ಆದಾಯ ಮೀರಿ ಆಸ್ತಿ ಗಳಿಕೆ ಆರೋಪ; ಜಮೀರ್ ಅಹ್ಮದ್ ಆಪ್ತನ ವಿರುದ್ಧದ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ತಡೆ
- by Prashanth Basavapatna
- February 12, 2026
- 12 Views
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಸಂಬಂಧ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ವಿರುದ್ಧದ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ ಹಾಗೂ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಸರ್ಫರಾಜ್ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರು ಸಲ್ಲಿಸಿರುವ ಮಾಹಿತಿಗಳನ್ನು ಗಮನಿಸಿದಾಗ ಎಲ್ಲವೂ ಆದಾಯ ತೆರಿಗೆ ಇಲಾಖೆಯಲ್ಲಿ ಘೋಷಿಸಿಕೊಂಡ ವಿವರಗಳು ಆಗಿವೆ. ಮೇಲಾಗಿ ಜಪ್ತಿ ಮತ್ತು ಮಹಜರು ವೇಳೆ ಯಾವುದೇ ನಗದು ವಶಪಡಿಸಿಕೊಂಡಿರುವ ಬಗ್ಗೆ ನಿಖರ ಮಾಹಿತಿ ಲೋಕಾಯುಕ್ತ ಬಳಿ ಇಲ್ಲ. ದಾಖಲೆಗಳನ್ನು ಮಾತ್ರ ಜಪ್ತಿ ಮಾಡಲಾಗಿದೆ. ಆದ್ದರಿಂದ, ಈ ಪ್ರಕರಣವನ್ನು ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಥವಾ ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದಡಿ ಪರಿಗಣಿಸಲು ಬರುವುದಿಲ್ಲ ಎಂದು ತಿಳಿಸಿ, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶಿಸಿತು.
ಇದಕ್ಕೂ ಮುನ್ನ ವಾದ ಮಂಡಿಸಿದ ಲೋಕಾಯುಕ್ತ ಪರ ವಕೀಲರು, ದಾಳಿ ಸಂದರ್ಭದಲ್ಲಿ ನಡೆಸಿದ ಜಪ್ತಿ ಹಾಗೂ ಮಹಜರಿನ ವೇಳೆ ಅಲ್ಪ ಪ್ರಮಾಣದ ನಗದು ಸಿಕ್ಕಿದೆ ಎಂಬ ಮಾಹಿತಿ ಇದೆ. ವಶಪಡಿಸಿಕೊಂಡ ದಾಖಲೆಗಳ ಪ್ರಾಥಮಿಕ ಪರಿಶೀಲನೆ ನಡೆಸಿದಾಗ ಘೋಷಿತ ಆದಾಯಕ್ಕಿಂತ ಶೇ.131 ಅಧಿಕ ಆಸ್ತಿ ಹೊಂದಿರುವುದು ಅಂದಾಜಿಸಲಾಗಿದೆ. 2.84 ಕೋಟಿ ರೂ.ಗಳ ಬಗ್ಗೆ ಪರಿಶೀಲನೆ ನಡೆಸಬೇಕಾಗಿದೆ ಎಂದರು.
ಲೋಕಾಯುಕ್ತ ಪೊಲೀಸರು ಅನುಮಾನ ವ್ಯಕ್ತಪಡಿಸಿರುವ 2.84 ಕೋಟಿ ರೂ.ಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಸರ್ಫರಾಜ್ ಖಾನ್ ಪರ ವಕೀಲರಿಗೆ ಸೂಚಿಸಿದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಫೆಬ್ರವರಿ 27ಕ್ಕೆ ಮುಂದೂಡಿತು.
Related Articles
Thank you for your comment. It is awaiting moderation.


Comments (0)