ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ; ನಿರೀಕ್ಷಣಾ ಜಾಮೀನು ವಿಸ್ತರಿಸದಂತೆ ಸರ್ಕಾರದ ಮನವಿ

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಾಗಿದ್ದು, ಅವರಿಗೆ ಮಂಜೂರು ಮಾಡಲಾಗಿರುವ ನಿರೀಕ್ಷಣಾ ಜಾಮೀನು ವಿಸ್ತರಿಸದಂತೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿತು.

ಕೊಲೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಬಿ.ಎ. ಬಸವರಾಜ ಅಲಿಯಾಸ್ ಬೈರತಿ ಬಸವರಾಜು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ‌ ಮಂಗಳವಾರ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರದ ಪರ ಹಾಜರಿದ್ದ ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಬಿ.ಎನ್‌. ಜಗದೀಶ್‌ ಅವರು, ಬೈರತಿ ಬಸವರಾಜು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ. ಕಳೆದ ವಿಚಾರಣೆಯಲ್ಲಿ ಮಧ್ಯಂತರ ರಕ್ಷಣೆ ಪಡೆಯುವುದಕ್ಕಾಗಿ ಅರ್ಜಿಯ ಪ್ರತಿಯನ್ನು ವಿಶೇಷ ಸರ್ಕಾರಿ ಅಭಿಯೋಜಕರ ಕಚೇರಿಗೆ ನೀಡಲಾಗಿದೆ ಎಂದು ರಜಾಕಾಲದ ನ್ಯಾಯಪೀಠಕ್ಕೆ ತಪ್ಪು ಮಾಹಿತಿ ನೀಡಿ, ಪೂರಕ ಆದೇಶ ಪಡೆಯಲಾಗಿದೆ ಎಂದು ಆಕ್ಷೇಪಿಸಿದರು.

ರಜಾಕಾಲದ ನ್ಯಾಯಪೀಠದ ಆದೇಶದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯ ಪ್ರತಿಯನ್ನು ವಿಶೇಷ ಅಭಿಯೋಜಕರಿಗೆ ನೀಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಒಂದು ವೇಳೆ ತಮಗೆ ಅರ್ಜಿಯ ಪ್ರತಿ ಲಭ್ಯವಾಗಿರುವುದು ಸಾಬೀತಾದರೆ ಅರ್ಜಿದಾರರ ವಿರುದ್ಧದ ಎಲ್ಲ ಆರೋಪಗಳನ್ನು ಹಿಂಪಡೆಯಲಾಗುವುದು ಎಂದು ಸವಾಲೆಸೆದರಲ್ಲದೆ, ಪ್ರಕರಣದ ಸಂಬಂಧ ಎಸ್‌ಪಿಪಿ ನೇಮಕವಾಗಿದ್ದಾಗ ಅವರಿಗೆ ಅರ್ಜಿಯ ಪ್ರತಿ ಸಲ್ಲಿಸುವುದು ಅರ್ಜಿದಾರರ ಜವಾಬ್ದಾರಿ ಎಂದು ಹೇಳಿದರು.

ಆಗ ನ್ಯಾಯಪೀಠ, ಅರ್ಜಿದಾರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವುದು ಅಗತ್ಯವಿಲ್ಲ ಎಂದಾದಲ್ಲಿ ನಿರೀಕ್ಷಣಾ ಜಾಮೀನು ಕೋರಿರುವ ಅರ್ಜಿ ವಿಚಾರಣೆ ಮಾಡುವ ಅಗತ್ಯವಿಲ್ಲ ಎಂದು ಹೇಳಿತು. ಇದಕ್ಕೆ ಜಗದೀಶ್‌ ಅವರು, ಅರ್ಜಿದಾರರ ವಿರುದ್ಧ ತನಿಖೆ ನಡೆಯಬೇಕಾಗಿದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವುದು ಅಗತ್ಯವಿದೆ ಎಂದರು.

ಬೈರತಿ ಬಸವರಾಜು ಪರ ಹಿರಿಯ ವಕೀಲ ಸಂದೇಶ್‌ ಚೌಟ ಅವರು, ನಿರೀಕ್ಷಣಾ ಜಾಮೀನು ಅರ್ಜಿಯ ಪ್ರತಿಯನ್ನು ಸರ್ಕಾರಿ ವಕೀಲರಿಗೆ ನೀಡಲಾಗಿತ್ತು. ಈ ಸಂಬಂಧ ಅವರು ಮೆಮೊ ಸಲ್ಲಿಸಿದ್ದು, ವಿಶೇಷ ಸರ್ಕಾರಿ ಅಭಿಯೋಜಕರು ವಿದೇಶ ಪ್ರವಾಸದಲ್ಲಿದ್ದಾರೆ ಎಂದು ತಿಳಿಸಿದ್ದರು. ಇದರ ಆಧಾರದಲ್ಲಿ ರಜಾಕಾಲದ ನ್ಯಾಯಪೀಠ ಮಧ್ಯಂತರ ಆದೇಶ ಮಾಡಿದೆ. ನಮ್ಮ ಕಡೆಯಿಂದ ಯಾವುದೇ ಲೋಪವಾಗಿಲ್ಲ ಎಂದು ತಿಳಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಜನವರಿ 12ಕ್ಕೆ ಮುಂದೂಡಿತು.

Related Articles

Comments (0)

Leave a Comment