ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸಲು ಸತತ ಕಾನೂನು ಹೋರಾಟ; ಹೈಕೋರ್ಟ್‌ಗೆ ಚುನಾವಣಾ ಆಯೋಗದ ಹೇಳಿಕೆ
- by Jagan Ramesh
- October 29, 2025
- 299 Views
ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಗೆ ನಿಗದಿತ ಅವಧಿಯಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯುವಂತಾಗಬೇಕು ಎಂದು ಕಳೆದ ನಾಲ್ಕೈದು ವರ್ಷಗಳಿಂದ ಸತತವಾಗಿ ಕಾನೂನು ಹೋರಾಟ ಮಾಡಲಾಗುತ್ತಿದೆ ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ಗೆ ಅರುಹಿದೆ.
ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಲು ವಿಳಂಬವಾದ ಹಿನ್ನೆಲೆಯಲ್ಲಿ 16 ತಿಂಗಳ ಕಾಲ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದ್ದ ಅವಧಿಯನ್ನು 5 ವರ್ಷದ ಅಧಿಕಾರವಧಿಗೆ ಪರಿಗಣಿಸಬಾರದು. ಅವಧಿ ಮುಗಿಯಲಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕ ಮಾಡುವ ಕ್ರಮಕ್ಕೆ ಮುಂದಾಗಬಾರದು ಎಂದು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ 40ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಈ ವೇಳೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ವಿಚಾರವಾಗಿ ಚುನಾವಣಾ ಆಯೋಗ ಗಮನಿಸುತ್ತಿಲ್ಲವೇ ಎಂಬ ನ್ಯಾಯಪೀಠದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರು, ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಿಗದಿತ ಅವಧಿಯಲ್ಲಿ ನಡೆಯುವಂತಾಗಬೇಕು, ಅದಕ್ಕೆ ಸರ್ಕಾರ ಅನುವು ಮಾಡಿಕೊಡಬೇಕು ಎಂದು ಚುನಾವಣಾ ಆಯೋಗ ನ್ಯಾಯಾಲಯದ ಮೊರೆ ಹೋಗಿದೆ ಎಂದು ತಿಳಿಸಿದರು.
ಕಳೆದ ನಾಲ್ಕೈದು ವರ್ಷಗಳಿಂದ ಸತತವಾಗಿ ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲಾಗುತ್ತಿದೆ. ಬಿಬಿಎಂಪಿ ಚುನಾವಣೆ ವಿಚಾರವಾಗಿ ನಾಲ್ಕು ವರ್ಷಗಳ ಹಿಂದೆ ಆಯೋಗ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ವಿಚಾರದಲ್ಲಿ ಸುಪ್ರೀಂಕೋರ್ಟ್‌ನಲ್ಲೂ ಹೋರಾಟ ಮಾಡಿದ್ದೇವೆ. ತಾಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಗಳ ವಿಚಾರವಾಗಿ ಮೂರು ವರ್ಷಗಳ ಹಿಂದೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಾಲಯ ಸಮಯ ಕೊಡುತ್ತಲೇ ಬಂದಿದೆ. ಅವಧಿ ಮುಗಿಯಲಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರವಾಗಿಯೂ ಅರ್ಜಿ ಸಲ್ಲಿಸಲಾಗಿದೆ. ಅಲ್ಲದೇ ಈ ವರ್ಷದ ಕೊನೆಗೆ ಅವಧಿ ಮುಗಿಯಲಿರುವ ಗ್ರಾಮ ಪಂಚಾಯತಿ ಚುನಾವಣೆ ನಡೆಸುವ ಬಗ್ಗೆಯೂ ಚುನಾವಣಾ ಆಯೋಗದ ವತಿಯಿಂದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂದರು.
ಸರ್ಕಾರ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು, ನಮಗಿರುವ ಮಾಹಿತಿ ಪ್ರಕಾರ ಅವಧಿ ಮುಗಿಯಲಿರುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮರುವಿಂಗಡಣೆ ಪ್ರಕ್ರಿಯೆ ಆರಂಭವಾಗಿದೆ ಎಂದು ತಿಳಿಸಿದರು. ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್. ಪಾಟೀಲ್ ಅವರು, ಅಂತಹದ್ದೇನೂ ನಡೆಯುತ್ತಿಲ್ಲ ಎಂದರು. ವಾರ್ಡ್‌ಗಳ ಗಡಿ ನಿಗದಿಪಡಿಸಿ ಪಟ್ಟಿ ಕೊಟ್ಟರೆ ಮತದಾರರ ಪಟ್ಟಿ ತಯಾರಿಸುವ ಕೆಲಸವನ್ನು ಆಯೋಗ ಆರಂಭಿಸಲಿದೆ ಎಂದು ಕೆ.ಎನ್. ಫಣೀಂದ್ರ ಹೇಳಿದರು.
ಈ ಬಗ್ಗೆ ಸರ್ಕಾರದ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ನ್ಯಾಯಾಲಯಕ್ಕೆ ತಿಳಿಸುವಂತೆ ಹೆಚ್ಚುವರಿ ಅಡ್ವೋಕೇಟ್ ಜನರಲ್ ಅವರಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಸೋಮವಾರಕ್ಕೆ (ನವೆಂಬರ್ 3) ಮುಂದೂಡಿತು.
Related Articles
Thank you for your comment. It is awaiting moderation.


Comments (0)