ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಬಲವಂತದ ಕ್ರಮ ಬೇಡ; ಇಡಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್​ ಸಹೋದರಿಯ ಸೋಗಿನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ವಂಚಿಸಿದ ಪ್ರಕರಣದ ಆರೋಪಿ ಐಶ್ವರ್ಯಾ ಗೌಡ ಜತೆ ಹಣಕಾಸು ವ್ಯವಹಾರ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಬಲವಂತದ ಕ್ರಮಕ್ಕೆ ಮುಂದಾಗದಂತೆ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಹೈಕೊರ್ಟ್‌ ನಿರ್ದೇಶಿಸಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ಹಣ ಅಕ್ರಮ ವರ್ಗಾವಣೆ (ಪಿಎಂಎಲ್) ಕಾಯ್ದೆಯಡಿ ಇಡಿ ಜಾರಿ ಮಾಡಿರುವ ಸಮನ್ಸ್‌ ರದ್ದು ಕೋರಿ ಶಾಸಕ ವಿನಯ್‌ ಕುಲಕರ್ಣಿ ಸಲ್ಲಿಸಿರುವ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರ್‌ ಅಮರಣ್ಣವರ್‌ ಅವರಿದ್ದ ರಜಾಕಾಲದ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿದೆ.

ಇದಕ್ಕೂ ಮುನ್ನ, ವಿನಯ್‌ ಕುಲಕರ್ಣಿ ಪರ ಮಧ್ಯಂತರ ಆದೇಶ ನೀಡುವುದಕ್ಕೆ ಆಕ್ಷೇಪಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಅರವಿಂದ ಕಾಮತ್‌, ಅರ್ಜಿಗೆ ಇಡಿ ಲಿಖಿತ ಆಕ್ಷೇಪಣೆ ಸಲ್ಲಿಸಿದೆ. ಅದನ್ನು ಪರಿಗಣಿಸಬೇಕು. ನಮ್ಮ ವಾದ ಆಲಿಸದೆ ಮಧ್ಯಂತರ ಆದೇಶ ನೀಡಬಾರದು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಆದರೆ, ಮಧ್ಯಂತರ ಆದೇಶಕ್ಕೆ ಇಡಿ ಆಕ್ಷೇಪಣೆ ಪರಿಗಣಿಸಲು ನಿರಾಕರಿಸಿದ ನ್ಯಾಯಪೀಠ, ವಿನಯ್‌ ಕುಲಕರ್ಣೀ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಇಡಿಗೆ ಸೂಚಿಸಿ, ಅರ್ಜಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ:
ವಂಚನೆ ಪ್ರಕರಣದ ಆರೋಪಿ ಐಶ್ವರ್ಯಾ ಗೌಡ 75 ಕೋಟಿ ರೂ. ಅಕ್ರಮ ವಹಿವಾಟು ನಡೆಸಿದ್ದಾರೆ. ಆಕೆಗೆ ವಿನಯ್‌ ಕುಲಕರ್ಣಿ 24 ಕೋಟಿ ರೂ. ಸಾಲ ನೀಡಿದ್ದಾರೆ ಎಂದು ಇಡಿ ಹೇಳಿತ್ತಲ್ಲದೆ, ಈ ವಿಚಾರವಾಗಿ ಏಪ್ರಿಲ್ 24 ಮತ್ತು 25ರಂದು ವಿನಯ್‌ ಕುಲಕರ್ಣಿ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಹಲವು ದಾಖಲೆ ಜಪ್ತಿ ಮಾಡಿದ್ದರು. ಜತೆಗೆ, ವಿಚಾರಣೆಗೆ ಹಾಜರಾಗಲು ಸೂಚಿಸಿ ಸಮನ್ಸ್‌ ಜಾರಿ ಮಾಡಿದ್ದರು.

ಇದರಿಂದ, ತಮ್ಮ ಮನೆ ಮೇಲೆ ದಾಳಿ ಮಾಡಿ ಶೋಧ ನಡೆಸಿರುವುದು, ಮನೆಯಿಂದ ದಾಖಲೆ, ವಸ್ತುಗಳನ್ನು ಜಪ್ತಿ ಮಾಡಿರುವುದು, ಹೇಳಿಕೆ ದಾಖಲಿಸಿಕೊಂಡಿರುವ ಪ್ರಕ್ರಿಯೆಯನ್ನು ಕಾನೂನುಬಾಹಿರ ಎಂದು ಘೋಷಿಸುವಂತೆ ಕೋರಿ ವಿನಯ್‌ ಕುಲಕರ್ಣಿ ಹೈಕೋರ್ಟ್‌ಗೆ ಮೆಟ್ಟಿಲೇರಿದ್ದಾರೆ.

Related Articles

Comments (0)

Leave a Comment