ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ ಮತ್ತೆ ಎಸಿಗೆ; ಹೊಸದಾಗಿ ಪರಿಗಣಿಸಲು ಹೈಕೋರ್ಟ್ ಆದೇಶ
- by Jagan Ramesh
- January 31, 2026
- 16 Views
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರ ಗಡಿಪಾರು ಪ್ರಕರಣವನ್ನು ಮತ್ತೆ ಪುತ್ತೂರು ಉಪವಿಭಾಗಾಧಿಕಾರಿಗೆ (ಎಸಿ) ಹಿಂದಿರುಗಿಸಿರುವ ಹೈಕೋರ್ಟ್, ತಿಮರೋಡಿ ಸಲ್ಲಿಸಿರುವ ಆಕ್ಷೇಪಣೆಗಳನ್ನು ಪರಿಗಣಿಸಿ, ಕಾನೂನು ಪ್ರಕ್ರಿಯೆ ಅನುಸರಿಸಿ ಹೊಸದಾಗಿ ಆದೇಶಿಸುವಂತೆ ನಿರ್ದೇಶಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ 2025ರ ಡಿಸೆಂಬರ್ 17ರಂದು ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ರದ್ದುಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಶನಿವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.
ಗಡಿಪಾರು ಪ್ರಕರಣದಲ್ಲಿ ಈ ಹಿಂದೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರತಿವಾದಿಯಾಗಿರುವ ಉಪ ವಿಭಾಗಾಧಿಕಾರಿಗಳು ಅನುಸರಿಸಿಲ್ಲ. ಖುಲಾಸೆಯಾಗಿರುವ ಪ್ರಕರಣಗಳನ್ನು ಉಲ್ಲೇಖಿಸಿ, ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಅದಕ್ಕೆ ಅರ್ಜಿದಾರರು ಸಲ್ಲಿಸಿರುವ ಆಕ್ಷೇಪಣೆಗಳನ್ನು ಪರಿಗಣಿಸದೆ, ವಿವೇಚನಾರಹಿತವಾಗಿ ಆದೇಶ ಹೊರಡಿಸಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಆದ್ದರಿಂದ, ಪ್ರಕರಣವನ್ನು ಮತ್ತೆ ಉಪವಿಭಾಗಾಧಿಕಾರಿಗೆ ಹಿಂದಿರುಗಿಸಲಾಗುತ್ತಿದೆ. ನ್ಯಾಯಾಲಯದ ಈ ಆದೇಶದ ಪ್ರತಿ ದೊರೆತ 3 ವಾರಗಳ ಒಳಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಸಲ್ಲಿಸಿರುವ ಆಕ್ಷೇಪಣೆಯನ್ನು ಪರಿಗಣಿಸಿ, ಉಪವಿಭಾಗಧಿಕಾರಿಗಳು ಕಾನೂನು ಪ್ರಕಾರ ಸೂಕ್ತ ಆದೇಶ ಹೊರಡಿಸಬೇಕು ನ್ಯಾಯಪೀಠ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ:
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ವಿವಿಧ ಠಾಣೆಗಳಲ್ಲಿ 32ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಅವರಿಂದ ಶಾಂತಿ ಭಂಗಕ್ಕೆ ಕಾರಣವಾಗುತ್ತಿದೆ. ಜಾತಿ, ಜಾತಿಗಳ ನಡುವೆ ಗೊಂದಲ ಸೃಷ್ಟಿಸಿದ್ದು, ಸಮಾಜದಲ್ಲಿ ಅಶಾಂತಿಯನ್ನುಂಟು ಮಾಡಿರುತ್ತಾರೆ ಎಂಬ ಕಾರಣಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷದ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ಈ ಆದೇಶ ಪ್ರಶ್ನಿಸಿ ತಿಮರೋಡಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು 2025ರ ನವೆಂಬರ್ 17ರಂದು ಭಾಗಶಃ ಪುರಸ್ಕರಿಸಿದ್ದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಗಡಿಪಾರು ಆದೇಶ ಹೊರಡಿಸುವ ಮುನ್ನ ತಿಮರೋಡಿ ಅವರಿಗೆ ವಿವರಣೆ ಹಾಗೂ ಮನವಿ ಸಲ್ಲಿಸಲು ಸೂಕ್ತ ಅವಕಾಶ ನೀಡದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದರಿಂದ, ಗಡಿಪಾರು ಆದೇಶ ರದ್ದುಪಡಿಸಲಾಗುತ್ತಿದೆ ಎಂದು ಆದೇಶಿಸಿತ್ತು.
ಜತೆಗೆ, ಪ್ರಕರಣವನ್ನು ಪುತ್ತೂರು ಉಪ ವಿಭಾಗಾಧಿಕಾರಿಗೆ ಹಿಂದಿರುಗಿಸಿದ್ದ ನ್ಯಾಯಾಲಯ, ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಬೇಕು. ವಿಚಾರಣೆ ವೇಳೆ ಅರ್ಜಿದಾರರ ಅಹವಾಲನ್ನೂ ಆಲಿಸಿ, ನಂತರ ಸೂಕ್ತ ಕಾರಣಗಳೊಂದಿಗೆ ಕಾನೂನು ಪ್ರಕಾರ ಆದೇಶ ಹೊರಡಿಸಬೇಕು ಎಂದು ನಿರ್ದೇಶಿಸಿತ್ತು. ಹೈಕೋರ್ಟ್ ನಿರ್ದೇಶನದಂತೆ ಪ್ರಕರಣವನ್ನು ಹೊಸದಾಗಿ ಪರಿಗಣಿಸಿದ್ದ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು, ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಡಿಸೆಂಬರ್ 17ರಂದು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ತಿಮರೋಡಿ ಮತ್ತೊಮ್ಮೆ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
Related Articles
Thank you for your comment. It is awaiting moderation.


Comments (0)