ಅಕೌಂಟೆಂಟ್ ಆತ್ಮಹತ್ಯೆಗೆ ಪ್ರಚೋದನೆ; ಚಾರ್ಜ್ಶೀಟ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಾಲ್ಮೀಕಿ ನಿಗಮದ ಮಾಜಿ ಎಂಡಿ ಪದ್ಮನಾಭ
- by Jagan Ramesh
- January 27, 2026
- 21 Views
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಅಕೌಂಟೆಂಟ್ ಆಗಿದ್ದ ಪಿ. ಚಂದ್ರಶೇಖರ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ಆರೋಪ ಪಟ್ಟಿ ರದ್ದು ಕೋರಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ ಸಲ್ಲಿಸಿರುವ ಅರ್ಜಿ ಸಂಬಂಧ ಸಿಐಡಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಪ್ರಕರಣದ ಸಂಬಂಧ ಶಿವಮೊಗ್ಗ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಿಐಡಿ ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿ ರದ್ದು ಕೋರಿ ಪದ್ಮನಾಭ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಸಿಐಡಿ ಪಾರ ಹಾಜರಿದ್ದ ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಚಂದ್ರಶೇಖರ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪದ್ಮನಾಭ ಮತ್ತು ಇತರರ ನಡುವೆ ಹೊಂದಾಣಿಕೆ ಇತ್ತು ಎಂಬುದಕ್ಕೆ ದಾಖಲೆ ಇದ್ದು, ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಇದನ್ನು ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ಸಿಐಡಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಫೆಬ್ರವರಿ 12ಕ್ಕೆ ಮುಂದೂಡಿತು.
ಪ್ರಕರಣವೇನು?
ನಿಗಮದ ಬೆಂಗಳೂರಿನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಪಿ. ಚಂದ್ರಶೇಖರ್ ಅವರು ರಜೆಯ ನಿಮಿತ್ತ 2024ರ ಮೇ 25, 26ರಂದು ಶಿವಮೊಗ್ಗದ ತಮ್ಮ ನಿವಾಸಕ್ಕೆ ಬಂದಿದ್ದರು. ಪತ್ನಿ ಇಲ್ಲದ ಸಮಯದಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವೇಳೆ ಚಂದ್ರಶೇಖರ್ ಮನೆಯಲ್ಲಿ ಮರಣ ಪತ್ರ ದೊರೆತಿದ್ದು, ಅದರಲ್ಲಿ ವಾಲ್ಮೀಕಿ ನಿಗಮದ 80-85 ಕೋಟಿ ರೂ. ಹಣವನ್ನು ಜೆ.ಜಿ. ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್ ದುರಗಣ್ಣವರ್ ಮತ್ತು ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ವ್ಯವಸ್ಥಾಪಕಿ ಶುಚಿಸ್ಮಿತಾ ರಾವುಲ್ ಅವರು ಅಕ್ರಮವಾಗಿ ಲೂಟಿ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದರು.
ಈ ಹಿನ್ನೆಲೆಯಲ್ಲಿ ಒತ್ತಡದಲ್ಲಿ ತಮ್ಮ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಚಂದ್ರಶೇಖರ್ ಅವರ ಪತ್ನಿ ಕವಿತಾ ಶಿವಮೊಗ್ಗದ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ 2024ರ ಮೇ 27ರಂದು ದೂರು ನೀಡಿದ್ದರು. ಇದರ ಅನ್ವಯ ಮೂವರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(2)(v) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಶುಚಿಸ್ಮಿತಾ ವಿರುದ್ಧದ ಆರೋಪ ಕೈಬಿಡಲಾಗಿದ್ದು, ಪದ್ಮನಾಭ ಮತ್ತು ದುರಗಣ್ಣವರ್ ಅವರಿಗೆ ಜಾಮೀನು ದೊರೆತಿದೆ. ಇದೀಗ, ಪ್ರಕರಣ ಸಂಬಂಧ ಸಿಐಡಿ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿ ರದ್ದು ಕೋರಿ ಪದ್ಮನಾಭ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Related Articles
Thank you for your comment. It is awaiting moderation.


Comments (0)