ಗ್ರಾ.ಪಂ.ಗಳಿಗೆ ಮೀಸಲಾತಿ ಅಧಿಸೂಚನೆ ಹೊರಡಿಸಲು ನಿರ್ದೇಶನ ಕೋರಿ ಚುನಾವಣಾ ಆಯೋಗದಿಂದ ಪಿಐಎಲ್; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಮುಂದಿನ ಜನವರಿಯಲ್ಲಿ ಅವಧಿ ಪೂರ್ಣಗೊಳ್ಳಲಿರುವ ರಾಜ್ಯದ 5,950 ಗ್ರಾಮ ಪಂಚಾಯಿತಿಗಳಿಗೆ ಸಕಾಲದಲ್ಲಿ ಚುನಾವಣೆ ನಡೆಸುವುದಕ್ಕಾಗಿ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ನಿರ್ದೇಶಿಸುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಡಿಸೆಂಬರ್ 11ಕ್ಕೆ ಮುಂದೂಡಿತು.

ಇದೇ ವೇಳೆ, ಜನವರಿಯಲ್ಲಿ ಗ್ರಾ.ಪಂ.ಗಳ ಅವಧಿ ಮುಗಿಯಲಿದ್ದು, ಅವುಗಳಿಗೆ ಸಕಾಲದಲ್ಲಿ ಚುನಾವಣೆ ನಡೆಯಬೇಕು. ಅದಕ್ಕಾಗಿ ಮೀಸಲಾತಿ ನಿಗದಿಯಾಗಬೇಕು. ಒಟ್ಟು ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸದ ಹೊರತು ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ಆಯೋಗಕ್ಕೆ ಸಾಧ್ಯವಿಲ್ಲ. ಇದೊಂದು ಗಂಭೀರ ವಿಷಯವಾಗಿದ್ದು, ಸರ್ಕಾರದಿಂದ ಅಗತ್ಯ ಮಾಹಿತಿಗಳನ್ನು ಪಡೆದು 2 ವಾರಗಳಲ್ಲಿ ನ್ಯಾಯಾಲಯಕ್ಕೆ ತಿಳಿಸುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿತು.

ಆಯೋಗದ ಮನವಿ ಏನು?
ರಾಜ್ಯದ ಗ್ರಾ.ಪಂ.ಗಳಿಗೆ 2020ರಲ್ಲಿ ಸಾರ್ವತ್ರಿಕ ಚುನಾವಣೆ ನಡೆದಿತ್ತು. ಅವುಗಳ ಅವಧಿ ಮುಂದಿನ ವರ್ಷ ಜನವರಿಯಲ್ಲಿ ಮುಕ್ತಾಯವಾಗಲಿದೆ. ಮುಂದಿನ ಅವಧಿಗೆ ಹೊಸದಾಗಿ ಚುನಾವಣೆ ನಡೆಸಬೇಕಾದರೆ ಮೀಸಲಾತಿ ನಿಗದಿಯಾಗಬೇಕು. ಗ್ರಾ.ಪಂ.ಗಳಿಗೆ ಮೀಸಲಾತಿ ನಿಗದಿಪಡಿಸಬೇಕಾಗಿರುವುದು ಸರ್ಕಾರದ ಜವಾಬ್ದಾರಿಯಾಗಿದೆ. ಅದೇ ರೀತಿ ಚುನಾವಣೆ ನಡೆಸುವುದು ರಾಜ್ಯ ಚುನಾವಣಾ ಆಯೋಗದ ಹೊಣೆಗಾರಿಕೆಯಾಗಿದೆ. ಮೀಸಲಾತಿ ಅಂತಿಮಗೊಳ್ಳುವ ತನಕ ಚುನಾವಣಾ ದಿನಾಂಕ ಘೋಷಿಸಲು ಸಾಧ್ಯವಿಲ್ಲ. ಮೀಸಲಾತಿ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದ್ದರಿಂದ, ಸರ್ಕಾರಕ್ಕೆ ಈ ನಿಟ್ಟಿನಲ್ಲಿ ಸೂಕ್ತ ನಿರ್ದೇಶನ ನೀಡಬೇಕು ಎಂದು ಚುನಾವಣಾ ಆಯೋಗ ಮನವಿ ಮಾಡಿದೆ.

Related Articles

Comments (0)

Leave a Comment