ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಜನಸಂದಣಿ ನಿಯಂತ್ರಣಕ್ಕೆ ಎಸ್‌ಒಪಿ ಸಿದ್ಧ; ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಂಥ ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ತಡೆಯುವ ಸಲುವಾಗಿ ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕೆ ಸಂಬಂಧಿಸಿದ ಪ್ರಮಾಣೀಕೃತ ಕಾರ್ಯಾಚರಣೆ ವಿಧಾನವನ್ನು (ಎಸ್‌ಒಪಿ) ಸಿದ್ಧಪಡಿಸಲಾಗಿದ್ದು, ಎಲ್ಲ ಪಕ್ಷಕಾರರಿಗೂ ಪ್ರತಿಯನ್ನು ಹಂಚಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಆರ್‌ಸಿಬಿ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಕುರಿತ ಮಾಧ್ಯಮಗಳ ವರದಿ ಆಧರಿಸಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು, ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಿಸಲು ಎಸ್‌ಒಪಿ ಸಿದ್ಧವಾಗಿದ್ದು, ಅಮೈಕಸ್‌ ಕ್ಯೂರಿ ಎಸ್‌. ಸುಶೀಲಾ ಅವರು ನೀಡಿರುವ ಕೆಲ ಸಲಹೆಗಳನ್ನು ಅದರಲ್ಲಿ ಅಡಕಗೊಳಿಸಲಾಗುವುದು. ಜತೆಗೆ ಎಲ್ಲ ಪಕ್ಷಕಾರರಿಗೆ ಪ್ರತಿಯನ್ನು ಹಂಚಿ, ಅವರೆಲ್ಲರೂ ನೀಡುವ ಸಲಹೆಗಳನ್ನೂ ಅಡಕಗೊಳಿಸಿ, ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಆಗ ನ್ಯಾಯಪೀಠ, ಎಸ್‌ಒಪಿಗೆ ಸೀಮಿತವಾಗಿ ಪ್ರಕರಣವನ್ನು ನೋಡಲಾಗುವುದು. ಅದನ್ನು ಮೀರುವುದಿಲ್ಲ. ಎಲ್ಲರಿಗೂ ಎಸ್‌ಒಪಿ ಪ್ರತಿಯನ್ನು ಹಂಚಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು 2026ರ ಜನವರಿ 20ಕ್ಕೆ ಮುಂದೂಡಿತು.

Related Articles

Comments (0)

Leave a Comment