ಬಿಕ್ಲು ಶಿವು ಕೊಲೆ ಪ್ರಕರಣ; ಶಾಸಕ ಬೈರತಿ ಬಸವರಾಜ್‌ಗೆ ಷರತ್ತುಬದ್ಧ ಜಾಮೀನು ನೀಡಿದ ವಿಶೇಷ‌ ನ್ಯಾಯಾಲಯ

ಬೆಂಗಳೂರು: ರೌಡಿ ಶೀಟರ್‌ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕೆ.ಆರ್‌.ಪುರ ಶಾಸಕ ಬೈರತಿ ಬಸವರಾಜ್‌‌ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ‌ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು (Anticipatory Bail) ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದ ಬೆನ್ನಲ್ಲೇ ಬಂಧನಕ್ಕೊಳಗಾಗಿದ್ದ ಬೈರತಿ ಬಸವರಾಜ್ ನಿಯಮಿತ ಜಾಮೀನು (Regular Bail) ಕೋರಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್​ ಅವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

ಪ್ರಕರಣ ಸಂಬಂಧ ಅರ್ಜಿದಾರರನ್ನು ಈಗಾಗಲೇ ಪೊಲೀಸ್​ ವಶದಲ್ಲಿಟ್ಟುಕೊಂಡು ನಡೆಸಿರುವ ವಿಚಾರಣೆ ಪೂರ್ಣಗೊಂಡಿದ್ದು, ಮತ್ತೆ ಪೊಲೀಸ್​ ವಶದಲ್ಲಿರಿಸಿಕೊಂಡು ವಿಚಾರಣೆ ನಡೆಸಬೇಕಾದ ಅಗತ್ಯವಿಲ್ಲ ಎಂಬ ಅಂಶ ತನಿಖಾಧಿಕಾರಿಗಳು ಸಲ್ಲಿಸಿರುವ ರಿಮ್ಯಾಂಡ್​ ಅರ್ಜಿಯಿಂದ ತಿಳಿಯಲಿದೆ. ಆದ್ದರಿಂದ, ಅರ್ಜಿದಾರರಿಗೆ ಕಠಿಣ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಬಹುದಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಅರ್ಜಿದಾರರು 2 ಲಕ್ಷ ರೂ. ಬಾಂಡ್ ನೀಡಬೇಕು. ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಸಾಕ್ಷ್ಯ ತಿರುಚಲು ಅಥವಾ ನಾಶಪಡಿಸಲು ಯತ್ನಿಸಬಾರದು. ತನಿಖಾಧಿಕಾರಿಗಳು ಸೂಚಿಸಿದಾಗ ಅವರ ಮುಂದೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು. ವಿಚಾರಣಾ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ಹೋಗಬಾರದು, ಕೋರ್ಟ್ ಪೂರ್ವಾನುಮತಿ ಇಲ್ಲದೆ ದೇಶ ತೊರೆದು ಹೋಗಬಾರದು. ನ್ಯಾಯಾಲಯದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು. ಸಕಾರಣವಿಲ್ಲದೆ, ವಿಚಾರಣೆ ಮುಂದೂಡಲು ಕೋರಬಾರದು. ಪ್ರತಿ ತಿಂಗಳಿಗೊಮ್ಮೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಪಾಸ್​ಪೋರ್ಟ್​ ಅನ್ನು ತನಿಖಾಧಿಕಾರಿಗಳಿಗೆ ನೀಡಿರುವ ಸಂಬಂಧ ಪ್ರಮಾಣಪತ್ರ ಸಲ್ಲಿಸಬೇಕು ಎಂಬ ಷರತ್ತುಗಳನ್ನು ವಿಧಿಸಿರುವ ನ್ಯಾಯಾಲಯ ಬೈರತಿ ಬಸವರಾಜ್‌ಗೆ ಜಾಮೀನು ಮಂಜೂರು ಮಾಡಿದೆ.

Related Articles

Comments (0)

Leave a Comment