ಎಸ್ಸಿ-ಎಸ್ಟಿ ಕಾಲನಿಗೆ ಮೂಲಸೌಕರ್ಯ ಒದಗಿಸಲು ಕೋರಿ ಪಿಐಎಲ್; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
- by Ramya B T
- August 20, 2025
- 114 Views

ಬೆಂಗಳೂರು: ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮದನೂರ ಗ್ರಾಮದ ಎಸ್ಸಿ-ಎಸ್ಟಿ ಕಾಲನಿಗೆ ಶುದ್ಧ ಕುಡಿಯುವ ನೀರು, ಒಳಚರಂಡಿ, ರಸ್ತೆ ಮತ್ತಿತರ ಮೂಲಸೌಕರ್ಯಗಳನ್ನು ಒದಗಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಬುಧವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಬೀದರ್ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿಗೊಳಿಸಿತಲ್ಲದೆ, ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿರುವ ಗ್ರಾಮದ ಕಾಲನಿಯಲ್ಲಿ ಮೂಲಸೌಕರ್ಯಗಳ ಸದ್ಯದ ಸ್ಥಿತಿಗತಿ ಹೇಗಿದೆ, ಮೂಲಸೌಕರ್ಯಗಳನ್ನು ಒದಗಿಸಬೇಕಾಗಿದ್ದಲ್ಲಿ ಯಾವ ಕಾಲಮಿತಿಯೊಳಗೆ ಒದಗಿಸಲಾಗುವುದು ಎಂಬ ಬಗ್ಗೆ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಿತು.
ಶಾಲೆಗೆ ಹೊಸ ಕಟ್ಟಡ ಕೋರಿ ಮತ್ತೊಂದು ಪಿಐಎಲ್:
ಮಹಾರಾಷ್ಟ್ರದ ಗಡಿ ಭಾಗದಲ್ಲಿರುವ ಬೀದರ್ ಜಿಲ್ಲೆ ಕಮಲನಗರ ತಾಲೂಕಿನ ಚೊಂಡಿಮುಖೇಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲಗೊಂಡಿರುವ 6 ಕೊಠಡಿಗಳು ಮತ್ತು 1 ಅಡುಗೆ ಕೋಣೆಯನ್ನು ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಿಸಲು ನಿರ್ದೇಶಿಸುವಂತೆ ಕೋರಿ ಗುರುನಾಥ ವಡ್ಡೆ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ಕುರಿತು ಬುಧವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ, ಬೀದರ್ ಜಿಲ್ಲಾಧಿಕಾರಿ, ಜಿ.ಪಂ. ಸಿಇಒ, ಡಿಡಿಪಿಐ, ಬಿಇಒಗೆ ನೋಟಿಸ್ ಜಾರಿಗೊಳಿಸಿತು. ಶಾಲೆಯ ಕೊಠಡಿಗಳ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿದ ಪೀಠ, ವಿಚಾರಣೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಿತು.
Related Articles
Thank you for your comment. It is awaiting moderation.
Comments (0)