ದುರ್ಗಾಪರಮೇಶ್ವರಿ ದೇಗುಲದ ವ್ಯವಸ್ಥಾಪನಾ ಮಂಡಳಿ ಸದಸ್ಯರ ನೇಮಕಾತಿ; ದಾಖಲೆ ಹಾಜರುಪಡಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
- by Jagan Ramesh
- July 3, 2025
- 146 Views

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಸದಸ್ಯರ ನೇಮಕಾತಿಗೆ ಸಂಬಂಧಿಸಿದ ದಾಖಲೆಗಳನ್ನು 10 ದಿನಗಳಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದು ಆಕ್ಷೇಪಿಸಿ ಬೆಳ್ತಂಗಡಿ ತಾಲೂಕು ಗೇರುಕಟ್ಟೆ ನಿವಾಸಿ ದಿವಾಕರ ಆಚಾರ್ಯ ಹಾಗೂ ಜನರ್ದಾನ ಪೂಜಾರಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಗೆ ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಕಾಯ್ದೆಯ ಸೆಕ್ಷನ್ 25ರ ಅನುಸಾರ ಸದಸ್ಯರನ್ನು ನೇಮಕ ಮಾಡಿಲ್ಲ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಶಿಫಾರಸಿನಂತೆ ನೇಮಕಾತಿ ನಡೆದಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಅದಕ್ಕೆ ನ್ಯಾಯಪೀಠ, ನೇಮಕಾತಿಗೆ ಸಂಬಂಧಿಸಿದ ದಾಖಲೆಗಳನ್ನು 10 ದಿನಗಳಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ, ಅರ್ಜಿ ವಿಚಾರಣೆ ಮುಂದೂಡಿತು.
ಪ್ರಕರಣವೇನು?
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರ ಶಿಫಾರಸು ಪತ್ರದ ಪಟ್ಟಿಯಲ್ಲಿದ್ದವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನಾಗಿ ನೇಮಕ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಅದರಂತೆ, ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನು ನೇಮಕ ಮಾಡಿ ಜಿಲ್ಲಾ ಧಾರ್ಮಿಕ ಪರಿಷತ್ ಆದೇಶ ಹೊರಡಿಸಿತ್ತು. ಎಂ. ರಾಘವೇಂದ್ರ, ನೀನಾ ಕುಮಾರ್, ಪಿ. ರೀಟಾ, ಮೋಹಿನಿ, ಹೇಮಂತ್ ಕುಮಾರ್, ಶರತ್ ಕುಮಾರ್, ಎಚ್. ರಾಘವ, ಕೆ. ಹರೀಶ್ ಹಾಗೂ ಬಿ. ಹರೀಶ್ ಕುಮಾರ್ ಅವರನ್ನು ವ್ಯವಸ್ಥಾಪನಾ ಸಮಿತಿಗೆ ನೇಮಕ ಮಾಡಲಾಗಿದೆ. ಈ ನೇಮಕಾತಿಯು ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆಗೆ ವಿರುದ್ಧವಾಗಿದೆ. ಆದ್ದರಿಂದ, ನೇಮಕಾತಿ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
Related Articles
Thank you for your comment. It is awaiting moderation.
Comments (0)