ಸಿಇಟಿ ಬರೆಯಬೇಕಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ; ಸರ್ಕಾರ, ಕೆಇಎಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವೇಳೆ ಕೆಲ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದ ಕ್ರಮಕ್ಕೆ ಆಕ್ಷೇಪಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಹೈಕೋರ್ಟ್ ನೋಟಿಸ್‌ ಜಾರಿಗೊಳಿಸಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶನಿವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠ,  ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಜೂನ್ 9ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್‌. ಶ್ರೀರಂಗ, ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಏಪ್ರಿಲ್ 16 ಮತ್ತು 17 ರಂದು ರಾಜ್ಯದ ಹಲವೆಡೆ ಪರೀಕ್ಷೆಗಳನ್ನು ನಡೆಸಲಾಯಿತು. ಆ ಸಂದರ್ಭದಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳನ್ನು ತಪಾಸಣೆಗೊಳಪಡಿಸುವಾಗ ಜನಿವಾರ ಇದ್ದಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನಿರಾಕರಿಸಲಾಗಿದೆ. ಹಲವು ಕಡೆ ಈ ರೀತಿಯ ಘಟನೆ ನಡೆದಿವೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಮುಂದುವರಿದು, ಅಧಿಕಾರಿಗಳ ಈ ಸಂವಿಧಾನಬಾಹಿರ ಕೃತ್ಯದಿಂದ ವಿದ್ಯಾರ್ಥಿಗಳು ಶಿಕ್ಷಣದ ಹಕ್ಕಿನಿಂದ ವಂಚಿತರಾಗಿದ್ದಾರೆ. ಯಾರು ಪರೀಕ್ಷೆಯಿಂದ ವಂಚಿತರಾಗಿದ್ದಾರೋ ಅಂತಹ ವಿದ್ಯಾರ್ಥಿಗಳಿಗೆ ಮರು ಸಿಇಟಿ ಪರೀಕ್ಷೆ ನಡೆಸಲು ಕೆಇಎಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಅರ್ಜಿಯಲ್ಲೇನಿದೆ?
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ತಪಾಸಣೆಗೆ (ಫ್ರಿಸ್ಕಿಂಗ್‌) ಸೂಕ್ತ ಮಾರ್ಗಸೂಚಿಗಳನ್ನು ರೂಪಿಸಲು ಸೂಚನೆ ನೀಡಬೇಕು. ಜನಿವಾರ ಧರಿಸಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿರಾಕರಿಸಿದ ಕ್ರಮವನ್ನು ಅಸಂವಿಧಾನಿಕ, ಏಕಪಕ್ಷೀಯ ಮತ್ತು ಅಕ್ರಮ ಎಂದು ಘೋಷಿಸಬೇಕು. ಜನಿವಾರ ಧರಿಸುವ ವಿದ್ಯಾರ್ಥಿಗಳಿಗೆ ತಾರತಮ್ಯ ಮಾಡದಂತೆ ಮತ್ತು ಅವರ ಧಾರ್ಮಿಕ ಆಚರಣೆ ಹಕ್ಕಿನಲ್ಲಿ ಮಧ್ಯಪ್ರವೇಶಿಸದಂತೆ ಸೂಕ್ತ ಆದೇಶ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

Related Articles

Comments (0)

Leave a Comment