ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಕೋರಿದ ಪಿಐಎಲ್; ವಿಜಯನಗರ ಜಿಲ್ಲಾಡಳಿತಕ್ಕೆ ಹೈಕೋರ್ಟ್ ನೋಟಿಸ್
- by Prashanth Basavapatna
- February 5, 2025
- 193 Views

ಬೆಂಗಳೂರು: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕು ಅರಸೀಕೆರೆ ಹೋಬಳಿಯ ಉಚ್ಚಂಗಿದುರ್ಗ ಗ್ರಾಮದ ಪುರಾತನ ಈಶ್ವರ ದೇವಸ್ಥಾನದ ಸುತ್ತಲಿನ ಸರ್ಕಾರಿ ಜಾಗವನ್ನು ಕೆಲ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿರುವುದಲ್ಲದೆ ಗ್ರಾಮಸ್ಥರು ಮತ್ತು ಭಕ್ತಾದಿಗಳ ದೇವಾಲಯ ಪ್ರವೇಶಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ಪಿಐಎಲ್ ಸಂಬಂಧ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಉಚ್ಚಂಗಿದುರ್ಗ ನಿವಾಸಿ ಎ. ಮನೋಹರ ಸೇರಿ ಹನ್ನೆರಡು ಮಂದಿ ಗ್ರಾಮಸ್ಥರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿಗಳಾದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ವಿಜಯನಗರ ಜಿಲ್ಲಾಧಿಕಾರಿ, ಹರಪನಹಳ್ಳಿ ಉಪ ವಿಭಾಗಾಧಿಕಾರಿ, ಹರಪನಹಳ್ಳಿ ತಹಸೀಲ್ದಾರ್, ವಿಜಯನಗರ ಜಿ.ಪಂ. ಸಿಇಒ ಹಾಗೂ ಒತ್ತುವರಿದಾರರು ಎನ್ನಲಾದ ಮೂವರು ಖಾಸಗಿ ವ್ಯಕ್ತಿಗಳಿಗೆ ನೋಟಿಸ್ ಜಾರಿಗೊಳಿಸಿತು. ಅರ್ಜಿಯಲ್ಲಿ ಪ್ರಸ್ತಾಪಿಸಲಾದ ವಿಷಯದ ಬಗ್ಗೆ ವಿವರಣೆ ನೀಡುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿ, ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿತು.
ಅರ್ಜಿಯಲ್ಲೇನಿದೆ?
ಉಚ್ಚಂಗಿದುರ್ಗ ಗ್ರಾಮಕ್ಕೆ ಸೇರಿದ ಜಮೀನಿನ ಸರ್ವೆ ಸಂಖ್ಯೆ 541ರಲ್ಲಿ 0-35 ಸೆಂಟ್ಸ್ ಸರ್ಕಾರಿ ಜಮೀನು ಇದ್ದು, ಅಲ್ಲಿ ಪುರಾತನ ಈಶ್ವರ ದೇವಸ್ಥಾನವಿದೆ. ಇದಕ್ಕೆ ಹೊಂದಿಕೊಂಡಂತೆ ಧರ್ಮಛತ್ರ ಒಂದಿದೆ. 1930ರಲ್ಲಿ ಉದ್ಘಾಟನೆಗೊಂಡಿರುವ ಧರ್ಮಛತ್ರವನ್ಮು ಗ್ರಾಮಸ್ಥರು ಧಾರ್ಮಿಕ ಕಾರ್ಯಕ್ರಮಗಳಿಗೆ ಬಳಕೆ ಮಾಡುತ್ತಿದ್ದರು. ಆದರೆ, ಸ್ಥಳೀಯ ಪ್ರಭಾವಿಗಳಾದ ಎಂ.ಜಿ. ಉದಯಶಂಕ್ರಗೌಡ, ಎಂ.ಜಿ. ರಾಜಶೇಖರಗೌಡ, ಎಂ.ಜಿ. ಸಿದ್ದನಗೌಡ ಈ ಜಾಗವನ್ನು ಒತ್ತುವರಿ ಮಾಡಿಕೊಂಡು ಅಲ್ಲಿ 12 ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿದ್ದಾರೆ. ದೇವಸ್ಥಾನಕ್ಕೆ ಬೀಗ ಹಾಕಿ, ಗ್ರಾಮಸ್ಥರು ಮತ್ತು ಭಕ್ತಾದಿಗಳು ದೇವಾಲಯ ಹಾಗೂ ಧರ್ಮಛತ್ರ ಬಳಸದಂತೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಈಶ್ವರ ದೇವಸ್ಥಾನ ಮತ್ತು ಧರ್ಮಛತ್ರದ ಜಾಗದ ಅಕ್ರಮ ಒತ್ತುವರಿ ತೆರವುಗೊಳಿಸುವಂತೆ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಬೇಕು. ಈ ಸಂಬಂಧ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ 2022ರ ಡಿಸೆಂಬರ್ 22 ಮತ್ತು 2023ರ ಫೆಬ್ರವರಿ 24ರಂದು ಸಲ್ಲಿಸಿರುವ ಮನವಿಯನ್ನು ಪರಿಗಣಿಸುವಂತೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
Related Articles
Thank you for your comment. It is awaiting moderation.
Comments (0)