ಪರಶುರಾಮ ಪ್ರತಿಮೆ ಮರುಸ್ಥಾಪನೆಗೆ ಕೋರಿದ ಪಿಐಎಲ್; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್‌ನಲ್ಲಿರುವ ಪರಶುರಾಮ ಪ್ರತಿಮೆಯನ್ನು ಮರು ಸ್ಥಾಪಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಪರಶುರಾಮ ಪ್ರತಿಮೆಯನ್ನು ಮರು ನಿರ್ಮಿಸಲು ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ನಿರ್ದೇಶಿಸುವಂತೆ ಕೋರಿ ಉಡುಪಿಯ ಉದಯ ಶೆಟ್ಟಿ ಮುನಿಯಾಳ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಅರ್ಜಿ ಕುರಿತು ಆಗಸ್ಟ್ 20ರಂದು ವಿಚಾರಣೆ ನಡೆಸಿದ್ದ ನ್ಯಾಯಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡುವ ಮುನ್ನ ಪ್ರತಿಮೆ ನಿರ್ಮಾಣಕ್ಕೆ ಅರ್ಜಿದಾರರು ತಮ್ಮ ವೈಯುಕ್ತಿಕ ಕೊಡುಗೆಯಾಗಿ 5 ಲಕ್ಷ ರೂ. ಗಳನ್ನು ನೀಡಬೇಕು. ಈ ಮೊತ್ತವನ್ನು 2 ವಾರಗಳಲ್ಲಿ ಹೈಕೋರ್ಟ್ ರಿಜಿಸ್ಟ್ರಿಯಲ್ಲಿ ಠೇವಣಿ ಇಡಬೇಕು ಎಂದು ಸೂಚಿಸಿತ್ತು. ಮಂಗಳವಾರ ಉದಯ ಶೆಟ್ಟಿ ಮುನಿಯಾಳ ಪರ ವಕೀಲರು ಹಾಜರಾಗಿ, ನ್ಯಾಯಾಲಯದ ನಿರ್ದೇಶನದಂತೆ ಅರ್ಜಿದಾರರು ರಿಜಿಸ್ಟ್ರಿಯಲ್ಲಿ 5 ಲಕ್ಷ ರೂ.ಗಳನ್ನು ಠೇವಣಿ ಇಟ್ಟಿದ್ದಾರೆ ಎಂದು ತಿಳಿಸಿ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಮನವಿ ಮಾಡಿದರು.

ಇದನ್ನು ಪರಿಗಣಿಸಿದ‌ ನ್ಯಾಯಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಿತು.

ಅರ್ಜಿದಾರರ ಮನವಿ ಏನು?
ಕಾರ್ಕಳದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಅನ್ನು 2023ರ ಜನವರಿ 27ರಂದು ಉದ್ಘಾಟಿಸಲಾಗಿದ್ದು, ಅಲ್ಲಿ 33 ಅಡಿ ಎತ್ತರದ ಪರಶುರಾಮನ ಕಂಚಿನ ಪ್ರತಿಮೆಯನ್ನೂ ಲೋಕಾರ್ಪಣೆಗೊಳಿಸಲಾಗಿತ್ತು. ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲಾಧಿಕಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಮಲೆನಾಡು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಾರ್ವಜನಿಕ ಹಣ ವಿನಿಯೋಗಿಸಿ ಪ್ರತಿಮೆ ನಿರ್ಮಿಸಲಾಗಿತ್ತು. ಆದರೆ, ಪ್ರತಿಮೆಯನ್ನು ಒಪ್ಪಂದದಂತೆ ಕಂಚಿನಿಂದ ನಿರ್ಮಿಸುವ ಬದಲಿಗೆ ಹಿತ್ತಾಳೆಯಿಂದ ನಿರ್ಮಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಸಾರ್ವಜನಿಕ ಸುರಕ್ಷತೆಗೆ ಅಪಾಯ ಎದುರಾಗುವ ಹಿನ್ನೆಲೆಯಲ್ಲಿ 2023ರ ಅಕ್ಟೋಬರ್ 12ರಂದು ಪ್ರತಿಮೆಯ ಮೇಲ್ಭಾಗವನ್ನು ತೆರವುಗೊಳಿಸಿ, ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಇದರಿಂದ, ಥೀಮ್ ಪಾರ್ಕ್ ಅಪೂರ್ಣಗೊಂಡಂತಾಗಿದ್ದು, ಭಕ್ತಾದಿಗಳಿಗೆ ತೀವ್ರ ನೋವುಂಟು ಮಾಡಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಪ್ರತಿಮೆ ‌ತಯಾರಿಸಿದ್ದ ಶಿಲ್ಪಿ ಕೃಷ್ಣ ನಾಯ್ಕ್ ಎಂಬುವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ರದ್ದುಕೋರಿ ಕೃಷ್ಣ ನಾಯ್ಕ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ 2024ರ ಅಕ್ಟೋಬರ್ 21ರಂದು ವಜಾಗೊಳಿಸಿತ್ತು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, 1,231 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಇದರ ನಡುವೆ, ಪ್ರತಿಮೆಯ ಮರುನಿರ್ಮಾಣ ಹಾಗೂ ಮರುಸ್ಥಾಪನೆಗೆ ಪ್ರವಾಸೋದ್ಯಮ ಇಲಾಖೆಯಾಗಲಿ, ಜಿಲ್ಲಾಡಳಿತವಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಹಿಂದು ಶಾಸ್ತ್ರಗಳು ಮತ್ತು ಸ್ಮೃತಿಗಳ ಪ್ರಕಾರ ಅಪೂರ್ಣವಾದ ಅಥವಾ ಕೆಡವಲಾದ ಪ್ರತಿಮೆಯನ್ನು ಪೂಜಿಸಬಾರದು. ಪ್ರತಿಮೆಯನ್ನು ಅಪವಿತ್ರಗೊಳಿಸುವುದರಿಂದ ಆ ಭಾಗದ ಆಡಳಿತಗಾರರು ಹಾಗೂ ಜನರಿಗೆ ದುರದೃಷ್ಟ ತರುತ್ತದೆ ಎಂಬ ನಂಬಿಕೆ ಇದೆ. ಪರಶುರಾಮ ಪ್ರತಿಮೆ ಮರುಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ, ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

Related Articles

Comments (0)

Leave a Comment