ಮುಡಾ ಹಗರಣ; ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್ ವಿರುದ್ಧದ ಇಡಿ ಸಮನ್ಸ್‌ಗೆ ಹೈಕೋರ್ಟ್ ತಡೆ
- by Jagan Ramesh
- January 27, 2025
- 688 Views

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾವರ್ತಿ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ಗೆ ಜಾರಿ ನಿರ್ದೇಶನಾಲಯ (ಇಡಿ) ನೀಡಿದ್ದ ಸಮನ್ಸ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಪ್ರಕರಣದಲ್ಲಿ ಇಡಿ ಜಾರಿಗೊಳಿಸಿದ್ದ ಸಮನ್ಸ್ ಪ್ರಶ್ನಿಸಿ ಸಿಎಂ ಪತ್ನಿ ಪಾರ್ವತಿ ಹಾಗೂ ಬೈರತಿ ಸುರೇಶ್ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳ ಕುರಿತು ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ನೀಡಿ ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿತು. ಹೈಕೋರ್ಟ್ ಮಧ್ಯಂತರ ಆದೇಶದಿಂದ ಮುಖ್ಯಮಂತ್ರಿಗಳ ಪತ್ನಿ ಹಾಗೂ ಸಚಿವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಅರ್ಜಿದಾರರ ಪರ ವಕೀಲರು ಹಾಗೂ ಇಡಿ ಪರ ವಕೀಲರ ವಾದ ಆಲಿಸಿದ ನ್ಯಾಯಾಲಯ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವ ಬಗ್ಗೆ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ವಿಶೇಷ ನ್ಯಾಯಾಲಯಕ್ಕೆ ಲೋಕಾಯುಕ್ತ ಪೊಲೀಸರ ತನಿಖಾ ವರದಿ ಸಲ್ಲಿಕೆ ಮುಂದೂಡಿದ್ದೇವೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಅಂತಿಮ ವರದಿ ಸಲ್ಲಿಕೆ ಮುಂದೂಡಿದ್ದೇವೆ. ಆದ್ದರಿಂದ, ಅರ್ಜಿದಾರರಿಗೆ ಇಡಿ ಜಾರಿಗೊಳಿಸಿರುವ ಸಮನ್ಸ್‌ಗಳಿಗೆ ತಡೆ ನೀಡಲಾಗುತ್ತಿದೆ ಎಂದು ಆದೇಶಿಸಿತು.
ಅರ್ಜಿದಾರರ ವಾದವೇನು?
ಇದಕ್ಕೂ ಮುನ್ನ ಬೈರತಿ ಸುರೇಶ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಅರ್ಜಿದಾರರು ಯಾವುದೇ ಅಧಿಸೂಚಿತ ಪ್ರಕರಣದ ಆರೋಪಿಯಲ್ಲ. ಆರೋಪಿಯಲ್ಲದಿದ್ದರೂ ಅವರಿಗೆ ಸಮನ್ಸ್ ಜಾರಿಗೊಳಿಸಿ, ಸೋಮವಾರ ಬೆಳಗ್ಗೆ 11ಗಂಟೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಇದೇ ಮಾದರಿಯ ಮತ್ತೊಂದು ಪ್ರಕಣದಲ್ಲಿ ಡಾ. ನಟೇಶ್‌ಗೆ (ಮುಡಾ ಮಾಜಿ ಆಯುಕ್ತ) ಇಡಿ ನೀಡಿದ್ದ ಸಮನ್ಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ. ಅದನ್ನೇ ಅನ್ವಯಿಸಿ ಈ ಪ್ರಕರಣದಲ್ಲೂ ತಡೆಯಾಜ್ಞೆ ನೀಡಬೇಕು. ಮುಂದಿನ ವಿಚಾರಣೆವರೆಗೂ ಇಡಿಯಿಂದ ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಿದರು.
ಇಡಿ ಪರವಾಗಿ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಕೆ. ಅರವಿಂದ ಕಾಮತ್, ಡಾ. ನಟೇಶ್ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿರಲಿಲ್ಲ. ಇಂದು ಡಾ. ನಟೇಶ್ ಪರ ಆದೇಶ ಬಂದಿದೆ ಅದರ ವಿವರ ತಿಳಿದಿಲ್ಲ. ಆದ್ದರಿಂದ, ಮಧ್ಯಂತರ ಆದೇಶ ನೀಡಬಾರದು ಎಂದು ಕೋರಿದರು.
ಸಿಎಂ ಪತ್ನಿ ಪಾರ್ವತಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ್ ಚೌಟ, 14 ನಿವೇಶನಗಳ ಅಕ್ರಮ ಹಂಚಿಕೆ ಆರೋಪವಿದೆ. ಅಪರಾಧದಿಂದ ಗಳಿಸಿದ ಹಣವಿಲ್ಲದಿದ್ದರೂ ತನಿಖೆ ನಡೆಸುತ್ತಿದೆ. ಆದ್ದರಿಂದ, ತನಿಖೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದರು.
ಇಡಿ ತನಿಖೆಗೆ ತುರ್ತು ಅಗತ್ಯವೇನಿದೆ?
ಆಗ ನ್ಯಾಯಪೀಠ, ಸಿಎಂ ಪ್ರಕರಣದ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವಾಗ ಇದರಲ್ಲೇಕೆ ಮುಂದುವರಿಯುತ್ತೀರಾ ಎಂದು ಇಡಿ ಪರ ವಕೀಲರನ್ನು ಪ್ರಶ್ನಿಸಿತು. ಅದಕ್ಕೆ ಉತ್ತರಿಸಿದ ಎಎಸ್‌ಜಿ, ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿ ಪಾರ್ವತಿ 2ನೇ ಆರೋಪಿಯಾಗಿದ್ದಾರೆ. ಅವರ ಮೇಲೆ ಅಕ್ರಮವಾಗಿ ಸೈಟ್‌ಗಳನ್ನು ಪಡೆದ ಆರೋಪವಿದೆ. ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್) ಕಾಯ್ದೆಯಡಿ ಅನುಸೂಚಿತ ಪ್ರಕರಣ ಇದೆ ಎಂದರು.
ಅದಕ್ಕೆ ನ್ಯಾಯಮೂರ್ತಿಗಳು, ಅಪರಾಧದಿಂದ ಗಳಿಸಿದ ಸಂಪತ್ತು ಈಗಿಲ್ಲವಲ್ಲ. ಇಡಿ ತನಿಖೆಯಿಂದ ಹೈಕೋರ್ಟ್ ತೀರ್ಪು ಕಾಯ್ದಿರಿಸಿರುವ ಪ್ರಕರಣಕ್ಕೆ ಹಾನಿಯಾಗಬಾರದು. ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಸುವಂತಿಲ್ಲವೆಂದು ನಾನೇ ಆದೇಶ ನೀಡಿದ್ದೇನೆ. ಈಗ ಇಡಿ ತನಿಖೆಗೆ ಅವಕಾಶ ನೀಡುವುದು ಹೇಗೆ? ಈಗಲೇ ತನಿಖೆ ನಡೆಸಬೇಕಾದ ತುರ್ತು ಅಗತ್ಯವೇನಿದೆ ಎಂದು ಪ್ರಶ್ನಿಸಿದರು.
ಎಎಸ್‌ಜಿ ಉತ್ತರಿಸಿ, ವಿಚಾರಣೆಗೆ ಹಾಜರಾಗಿ ದಾಖಲೆಗಳನ್ನು ಹಾಜರುಪಡಿಸಿ ಎಂದಷ್ಟೇ ಹೇಳಿದ್ದೇವೆ. ಇದರಿಂದ, ಹೈಕೋರ್ಟ್ ಮುಂದಿರುವ ಪ್ರಕರಣಕ್ಕೆ ಅಡ್ಡಿಯಾಗುವುದಿಲ್ಲ ಎಂದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಒಂದು ವೇಳೆ ಅವರು ಹಾಜರಾಗದಿದ್ದರೆ ನೀವು ನಾಳೆ ಅವರನ್ನು ಬಂಧಿಸಬಹುದು. ಆದ್ದರಿಂದ, ಈ ಬಗ್ಗೆ ಸೂಕ್ತ ಆದೇಶ ಹೊರಡಿಬೇಕಿದೆ ಎಂದು ತಿಳಿಸಿ, ಮಧ್ಯಂತರ ಆದೇಶ ನೀಡಿತು.
Related Articles
Thank you for your comment. It is awaiting moderation.
Comments (0)