ಮಾದಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ; ಶಾಸಕ ಬಿ.ಪಿ. ಹರೀಶ್ಗೆ ಹೈಕೋರ್ಟ್ ರಿಲೀಫ್
- by Jagan Ramesh
- August 20, 2025
- 101 Views

ಬೆಂಗಳೂರು: ಮಾದಿಗ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ದಾಖಲಾಗಿರುವ ಜಾತಿ ನಿಂದನೆ ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿ, ಸಮನ್ಸ್ ಜಾರಿಗೊಳಿಸಿದ್ದ ದಾವಣಗೆರೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣ ರದ್ದುಕೋರಿ ಬಿ.ಪಿ ಹರೀಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಕೆಲ ತಾಂತ್ರಿಕ ಹಾಗೂ ಕಾನೂನನಾತ್ಮಕ ಪ್ರಕ್ರಿಯೆಗಳು ಪಾಲನೆಯಾಗದ ಕಾರಣ ಜಿಲ್ಲಾ ನ್ಯಾಯಾಧೀಶರ ಆದೇಶ ರದ್ದುಪಡಿಸಲಾಗುತ್ತಿದೆ ಎಂದು ತಿಳಿಸಿ, 2023ರ ಜೂನ್ 21ರಂದು ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿತು.
ಇದೇ ವೇಳೆ, ವಿವೇಚನೆ ಬಳಿಸಿ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸುವ ಬಗ್ಗೆ ಹೊಸದಾಗಿ ಕ್ರಮ ಕೈಗೊಳ್ಳಬೇಕು ಎಂದು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿದ ನ್ಯಾಯಪೀಠ, ಅರ್ಜಿ ಇತ್ಯರ್ಥಪಡಿಸಿತು.
ಪ್ರಕರಣವೇನು?
2023ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಹಿನ್ನೆಲೆಯಲ್ಲಿ ದಲಿತ ಸಮುದಾಯದ ಕೆಲ ಮುಖಂಡರು ಬಿ.ಪಿ. ಹರೀಶ್ ಅವರಿಗೆ ಅಭಿನಂದನೆ ಸಲ್ಲಿಸಲು ಬಂದಿದ್ದರು. ಈ ವೇಳೆ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಿಸಿದ್ದರೂ ದಲಿತರು ನಮಗೆ ಮತ ಹಾಕಿಲ್ಲ. ‘ಅಪ್ಪನಿಗೆ ಹುಟ್ಟಿದ ಮಾದಿಗರು ಮಾತ್ರ ಬಿಜೆಪಿಗೆ ಮತ ಹಾಕಿದ್ದಾರೆ’ ಎಂದು ಹೇಳಿಕೆ ನೀಡಿದ್ದರು. ಇದರ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಬಿ. ಹನುಮಂತಪ್ಪ ಹಾಗೂ ಇತರರು ಹರಿಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರು ಆಧರಿಸಿ ಬಿ.ಪಿ. ಹರೀಶ್ ವಿರುದ್ಧ ಎಸ್ಸಿ, ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ ಅಡಿ ಹಾಗೂ ಐಪಿಸಿ ಸೆಕ್ಷನ್ಗಳಡಿ ಎಫ್ಐಆರ್ ದಾಖಲಾಗಿತ್ತು. ಇದನ್ನು ವಿಚಾರಣೆಗೆ ಅಂಗೀಕರಿಸಿದ್ದ ದಾವಣಗೆರೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬಿ.ಪಿ ಹರೀಶ್ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು. ಪ್ರಕರಣದ ಎಫ್ಐಆರ್ ಹಾಗೂ ಜಿಲ್ಲಾ ನ್ಯಾಯಾಲಯದ ಆದೇಶ ರದ್ದು ಕೋರಿ ಹರೀಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.
Related Articles
Thank you for your comment. It is awaiting moderation.
Comments (0)