರಾಜ್ಯದಲ್ಲಿ ವೈದ್ಯಕೀಯ ಸೌಕರ್ಯಗಳ ಅಗತ್ಯತೆಯನ್ನು ಪೂರೈಸಲು ಸರ್ಕಾರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸದಾ ಜಾಗೃತ ಮತ್ತು ಸಕ್ರಿಯವಾಗಿರಬೇಕಾಗುತ್ತದೆ. ಆ ಮೂಲಕ ಗ್ರಾಮೀಣ ಜನವಸತಿಯ ಮನೆ ಬಾಗಿಲಿಗೆ ವೈದ್ಯಕೀಯ ಸೌಕರ್ಯಗಳನ್ನು ಒದಗಿಸಿಕೊಡಬೇಕು ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ.
ಯೋಜನೆಗಳ ನಡುವೆ ಸಮನ್ವಯವಿರಲಿ:
ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಆರೋಗ್ಯ ಯೋಜನೆಗಳ ನಡುವೆ ಸಮನ್ವಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಸರ್ಕಾರಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಂಸ್ಥೆಗಳ ನಡುವೆ ಸಮನ್ವಯಕ್ಕಾಗಿ ಕಾರ್ಯತಂತ್ರವನ್ನು ರೂಪಿಸಬೇಕು. ಬಜೆಟ್‌ನಲ್ಲಿ ಆರೋಗ್ಯ ವಲಯಕ್ಕೆ ಹಂಚಿಕೆಯಾಗುವ ಹಣವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ವೈದ್ಯಕೀಯ ಆರೈಕೆ ಮತ್ತು ಚಿಕಿತ್ಸೆ ಅಗತ್ಯವಿರುವವರನ್ನು ಗುರುತಿಸಿ ಅಂಥವರಿಗೆ ಯಾವ ಯೋಜನೆಗಳಲ್ಲಿ ನೆರವು ನೀಡಬಹುದೆಂದು ಆಲೋಚಿಸಿ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಖಾಲಿ ಹುದ್ದೆ ಭರ್ತಿಗೆ ನಿರ್ದೇಶನ:
ರಾಜ್ಯದಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವುದಾಗಿ ಅರ್ಜಿ ವಿಚಾರಣೆ ವೇಳೆ ಸರ್ಕಾರ ನ್ಯಾಯಾಲಯಕ್ಕೆ ಭರವಸೆ ನೀಡಿದೆ. ಅದರಂತೆ, ಖಾಲಿ ಇರುವ ವಿವಿಧ ಶ್ರೇಣಿಯ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಭರ್ತಿ ಮಾಡಲು ಸರ್ಕಾರ ಸಾಧ್ಯವಾದ ಎಲ್ಲ ಕ್ರಮಗಳನ್ನು ಜರುಗಿಸಬೇಕು. ಈಗಾಗಲೇ ಆರಂಭಿಸಲಾಗಿರುವ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಅರ್ಜಿ ಇತ್ಯರ್ಥಪಡಿಸಲಾಗಿದ್ದರೂ, ಮೂಲಸೌಕರ್ಯ ಹಾಗೂ ಸಿಬ್ಬಂದಿ ಕೊರತೆ ನಿವಾರಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಕೋರ್ಟ್‌ಗೆ ವರದಿ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ನ್ಯಾಯಪೀಠ ಆದೇಶಿಸಿದೆ. ಪ್ರಕರಣದಲ್ಲಿ ಅಮಿಕಸ್ ಕ್ಯೂರಿಯಾಗಿ ನೇಮಕಗೊಂಡಿದ್ದ ವಕೀಲ ಶ್ರೀಧರ್ ಪ್ರಭು ಅರ್ಜಿ ವಿಚಾರಣೆಯಲ್ಲಿ ನ್ಯಾಯಾಲಯಕ್ಕೆ ಸಹಕರಿಸಿದ್ದರು.
Related Articles
Thank you for your comment. It is awaiting moderation.
Comments (0)