ಬಿಜೆಪಿ ಬಗ್ಗೆ ಆಕ್ಷೇಪಾರ್ಹ ಜಾಹೀರಾತು; ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟಗಳಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಜಾಹೀರಾತು ನೀಡುವ ಮೂಲಕ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ದಾಖಲಾಗಿರುವ ಮಾನನಷ್ಟ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.

ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಎಸ್. ಕೇಶವ ಪ್ರಸಾದ್ ಸಲ್ಲಿಸಿರುವ ಖಾಸಗಿ ದೂರು ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿತು.

ವಿಚಾರಣೆ ವೇಳೆ ಸಿದ್ದರಾಮಯ್ಯ ಪರವಾಗಿ ಹಿರಿಯ ವಕೀಲ ಶಶಿಕಿರಣ್‌ ಶೆಟ್ಟಿ ವಾದ ಮಂಡಿಸಿ, ಪ್ರಕರಣದ ಇತರ ಆರೋಪಿಗಳ ವಿರುದ್ಧ ನ್ಯಾಯಪೀಠ ಈಗಾಗಲೇ ತಡೆ ನೀಡಿದೆ. ಆದ್ದರಿಂದ, ಅರ್ಜಿದಾರರ ವಿರುದ್ಧದ ವಿಚಾರಣೆಗೂ ತಡೆ ನೀಡಬೇಕು ಎಂದು ಕೋರಿದರು. ವಾದ ಆಲಿಸಿದ ನ್ಯಾಯಪೀಠ, ಪ್ರಕರಣದ ವಿಚಾರಣೆಗೆ ತಡೆ ನೀಡಿ, ಅರ್ಜಿ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಿತು.

ಸಿದ್ದರಾಮಯ್ಯ ಪರವಾಗಿ ವಕೀಲ ಸೂರ್ಯ ಮುಕುಂದರಾಜ್‌ ವಕಾಲತ್ತು ವಹಿಸಿದ್ದರು.

ಪ್ರಕರಣವೇನು?
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಭ್ರಷ್ಟಾಚಾರವನ್ನು ಪ್ರಧಾನ ಅಸ್ತ್ರವಾಗಿಸಿದ್ದ ಕಾಂಗ್ರೆಸ್ 2023ರ ಮೇ 5ರಂದು ಎಲ್ಲ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಡಿ ರಾಜ್ಯದಲ್ಲಿ ವಿವಿಧ ಸರ್ಕಾರಿ ಹುದ್ದೆಗಳಿಗೆ ಬಿಜೆಪಿ ಲಂಚ ನಿಗದಿಪಡಿಸಿದೆ ಎಂದು ಆರೋಪಿಸಿ ಜಾಹೀರಾತು ನೀಡಿತ್ತು. ಜತೆಗೆ, ಕೋವಿಡ್ ಸಾಮಗ್ರಿಗಳ ಪೂರೈಕೆ, ಲೋಕೋಪಯೋಗಿ ಗುತ್ತಿಗೆಗಳು, ಮಠಗಳಿಗೆ ಅನುದಾನ, ಶಾಲೆಗಳಿಗೆ ಮೊಟ್ಟೆ ಪೂರೈಕೆ, ರಸ್ತೆ ಕಾಮಗಾರಿಗಳಲ್ಲಿ ಶೇ 25-30 ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್, ಜಾಹೀರಾತಿನ ಕೊನೆಯಲ್ಲಿ ಶೇ. 40 ಕಮಿಷನ್‌ನ (ಬಿಜೆಪಿ) ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ 1.5 ಲಕ್ಷ ಕೋಟಿ ರೂ. ಗಳನ್ನು ಲೂಟಿ ಮಾಡಿದೆ ಎಂದು ಆರೋಪಿಸಿತ್ತು.

ಇದರ ವಿರುದ್ಧ ದೂರು ದಾಖಲಿಸಿದ್ದ ಬಿಜೆಪಿ, ‘ಡಬಲ್ ಇಂಜಿನ್ ಸರ್ಕಾರಕ್ಕೆ ಬದಲಾಗಿ ಟ್ರಬಲ್ ಇಂಜಿನ್ ಸರ್ಕಾರ’ ಎಂದು ಹೇಳುವ ಮೂಲಕ ಬಿಜೆಪಿಯ ವರ್ಚಸ್ಸಿಗೆ ಕಾಂಗ್ರೆಸ್ ಹಾನಿ ಮಾಡಿದೆ. ಚುನಾವಣೆಯಲ್ಲಿ ಗೆಲುವಿಗೆ ಅಡ್ಡಿಪಡಿಸಲಾಗಿದೆ. ಜಾಹೀರಾತಿನ ಕೊನೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡಿ ಎಂದು ಆರೋಪಿಗಳು ಮತ ಯಾಚಿಸಿದ್ದಾರೆ. ಸುಳ್ಳು ಜಾಹೀರಾತು ನೀಡಲು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹಾಗೂ ರಾಹುಲ್ ಗಾಂಧಿ ಅವರೇ ನೇರ ಕಾರಣ ಎಂದು ದೂರಿನಲ್ಲಿ ಆರೋಪಿಸಿತ್ತು.

Related Articles

Comments (0)

Leave a Comment