ಗಡಿಪಾರು ಪ್ರಶ್ನಿಸಿ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ
- by Prashanth Basavapatna
- January 5, 2026
- 423 Views
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಪುತ್ತೂರು ಉಪ ವಿಭಾಗಾಧಿಕಾರಿಗಳು 2025ರ ಡಿಸೆಂಬರ್ 17ರಂದು ಹೊರಡಿಸಿರುವ ಆದೇಶ ರದ್ದುಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸೋಮವಾರ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯಲ್ಲಿ ರಾಜ್ಯ ಗೃಹ ಇಲಾಖೆಯ ಕಾರ್ಯದರ್ಶಿ, ಪುತ್ತೂರು ಉಪ ವಿಭಾಗಾಧಿಕಾರಿ, ಬಂಟ್ವಾಳ ಉಪವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅವರನ್ನು ಪ್ರತಿವಾದಿಗಳನ್ನಾಗಿಸಲಾಗಿದ್ದು, ಅರ್ಜಿಯು ಇನ್ನಷ್ಟೇ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಬೇಕಿದೆ.
ಪ್ರಕರಣದ ಹಿನ್ನೆಲೆ:
ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷದ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ಈ ಆದೇಶ ಪ್ರಶ್ನಿಸಿ ತಿಮರೋಡಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು 2025ರ ನವೆಂಬರ್ 17ರಂದು ಭಾಗಶಃ ಪುರಸ್ಕರಿಸಿದ್ದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಗಡಿಪಾರು ಆದೇಶ ಹೊರಡಿಸುವ ಮುನ್ನ ತಿಮರೋಡಿ ಅವರಿಗೆ ವಿವರಣೆ ಹಾಗೂ ಮನವಿ ಸಲ್ಲಿಸಲು ಸೂಕ್ತ ಅವಕಾಶ ನೀಡದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದರಿಂದ, ಗಡಿಪಾರು ಆದೇಶ ರದ್ದುಪಡಿಸಲಾಗುತ್ತಿದೆ ಎಂದು ಆದೇಶಿಸಿತ್ತು.
ಜತೆಗೆ, ಪ್ರಕರಣವನ್ನು ಪುತ್ತೂರು ಉಪ ವಿಭಾಗಾಧಿಕಾರಿಗೆ ಹಿಂದಿರುಗಿಸಿದ್ದ ನ್ಯಾಯಾಲಯ, ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಬೇಕು. ವಿಚಾರಣೆ ವೇಳೆ ಅರ್ಜಿದಾರರ ಅಹವಾಲನ್ನೂ ಆಲಿಸಿ, ನಂತರ ಸೂಕ್ತ ಕಾರಣಗಳೊಂದಿಗೆ ಕಾನೂನು ಪ್ರಕಾರ ಆದೇಶ ಹೊರಡಿಸಬೇಕು ಎಂದು ನಿರ್ದೇಶಿಸಿತ್ತು. ಹೈಕೋರ್ಟ್ ನಿರ್ದೇಶನದಂತೆ ಪ್ರಕರಣವನ್ನು ಹೊಸದಾಗಿ ಪರಿಗಣಿಸಿದ್ದ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು, ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಡಿಸೆಂಬರ್ 17ರಂದು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ತಿಮರೋಡಿ ಮತ್ತೊಮ್ಮೆ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ತಿಮರೋಡಿ ಆಕ್ಷೇಪವೇನು?
ಈ ಹಿಂದೆ ಹೊರಡಿಸಲಾಗಿದ್ದ ಗಡಿಪಾರು ಆದೇಶ ರದ್ದುಪಡಿಸಿದ್ದ ಹೈಕೋರ್ಟ್, ಪ್ರಕರಣವನ್ನು ಹೊಸದಾಗಿ ಪರಿಗಣಿಸಿ, ಸೂಕ್ತ ಆದೇಶ ಹೊರಡಿಸುವಂತೆ ನಿರ್ದೇಶಿಸಿತ್ತು. ಆದರೆ, ಪುತ್ತೂರು ಉಪ ವಿಭಾಗಾಧಿಕಾರಿಗಳು ಮತ್ತೊಂದು ಗಡಿಪಾರು ಆದೇಶ ಮಾಡಿದ್ದು, ಈ ಆದೇಶದಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಯ ನಿಬಂಧನೆಗಳ ಉಲ್ಲಂಘನೆಯಾಗಿದೆ. ಅರ್ಜಿದಾರರ ವಿರುದ್ಧದ ಆರೋಪಗಳಿಗೂ, ಅವರನ್ನು ಗಡಿಪಾರು ಮಾಡಿರುವ ಆದೇಶಕ್ಕೂ ಯಾವುದೇ ಸಂಬಂಧವಿಲ್ಲ. ಅರ್ಜಿದಾರರನ್ನು ಗಡಿಪಾರು ಮಾಡುವ ಸಂಬಂಧ ಸೂಕ್ತ ಕಾರಣಗಳನ್ನು ನೀಡಲು ಉಪ ವಿಭಾಗಾಧಿಕಾರಿಗಳು ವಿಫಲರಾಗಿದ್ದಾರೆ. ಆದ್ದರಿಂದ, ಗಡಿಪಾರು ಆದೇಶವನ್ನು ರದ್ದುಪಡಿಸಬೇಕು ಎಂದು ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
Related Articles
Thank you for your comment. It is awaiting moderation.


Comments (0)