ಪಂಚಮಸಾಲಿ ಮೀಸಲು ಹೋರಾಟಗಾರರ ಮೇಲೆ ಲಾಠಿ ಚಾರ್ಜ್; ನಿವೃತ್ತ ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮತ್ತು ಲಿಂಗಾಯತ ಉಪ ಪಂಗಡಗಳಿಗೆ ಒಬಿಸಿ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿರುವ ಪ್ರಕರಣವನ್ನು ನ್ಯಾಯಾಂಗ ತನಿಖೆ ಬಿಟ್ಟು ಬೇರಾವುದೇ ರೀತಿಯ ತನಿಖೆಗೆ ವಹಿಸಲು ಹೈಕೋರ್ಟ್‌ ನಿರಾಕರಿಸಿದೆ.

ಇದೇ ವೇಳೆ, ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ಬದಲಿಗೆ ನಿವೃತ್ತ ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆಗೆ ನ್ಯಾಯಾಲಯ ನಿರ್ದೇಶಿಸಿದೆ.

ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸರ್ಕಾರ ತನಿಖಾ ಆಯೋಗ ರಚಿಸಬೇಕು. ಆ ಆಯೋಗವು 3 ತಿಂಗಳಲ್ಲಿ ವರದಿ ಸಲ್ಲಿಸಬೇಕು ಎಂದು ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್‌. ದೇವದಾಸ್‌ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.

ಮೇಲ್ಮನವಿ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆ ಹೊರತುಪಡಿಸಿ ಬೇರಾವುದೇ ರೀತಿಯ ತನಿಖೆಗೆ ವಹಿಸಲು ನಿರಾಕರಿಸಿತಾದರೂ, ಏಕಸದಸ್ಯ ನ್ಯಾಯಪೀಠದ ಆದೇಶದಲ್ಲಿನ ಕೆಲ ಅಂಶಗಳನ್ನು ಮಾರ್ಪಡಿಸಿ, ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬದಲಿಗೆ ಜಿಲ್ಲಾ ನ್ಯಾಯಾಂಗದ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಬೇಕು. ವರದಿಯನ್ನು 3 ತಿಂಗಳ ಬದಲಿಗೆ 6 ತಿಂಗಳಲ್ಲಿ ಸಲ್ಲಿಸಬೇಕು ಎಂದು ನಿರ್ದೇಶಿಸಿ, ಅರ್ಜಿ ಇತ್ಯರ್ಥಪಡಿಸಿದೆ. ವಿಸ್ತೃತ ತೀರ್ಪಿನ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ಸಿ.ಎಚ್‌ ಜಾಧವ್‌, ನ್ಯಾಯಾಂಗ ತನಿಖೆ ಬದಲಿಗೆ ಅತ್ಯುನ್ನತ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದರು. ಏಕಸದಸ್ಯ ನ್ಯಾಯಪೀಠದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು ನ್ಯಾಯಾಂಗ ತನಿಖೆ ಹೊರತುಪಡಿಸಿ, ಬೇರಾವುದೇ ತನಿಖೆಗೆ ಒಪ್ಪಲಾಗದು ಎಂದು ಪ್ರತಿವಾದಿಸಿದ್ದರು. ವಕೀಲೆ ಪೂಜಾ ಸವದತ್ತಿ ಮತ್ತಿತರರು ಇತರ ಪ್ರತಿವಾದಿಗಳ ಪರವಾಗಿ ವಾದ ಮಂಡಿಸಿದ್ದರು.

ಪ್ರಕರಣವೇನು?
ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಸುವರ್ಣಸೌಧದ ಮುಂದೆ 2024ರ ಡಿಸೆಂಬರ್ 10ರಂದು ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ನಡೆದ ಲಾಠಿ ಚಾರ್ಜ್‌ ಪ್ರಕರಣವನ್ನು ತನಿಖಾ ಆಯೋಗ ರಚಿಸಿ, ಅದರ ಮೂಲಕ‌ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬಾಗಲಕೋಟೆಯ ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿಯನ್ನು 2025ರ ಏಪ್ರಿಲ್ 4ರಂದು ಪುರಸ್ಕರಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಬೇಕು. ಆಯೋಗ ರಚನೆಯಾದ ಮೂರು ತಿಂಗಳಲ್ಲಿ ವರದಿ ಸಿದ್ಧಪಡಿಸಿ, ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

Related Articles

Comments (0)

Leave a Comment