ಕೋರ್ಟ್ ಆದೇಶದಂತೆ ವೈದ್ಯರನ್ನು ಸೇವೆಯಿಂದ ಬಿಡುಗಡೆಗೊಳಿಸಿದ ಸರ್ಕಾರ; ಹರ್ಷ ಗುಪ್ತ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಟ್ಟ ಹೈಕೋರ್ಟ್
- by Jagan Ramesh
- August 22, 2025
- 86 Views

ಬೆಂಗಳೂರು: ಸರ್ಕಾರಿ ಕೋಟಾದಡಿ ವೈದ್ಯ ಪದವಿ (ಎಂಬಿಬಿಎಸ್) ಪೂರೈಸಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ಉನ್ನತ ಶಿಕ್ಷಣ ಪಡೆಯಲು ಸೇವೆಯಿಂದ ಬಿಡುಗಡೆಗೊಳಿಸುವಂತೆ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಸರ್ಕಾರ ಪಾಲನೆ ಮಾಡಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಹಾಗೂ ಆಯುಕ್ತ ಕೆ.ಬಿ. ಶಿವಕುಮಾರ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಹೈಕೋರ್ಟ್ ಕೈಬಿಟ್ಟಿದೆ.
ಉನ್ನತ ವ್ಯಾಸಂಗಕ್ಕಾಗಿ ತಮ್ಮನ್ನು ಸೇವೆಯಿಂದ ಬಿಡುಗಡೆಗೊಳಿಸುವಂತೆ ಏಕಸದಸ್ಯ ನ್ಯಾಯಪೀಠ 2025ರ ಜೂನ್ 24ರಂದು ಹೊರಡಿಸಿದ್ದ ಆದೇಶವನ್ನು ಆರೋಗ್ಯ ಇಲಾಖೆ ಪಾಲಿಸಿಲ್ಲ ಎಂದು ಆರೋಪಿಸಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬಾಚಿಗೊಂಡನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಡಿಎಂಒ (General Duty Medical Officer) ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಎಂ. ಶಿವರಾಜ ಸೇರಿ ರಾಜ್ಯದ ವಿವಿಧ ಕಡೆ ಸೇವೆ ಸಲ್ಲಿಸಿರುವ 22 ವೈದ್ಯರು ಹೈಕೋರ್ಟ್ಗೆ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಅರ್ಜಿಯ ಕಳೆದ ವಿಚಾರಣೆ ವೇಳೆ ನ್ಯಾಯಾಲಯ ನೀಡಿದ್ದ ನಿರ್ದೇಶನದಂತೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ, ಆಯುಕ್ತ ಕೆ.ಬಿ. ಶಿವಕುಮಾರ್ ಅವರು ಖುದ್ದು ಹಾಜರಿದ್ದರು. ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ಅರ್ಜಿದಾರ ವೈದ್ಯರನ್ನು ಸೇವೆಯಿಂದ ಬಿಡುಗಡೆಗೊಳಿಸುವಂತೆ ಏಕಸದಸ್ಯ ನ್ಯಾಯಪೀಠ ಹೊರಡಿಸಿರುವ ಆದೇಶವನ್ನು ಪಾಲನೆ ಮಾಡಲಾಗಿದೆ ಎಂದು ತಿಳಿಸಿದರಲ್ಲದೆ, ಈ ಸಂಬಂಧ ಶುಕ್ರವಾರ ಹೊರಡಿಸಲಾಗಿದ್ದ ಆದೇಶ ಪ್ರತಿಯನ್ನು ನ್ಯಾಯಪೀಠಕ್ಕೆ ಒದಗಿಸಿದರು.
ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಹರ್ಷ ಗುಪ್ತ ಹಾಗೂ ಕೆ.ಬಿ. ಶಿವಕುಮಾರ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಟ್ಟು, ಅರ್ಜಿ ಇತ್ಯರ್ಥಪಡಿಸಿತು. ಅರ್ಜಿದಾರರ ಪರವಾಗಿ ವಕೀಲ ಆರ್. ವಿಜಯ್ ಕುಮಾರ್ ವಾದ ಮಂಡಿಸಿದ್ದರು.
ಇದೇ ವಿಚಾರವಾಗಿ ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ 39 ನರ್ಸಿಂಗ್ ಅಧಿಕಾರಿಗಳು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನೂ ಸಹ ನ್ಯಾಯಪೀಠ ವಿಲೇವಾರಿ ಮಾಡಿದೆ.
ಆರೋಪ ನಿಗದಿಗೆ ಮುಂದಾಗಿದ್ದ ಕೋರ್ಟ್:
ಗುರುವಾರವಷ್ಟೇ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅರ್ಜಿದಾರ ವೈದ್ಯರನ್ನು ಸೇವೆಯಿಂದ ಬಿಡುಗಡೆಗೊಳಿಸುವಂತೆ ಏಕಸದಸ್ಯ ನ್ಯಾಯಪೀಠ ಆದೇಶ ನೀಡಿ 2 ತಿಂಗಳು ಕಳೆಯುತ್ತ ಬಂದರೂ, ಅದನ್ನು ಪಾಲನೆ ಮಾಡದ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತಲ್ಲದೆ, ಸರ್ಕಾರದ ಈ ಧೋರಣೆಗೆ ಅಂತ್ಯ ಹಾಡಬೇಕಿದೆ. ಆದ್ದರಿಂದ, ಕೋರ್ಟ್ ಆದೇಶ ಪಾಲಿಸದೆ ಉದ್ದೇಶಪೂರ್ವಕ ಅಸಹಕಾರ ತೋರಿದ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ, ಆಯುಕ್ತ ಕೆ.ಬಿ. ಶಿವಕುಮಾರ್ ವಿರುದ್ಧ ನ್ಯಾಯಾಂಗ ನಿಂದನೆಯಡಿ ಆರೋಪ ನಿಗದಿಪಡಿಸಲಾಗುವುದು. ಅದಕ್ಕಾಗಿ ಇಬ್ಬರೂ ಶುಕ್ರವಾರ ಮಧ್ಯಾಹ್ನ 2.30ಕ್ಕೆ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ತಾಕೀತು ಮಾಡಿತ್ತು.
Related Articles
Thank you for your comment. It is awaiting moderation.
Comments (0)