ಬಿಜೆಪಿ ವಿರುದ್ಧ ಜಾಹೀರಾತು; ರಾಹುಲ್ ಪಾತ್ರವಿಲ್ಲವೆಂದು ಹೈಕೋರ್ಟ್ನಲ್ಲಿ ವಕೀಲರ ಪ್ರತಿಪಾದನೆ
- by Jagan Ramesh
- December 4, 2025
- 15 Views
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಪ್ರಮುಖ ಆಂಗ್ಲ ಮತ್ತು ಕನ್ನಡ ದಿನಪತ್ರಿಕೆಗಳ ಮುಖಪುಟದಲ್ಲಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿ ಕಾಂಗ್ರೆಸ್ ಜಾಹೀರಾತು ನೀಡಿರುವುದರಲ್ಲಿ ರಾಹುಲ್ ಗಾಂಧಿ ಅವರ ಯಾವುದೇ ಪಾತ್ರವಿಲ್ಲ ಎಂದು ಹಿರಿಯ ವಕೀಲ ಕೆ. ಶಶಿಕಿರಣ್ ಶೆಟ್ಟಿ ಹೈಕೋರ್ಟ್ಗೆ ವಿವರಿಸಿದರು.
ಬಿಜೆಪಿ ಹೂಡಿರುವ ಮಾನಹಾನಿ ಪ್ರಕರಣ ರದ್ದು ಕೋರಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ರಾಹುಲ್ ಪರ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಪತ್ರಿಕೆಗಳಿಗೆ ಜಾಹೀರಾತು ನೀಡಿದೆಯೇ ಹೊರತು ರಾಹುಲ್ ಗಾಂಧಿಯಲ್ಲ. ಅದನ್ನು ಪ್ರಕಟಿಸಿದ ಪತ್ರಿಕೆಗಳ ಸಂಪಾದಕರನ್ನು ದೂರುದಾರರು ಪಕ್ಷಕಾರರನ್ನಾಗಿ ಮಾಡಿಲ್ಲ. ಮಾನಹಾನಿ ಪ್ರಕರಣದಲ್ಲಿ ಯಾರು ಪ್ರಕಟಿಸುತ್ತಾರೋ ಅವರನ್ನೂ ಪಕ್ಷಕಾರರನ್ನಾಗಿ ಮಾಡಬೇಕು. ಜಾಹೀರಾತು ನೀಡಲು ಯಾರು ಅಧಿಕಾರ ನೀಡಿದ್ದಾರೆ ಮತ್ತು ಅವುಗಳನ್ನು ಯಾವಾಗ ನೀಡಲಾಗಿದೆ ಎಂಬುದನ್ನು ಪತ್ತೆ ಮಾಡಲಾಗಿಲ್ಲ ಎಂದು ಆಕ್ಷೇಪಿಸಿದರು.
ಜಾಹೀರಾತು ನೀಡಿದ್ದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಅನರ್ಹಗೊಂಡಿತ್ತು. ಪಕ್ಷದಲ್ಲೂ ಅವರು ಯಾವುದೇ ಹುದ್ದೆ ಅಥವಾ ಸ್ಥಾನ ಹೊಂದಿರಲಿಲ್ಲ. ಬಿಜೆಪಿ ವಿರುದ್ಧ ಜಾಹೀರಾತು ನೀಡಿರುವುದರಲ್ಲಿ ರಾಹುಲ್ ಗಾಂಧಿ ಅವರ ಪಾತ್ರವಿಲ್ಲ. ಟ್ವೀಟ್ ಅನ್ನು ರೀಟ್ವೀಟ್ ಮಾಡಿದ ಆರೋಪವನ್ನು ಅವರ ವಿರುದ್ಧ ಮಾಡಲಾಗಿದೆ. ದೂರು ಅಥವಾ ಸ್ವಯಂ ಹೇಳಿಕೆಯಲ್ಲಿ ಈ ಸಂಬಂಧ ಯಾವುದೇ ದಾಖಲೆ ಇಲ್ಲ. ವಿವೇಚನಾರಹಿತ ಮತ್ತು ಆಧಾರರಹಿತ ಆರೋಪಗಳನ್ನು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.
ಬಿಜೆಪಿ ಪರ ವಾದ ಮಂಡಿಸಿದ ವಕೀಲ ಎಂ. ವಿನೋದ್ ಕುಮಾರ್, ಜಾಹೀರಾತು ನೀಡುವ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾಗಿದ್ದರು. ರೀಟ್ವೀಟ್ ಮಾಡುವುದೂ ಮಾನಹಾನಿ ಅಡಿ ಬರುತ್ತದೆ. ವಿಧಾನಸಭೆ ಚುನಾವಣೆಗೆ 3 ದಿನ ಬಾಕಿ ಇರುವಾಗ ಕಾಂಗ್ರೆಸ್ ಪಕ್ಷವು ಬಿಜೆಪಿಯ ಮಾನಹಾನಿ ಮಾಡಲು ಸ್ವಯಂಪ್ರೇರಿತವಾಗಿ ಪತ್ರಿಕೆಗಳಿಗೆ ಜಾಹೀರಾತು ನೀಡಿದೆ. ಇಲ್ಲಿ ಪತ್ರಿಕೆಗಳು ಸುದ್ದಿ ಪ್ರಕಟಿಸಿಲ್ಲ. ಆದ್ದರಿಂದ, ಪತ್ರಿಕೆ ಸಂಪಾದಕರನ್ನು ಪಕ್ಷಕಾರರನ್ನಾಗಿಸಿಲ್ಲ. ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ದಾಖಲೆಗಳನ್ನು ಹೈಕೋರ್ಟ್ ಮುಂದಿಡಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಉಭಯ ಪಕ್ಷಕಾರರು ವಾದಾಂಶ ಸಲ್ಲಿಸಬೇಕು. ದೂರಿನ ಆಧಾರದಲ್ಲಿ ರಾಹುಲ್ ಗಾಂಧಿಯ ಪಾತ್ರ ಹಾಗೂ ಸ್ವಯಂ ಹೇಳಿಕೆಯನ್ನು ಅಡಕಗೊಳಿಸಬೇಕು ಎಂದು ಆದೇಶಿಸಿ, ವಿಚಾರಣೆಯನ್ನು ಡಿಸೆಂಬರ್ 11ಕ್ಕೆ ಮುಂದೂಡಿತು. ಜತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡಿ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಮುಂದಿನ ವಿಚಾರಣೆವರೆಗೆ ವಿಸ್ತರಿಸಿತು.
ಪ್ರಕರಣವೇನು?
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಭ್ರಷ್ಟಾಚಾರವನ್ನು ಪ್ರಧಾನ ಅಸ್ತ್ರವಾಗಿಸಿದ್ದ ಕಾಂಗ್ರೆಸ್ ಪಕ್ಷ 2023ರ ಮೇ 5ರಂದು ಎಲ್ಲ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಡಿ ವಿವಿಧ ಹುದ್ದೆಗಳಿಗೆ ಬಿಜೆಪಿ ಲಂಚ ನಿಗದಿಪಡಿಸಿದೆ ಎಂದು ಆರೋಪಿಸಿ ಜಾಹೀರಾತು ನೀಡಿತ್ತು.
ಜತೆಗೆ, ಕೋವಿಡ್ ಸಾಮಗ್ರಿಗಳ ಪೂರೈಕೆ, ಲೋಕೋಪಯೋಗಿ ಗುತ್ತಿಗೆಗಳು, ಮಠಗಳಿಗೆ ಅನುದಾನ, ಶಾಲೆಗಳಿಗೆ ಮೊಟ್ಟೆ ಪೂರೈಕೆ, ರಸ್ತೆ ಕಾಮಗಾರಿಗಳಲ್ಲಿ ಶೇ 25-30 ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್, ಪತ್ರಿಕೆಗಳಿಗೆ ನೀಡಿದ ಜಾಹೀರಾತಿನ ಕೊನೆಯಲ್ಲಿ ಶೇ. 40 ಕಮಿಷನ್ನ (ಬಿಜೆಪಿ) ಸರ್ಕಾರ 1.5 ಲಕ್ಷ ಕೋಟಿ ರೂ.ಗಳನ್ನು ಕಳೆದ 4 ವರ್ಷಗಳಲ್ಲಿ ಲೂಟಿ ಮಾಡಿದೆ ಎಂದು ಆರೋಪಿಸಿತ್ತು.
ಇದರ ವಿರುದ್ಧ ದೂರು ದಾಖಲಿಸಿದ್ದ ಬಿಜೆಪಿ, ಡಬಲ್ ಇಂಜಿನ್ ಸರ್ಕಾರಕ್ಕೆ ಬದಲಾಗಿ ಟ್ರಬಲ್ ಇಂಜಿನ್ ಸರ್ಕಾರ ಎಂದು ಹೇಳುವ ಮೂಲಕ ಪಕ್ಷದ ವರ್ಚಸ್ಸಿಗೆ ಕಾಂಗ್ರೆಸ್ ಹಾನಿ ಮಾಡಿದೆ. ಚುನಾವಣೆಯಲ್ಲಿ ಗೆಲುವಿಗೆ ಅಡ್ಡಿಪಡಿಸಲಾಗಿದೆ. ಕೊನೆಯಲ್ಲಿ ಕಾಂಗ್ರೆಸ್ಗೆ ಮತ ನೀಡಿ ಎಂದು ಆರೋಪಿಗಳು ಕೇಳಿದ್ದಾರೆ. ಸುಳ್ಳು ಜಾಹೀರಾತು ನೀಡಲು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹಾಗೂ ರಾಹುಲ್ ಗಾಂಧಿ ನೇರ ಕಾರಣವಾಗಿದ್ದಾರೆ ಎಂದು ಆರೋಪಿಸಿತ್ತು.
ರಾಹುಲ್ ಗಾಂಧಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಈ ಸುಳ್ಳು ಜಾಹೀರಾತು ಹಂಚಿಕೊಳ್ಳುವ ಮೂಲಕ ಬಿಜೆಪಿಗೆ ಮಾನಹಾನಿ ಮಾಡುವ ಪ್ರಯತ್ನ ಮಾಡಲಾಗಿದೆ. ಆದ್ದರಿಂದ, ಕಾಂಗ್ರೆಸ್ ಪಕ್ಷ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ಖಾಸಗಿ ದೂರು ದಾಖಲಿಸಿತ್ತು.
ಈ ಸಂಬಂಧ 2023ರ ಜೂನ್ನಲ್ಲಿ ವಿಚಾರಣಾ ನ್ಯಾಯಾಲಯವು ಐಪಿಸಿ ಸೆಕ್ಷನ್ಗಳಾದ 499 ಮತ್ತು 500ರ ಅಡಿ ಕಾಂಗ್ರೆಸ್, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ವಿರುದ್ಧ ಕಾಗ್ನೈಜೆನ್ಸ್ (ವಿಚಾರಣೆಗೆ ಪರಿಗಣಿಸಿದ) ತೆಗೆದುಕೊಂಡಿದೆ. ಇದನ್ನು ರದ್ದು ಕೋರಿ ರಾಹುಲ್ ಗಾಂಧಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Related Articles
Thank you for your comment. It is awaiting moderation.


Comments (0)