ವಾರ್ಡ್ವಾರು ಮೀಸಲಾತಿ ಅಧಿಸೂಚನೆ ಹೊರಡಿಸಲು 150 ದಿನ ಸಮಯ ಅಗತ್ಯವಿದೆ; ಹೈಕೋರ್ಟ್ಗೆ ಸರ್ಕಾರದ ಹೇಳಿಕೆ
- by Jagan Ramesh
 - November 3, 2025
 - 59 Views
 
                            ಬೆಂಗಳೂರು: ನವೆಂಬರ್ ತಿಂಗಳ ಅಂತ್ಯಕ್ಕೆ ಅವಧಿ ಕೊನೆಗೊಳ್ಳಲಿರುವ ರಾಜ್ಯದ 180ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ವಾರು ಮೀಸಲಾತಿಯ ಅಂತಿಮ ಅಧಿಸೂಚನೆ ಹೊರಡಿಸಲು 150 ದಿನಗಳ ಸಮಯ ಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಹೇಳಿದೆ.
ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಲು ವಿಳಂಬವಾದ ಹಿನ್ನೆಲೆಯಲ್ಲಿ 16 ತಿಂಗಳ ಕಾಲ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದ್ದ ಅವಧಿಯನ್ನು 5 ವರ್ಷದ ಅಧಿಕಾರವಧಿಗೆ ಪರಿಗಣಿಸಬಾರದು, ಅವಧಿ ಮುಗಿಯಲಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕ ಮಾಡುವ ಕ್ರಮಕ್ಕೆ ಮುಂದಾಗಬಾರದು ಎಂದು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ 65ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಹಾಜರಾಗಿ, ಅವಧಿ ಮುಗಿಯಲಿರುವ ಅಂದಾಜು 188 ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್ವಾರು ಮೀಸಲಾತಿ ನಿಗದಿಪಡಿಸಿ, ಅಂತಿಮ ಅಧಿಸೂಚನೆ ಹೊರಡಿಸಲು ಕನಿಷ್ಠ 150 ದಿನಗಳು ಬೇಕಾಗುತ್ತದೆ ಎಂದು ನ್ಯಾಯಾಲಯಕ್ಕೆ ಲಿಖಿತ ಹೇಳಿಕೆ ಸಲ್ಲಿಸಿ, ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮೀಸಲಾತಿ ಜತೆಗೆ ಕೆಲ ಸ್ಥಳೀಯ ಸಂಸ್ಥೆಗಳ ವಾರ್ಡ್ಗಳನ್ನು ಮರು ವಿಂಗಡಣೆ ಮಾಡಬೇಕಿದೆ. ಮೊದಲು ಕರಡು ಹೊರಡಿಸಿ, ಆಕ್ಷೇಪಣೆ ಆಹ್ವಾನಿಸಿ, ಅವುಗಳನ್ನು ಇತ್ಯರ್ಥಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಬೇಕಾಗುತ್ತದೆ. ಇದಕ್ಕೆಲ್ಲ ಸುಮಾರು 150 ದಿನಗಳು ಬೇಕಾಗುತ್ತದೆ. ಮೀಸಲಾತಿ ಅಂತಿಮ ಅಧಿಸೂಚನೆ ಬಳಿಕ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು. ಬಳಿಕ ಆಯೋಗ ಮುಂದಿನ ಪ್ರಕ್ರಿಯೆ ಪ್ರಾರಂಭಿಸಬಹುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಇದಕ್ಕೆ ಆಕ್ಷೇಪಿಸಿದ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ, ಸ್ಥಳೀಯ ಸಂಸ್ಥೆಗಳಿಗೆ ಕಾಲಮಿತಿಯೊಳಗೆ ಚುನಾವಣೆ ನಡೆಸುವ ಹಾಗೂ ಅವಧಿ ಮುಗಿದ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡುವ ವಿಚಾರದಲ್ಲಿ ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಸಕಾಲಕ್ಕೆ ಚುನಾವಣೆ ನಡೆಸದೇ ಸುದೀರ್ಘ ಅವಧಿಗೆ ಸ್ಥಳೀಯ ಸಂಸ್ಥೆಗಳನ್ನು ಖಾಲಿ ಇಡುವುದು, ಮಿತಿಗಿಂತ ಹೆಚ್ಚು ಅವಧಿ ಆಡಳಿತಾಧಿಕಾರಿಗಳನ್ನು ನೇಮಕ ಮಾಡುವುದು ಸಂವಿಧಾನ ಮತ್ತು ಕಾಯ್ದೆಗೆ ವಿರುದ್ಧವಾಗಿದೆ. ಕೆಲವು ನಗರ ಸ್ಥಳೀಯ ಸಂಸ್ಥೆಗಳಿಗಷ್ಟೇ ವಾರ್ಡ್ ಮರು ವಿಂಗಡಣೆ ಮಾಡಬೇಕಿದೆ. ಅದನ್ನು ಮುಗಿಸಿ ಸರ್ಕಾರ ಮೀಸಲಾತಿ ನಿಗದಿ ಪ್ರಕ್ರಿಯೆ ಆರಂಭಿಸುತ್ತಿದ್ದಂತೆ, ಅದರ ಜತೆಜತೆಯಾಗಿ ಆಯೋಗ ಮತದಾರರ ಪಟ್ಟಿ ತಯಾರಿಸಲು ಅನುಮತಿ ನೀಡಬೇಕು ಎಂದು ಕೋರಿದರು.
ಬುಧವಾರ ಸಭೆ ನಡೆಸಲು ಸೂಚನೆ:
ವಾದ ಆಲಿಸಿದ ನ್ಯಾಯಪೀಠ, ನಗರ ಸ್ಥಳೀಯ ಸಂಸ್ಥೆಗಳಿಗೆ ಯಾವಾಗ ಚುನಾವಣೆ ನಡೆಸುತ್ತೀರಿ, ಅದಕ್ಕೂ ಮೊದಲು ವಾರ್ಡ್ ಮರು ವಿಂಗಡಣೆ ಮತ್ತು ಮೀಸಲಾತಿ ಪ್ರಕ್ರಿಯೆ ನಿರ್ದಿಷ್ಠವಾಗಿ ಯಾವ ಕಾಲಮಿತಿಯಲ್ಲಿ ಮುಗಿಯಲಿದೆ. ಈ ಪ್ರಕ್ರಿಯೆ ನಡೆಯುತ್ತಿರುವಾಗಲೇ ಚುನಾವಣಾ ಆಯೋಗ ಮತದಾರರ ಪಟ್ಟಿ ತಯಾರಿಸುವ ಕಾರ್ಯ ನಡೆಸಬಹುದೇ ಎಂಬ ಬಗ್ಗೆ ಚರ್ಚಿಸಲು ಸರ್ಕಾರ ಮತ್ತು ಚುನಾವಣಾ ಆಯೋಗ ಬುಧವಾರ (ನವೆಂಬರ್ 5) ಚುನಾವಣಾ ಆಯೋಗದ ಕಚೇರಿಯಲ್ಲಿ ಸಭೆ ನಡೆಸಿ ಅದರ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ನವೆಂಬರ್ 11ಕ್ಕೆ ಮುಂದೂಡಿತು.
ಇದೇ ವೇಳೆ, ಅವಧಿ ವಿಸ್ತರಿಸಬೇಕು ಮತ್ತು ಆಡಳಿತಾಧಿಕಾರಿ ನೇಮಕ ಮಾಡಬಾರದು ಎಂದು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ, ಧಾರವಾಡ ಹೈಕೋರ್ಟ್ ಪೀಠ ಆದೇಶ ಕಾಯ್ದಿರಿಸಿದೆ ಎಂದು ಹೇಳಲಾಗಿದೆ. ಆದ್ದರಿಂದ, ಇದೇ ವಿಷಯದ ಬಗ್ಗೆ ಈಗಾಗಲೇ ಆದೇಶ ಕಾಯ್ದಿರಿಸಿರುವಾಗ, ವಿಚಾರಣೆ ಮುಂದುವರಿಸುವುದು ಹೇಗೆ? ಈ ಬಗ್ಗೆ ಧಾರವಾಡ ಹೈಕೋರ್ಟ್ ಪೀಠದಿಂದ ಮಂಗಳವಾರ ಸ್ಪಷ್ಟನೆ ಪಡೆದು ನ್ಯಾಯಾಲಯಕ್ಕೆ ತಿಳಿಸುವಂತೆ ಸರ್ಕಾರದ ಪರ ವಕೀಲರಿಗೆ ನ್ಯಾಯಪೀಠ ಸೂಚಿಸಿತು.
ಸರ್ಕಾರಕ್ಕೆ ಚುನಾವಣೆ ಬೇಕಿಲ್ಲ; ಅರ್ಜಿದಾರರ ಆರೋಪ:
ವಿಚಾರಣೆ ವೇಳೆ ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್. ಬಸವರಾಜ್, ವಾರ್ಡ್ ಮರು ವಿಂಗಡಣೆ ಮಾಡಲು, ಮೀಸಲಾತಿ ನಿಗದಿಪಡಿಸಲು ತಮ್ಮದೇನು ಅಡ್ಡಿಯಿಲ್ಲ. ಒಂದೊಮ್ಮೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದೇ ಆದಲ್ಲಿ, ಎಲ್ಲ ಅರ್ಜಿದಾರರು ತಮ್ಮ ಮನವಿಯಿಂದ ಹಿಂದೆ ಸರಿಯಲಿದ್ದಾರೆ. ಆದರೆ, ಅಸಲಿಗೆ ಸರ್ಕಾರಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆಯೇ ಬೇಕಿಲ್ಲ. ಆದಷ್ಟು ಬೇಗ ಸ್ಥಳೀಯ ಸಂಸ್ಥೆಗಳನ್ನು ಆಡಳಿತಾಧಿಕಾರಿಗಳ ವಶಕ್ಕೆ ಒಪ್ಪಿಸುವ ಉದ್ದೇಶ ಸರ್ಕಾರ ಹೊಂದಿದೆ. ಆಡಳಿತಾಧಿಕಾರಿಗಳ ನೇಮಕಕ್ಕೆ ಸರ್ಕಾರ ಯಾಕಿಷ್ಟು ಆತುರಪಡುತ್ತಿದೆ ಎಂದು ಅರ್ಥವಾಗುತ್ತಿಲ್ಲ. ಈಗಾಗಲೇ ಬಿಬಿಎಂಪಿಗೆ ಹಲವು ವರ್ಷಗಳಿಂದ ಚುನಾವಣೆ ನಡೆದಿಲ್ಲ, ಪಂಚಾಯಿತಿಗಳಿಗೆ ನಾಲ್ಕು ವರ್ಷಗಳಿಂದ ಚುನಾವಣೆ ಆಗಿಲ್ಲ. ಈಗ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡಿದರೆ, ಕನಿಷ್ಟ ಒಂದು ವರ್ಷದ ತನಕ ಸರ್ಕಾರ ಚುನಾವಣೆ ನಡೆಸುವುದಿಲ್ಲ ಎಂದು ಆರೋಪಿಸಿದರು.
Related Articles
                            Thank you for your comment. It is awaiting moderation.
                        
                                        
                    
                    
                
                            
                                            
                                                                                                                                                    
                                                                                                                                                    
                                                                                                                                                    
                                                                                                                                                    
                                                                                                                                                    
                                                                                                                                                    
Comments (0)