ಶರಾವತಿ ಸೇತುವೆಗೆ ಯಡಿಯೂರಪ್ಪ ಹೆಸರಿಡಲು ನಿರ್ದೇಶನ ಕೋರಿ ಹೈಕೋರ್ಟ್‌ಗೆ ಅರ್ಜಿ; ಸರ್ಕಾರಗಳಿಗೆ ನೋಟಿಸ್

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಶಿವಮೊಗ್ಗದ ನಿವಾಸಿ ಕೆ. ಹರನಾಥ ರಾವ್ (84) ಎಂಬುವರು ಸಲ್ಲಿಸಿರುವ ರಿಟ್ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಕೇಂದ್ರ ಮತ್ತು ರಾಜ್ಯ ಸರ್ಕಾರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಶಿವಮೊಗ್ಗ ಜಿಲ್ಲಾಧಿಕಾರಿ ಸೇರಿ ಅರ್ಜಿಯಲ್ಲಿನ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿತು.

ಅರ್ಜಿದಾರರ ಮನವಿ ಏನು?
ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡುವಂತೆ ಕೋರಿ ಜುಲೈ 7ರಂದು ಕೇಂದ್ರ ಭೂಸಾರಿಗೆ ಇಲಾಖೆ ಮತ್ತು ರಾಜ್ಯ ಸರ್ಕಾರ ಲೋಕೋಪಯೋಗಿ ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಆದರೆ, ಮನವಿ ಸಂಬಂಧ ಈವರೆಗೂ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಆದ್ದರಿಂದ, ತಮ್ಮ ಮನವಿ ಪರಿಗಣಿಸಲು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಅವರೇ ಸೇತುವೆ ನಿರ್ಮಾಣಕ್ಕೆ ಮೂಲ ಕಾರಣಕರ್ತರಾಗಿದ್ದಾರೆ. ಸೇತುವೆ ನಿರ್ಮಾಣದ ಹಿಂದೆ ಅವರ ಶ್ರಮ ಸಾಕಷ್ಟಿದೆ. ಅರ್ಜಿದಾರರು ಸಲ್ಲಿಸಿರುವ ಮನವಿಯಲ್ಲಿ ಸಾಗರ ತಾಲೂಕಿನ ಜನರ ಸ್ಥಳೀಯ ಭಾವನೆ ಮತ್ತು ಸಾರ್ವಜನಿಕ ಅಭಿಪ್ರಾಯವೂ ಅಡಗಿದೆ. ಅರ್ಜಿದಾರರು ಮನವಿ ಸಲ್ಲಿಸಿದ ಕೆಲ ದಿನಗಳಲ್ಲೇ ಸೇತುವೆ ಉದ್ಘಾಟನೆ ದಿನಾಂಕ ಘೋಷಿಸಲಾಗಿದ್ದು, ಇದೇ 14ರಂದು ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ, ಸೇತುವೆ ಉದ್ಘಾಟನೆಗೊಂಡರೂ, ಸೇತುವೆಗೆ ಹೆಸರಿಡುವ ವಿಚಾರವನ್ನು ಯಥಾಸ್ಥಿತಿಯಲ್ಲಿಡಲು ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಮಧ್ಯಂತರ ಮನವಿ ಮಾಡಲಾಗಿದೆ.

Related Articles

Comments (0)

Leave a Comment