ಮುಡಾ ಹಗರಣ ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾ; ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ‌ನಿರಾಳ

ಬೆಂಗಳೂರು: ಮುಖ್ಯಮಂತ್ರಿ‌ ಸಿದ್ದರಾಮಯ್ಯ ಮತ್ತವರ ಪತ್ನಿ ಬಿ.ಎಂ. ಪಾರ್ವತಿ ಪ್ರಮುಖ ಆರೋಪಿಗಳಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಅಕ್ರಮ ಹಂಚಿಕೆ ಹಗರಣದ ತನಿಖೆಯನ್ನು ಕೇಂದ್ರೀಯ ತನಿಖಾ ಸಂಸ್ಥೆಗೆ (ಸಿಬಿಐ) ವಹಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಸಿಎಂ ಸಿದ್ದರಾಮಯ್ಯ ಮತ್ತವರ ಕುಟುಂಬ ಸದಸ್ಯರು ಭಾಗಿಯಾಗಿದ್ದಾರೆಂದು ಆರೋಪಿಸಲಾದ ಮುಡಾ ಹಗರಣದ ತನಿಖೆ ನಡೆಸಲು ಸಿಬಿಐ‌ಗೆ ನಿರ್ದೇಶಿಸುವಂತೆ ಕೋರಿ ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿತು.

ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ವರದಿ ಪರಿಶೀಲಿಸಿದಾಗ ಲೋಕಾಯುಕ್ತ ಸಂಸ್ಥೆ ನಡೆಸಿರುವ ತನಿಖೆಯು ಲೋಪದೋಷ, ಪಕ್ಷಪಾತದಿಂದ ಕೂಡಿದೆ ಎಂದು ಕಂಡುಬಂದಿಲ್ಲ. ಆದ್ದರಿಂದ, ಪ್ರಕರಣವನ್ನು ಮುಂದುವರಿದ ತನಿಖೆ ಅಥವಾ ಮರುತನಿಖೆ ನಡೆಸಲು ಸಿಬಿಐಗೆ ಆದೇಶಿಸಲಾಗದು. ಬಾಹ್ಯ ಶಕ್ತಿಗಳಿಂದ ಲೋಕಾಯುಕ್ತ ಸಂಸ್ಥೆ ಪ್ರಭಾವಕ್ಕೆ ತುತ್ತಾಗುವ ಸಾಧ್ಯತೆಯ ಬಗ್ಗೆ ಈಗಾಗಲೇ ಸುಪ್ರೀಂಕೋರ್ಟ್‌ ಮತ್ತು ಹೈಕೋರ್ಟ್‌ ತಮ್ಮ ತೀರ್ಪುಗಳಲ್ಲಿ ಹೇಳಿವೆ. ಈ ಎಲ್ಲ ವಿಚಾರಗಳ ಹಿನ್ನೆಲೆಯಲ್ಲಿ ಅರ್ಜಿ ವಜಾಗೊಳಿಸಲಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಯಾವ ಸಂದರ್ಭದಲ್ಲಿ ಸಾಂವಿಧಾನಿಕ ನ್ಯಾಯಾಲಯಗಳು ತನಿಖೆ, ಮುಂದುವರಿದ ತನಿಖೆ ಮತ್ತು ಮರುತನಿಖೆಯನ್ನು ಸಿಬಿಐಗೆ ವಹಿಸಿವೆ? ಯಾವ ಸಂದರ್ಭದಲ್ಲಿ ನ್ಯಾಯಾಲಯ ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಬೇಕು? ಲೋಕಾಯುಕ್ತ ತನಿಖೆ ನಡೆಸಿ ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಪ್ರಕರಣವನ್ನು ಮುಂದುವರಿದ ತನಿಖೆ ಅಥವಾ ಮರುತನಿಖೆ ನಡೆಸಲು ಸಿಬಿಐಗೆ ಆದೇಶಿಸಬೇಕೆ? ಎಂಬ ಪ್ರಶ್ನೆಗಳನ್ನು ರೂಪಿಸಿರುವ ಹೈಕೋರ್ಟ್, ಅವುಗಳಿಗೆ ಮೇಲಿನಂತೆ ಉತ್ತರಿಸಿದೆ. ವಿಸ್ತೃತ ತೀರ್ಪಿನ ಪ್ರತಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

Related Articles

Comments (0)

Leave a Comment