ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷಾ ವಿಷಯಕ್ಕೆ ಅಂಕಗಳ ಬದಲಿಗೆ ಗ್ರೇಡ್: ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ಗೆ ಪಿಐಎಲ್
- by Prashanth Basavapatna
- April 1, 2026
- 6 Views
ಬೆಂಗಳೂರು: ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಪರೀಕ್ಷೆಯಲ್ಲಿ (ಎಸ್ಎಸ್ಎಲ್ಸಿ) ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವುದಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ಪ್ರಸ್ತಾವ ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಬೆಂಗಳೂರಿನ ಎಚ್.ಎನ್. ಚಂದನಾ ಹಾಗೂ ಎಸ್. ವೆಂಕಟೇಶ್ ಅರ್ಜಿ ಸಲ್ಲಿಸಿದ್ದು, ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿ ಹಾಗೂ ಆಯುಕ್ತರು, ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿಸಲಾಗಿದೆ. ಅರ್ಜಿ ಇನ್ನಷ್ಟೇ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಬೇಕಿದೆ.
ಮನವಿ ಏನು?
ರಾಜ್ಯ ಸರ್ಕಾರದ ನಿರ್ಧಾರದಿಂದ ಸಂವಿಧಾನದ ಪರಿಚ್ಛೇದ 14ರ ಅಡಿಯ ಸಮಾನತೆ ಹಕ್ಕಿನ ಉಲ್ಲಂಘನೆಯಾಗಲಿದೆ. 21ನೇ ಪರಿಚ್ಛೇದದ ಅಡಿ ಶಿಕ್ಷಣ ಹಕ್ಕಿನ ಮೇಲೆ ಪರಿಣಾಮ ಬೀರಲಿದ್ದು, ವಿದ್ಯಾರ್ಥಿಗಳ ಭವಿಷ್ಯವನ್ನು ಅಸ್ಥಿರಗೊಳಿಸುತ್ತದೆ. ಸರ್ಕಾರದ ಅಧಿಕೃತ ಆದೇಶವಿಲ್ಲದೆ ನೀತಿ ಜಾರಿಗೆ ತರಲು ಸಾಧ್ಯವಿಲ್ಲ. ಆದ್ದರಿಂದ, ಸರ್ಕಾರದ ನಿರ್ಧಾರವನ್ನು ರದ್ದುಪಡಿಸುವ ನಿಟ್ಟಿನಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಬೇಕು ಎಂದು ಪಿಐಎಲ್ನಲ್ಲಿ ಕೋರಲಾಗಿದೆ.
ಅರ್ಜಿಯಲ್ಲೇನಿದೆ?
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ರಾಜ್ಯದಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ಕಡ್ಡಾಯವಲ್ಲ. ಈ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಲಾಗುತ್ತದೆ. ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ದ್ವಿಭಾಷಾ ಸೂತ್ರವನ್ನು ಜಾರಿಗೆ ತರವುದಾಗಿ ತಿಳಿಸಿದ್ದಾರೆ. ಅಲ್ಲದೆ, ಸಚಿವರು ಈ ನಿರ್ಧಾರವನ್ನು ಪ್ರಕಟಿಸುವುದಕ್ಕೂ ಮುನ್ನ ಸಾರ್ವಜನಿಕವಾಗಿ ಚರ್ಚೆ ನಡೆಸಿಲ್ಲ. ಸಚಿವ ಸಂಪುಟದ ಅನುಮೋದನೆ ಪಡೆದಿಲ್ಲ ಹಾಗೂ ಭಾಷಾ ತಜ್ಞರ ಸಲಹೆ ಇಲ್ಲದೇ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಅಂದರೆ ಮಾರ್ಚ್ 31ರಂದು ಈ ರೀತಿಯ ಹೇಳಿಕೆ ಹೊರಬಿದ್ದಿರುವುದರಿಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. ಆದರೆ, ಈವರೆಗೂ ಈ ಕುರಿತಂತೆ ಯಾವುದೇ ಅಧಿಕೃತ ಸರ್ಕಾರಿ ಆದೇಶ ಅಥವಾ ಅಧಿಸೂಚನೆ ಹೊರಬಂದಿಲ್ಲ. ಸಚಿವರ ಈ ನಿರ್ಧಾರಕ್ಕಾಗಿ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
Related Articles
Thank you for your comment. It is awaiting moderation.



Comments (0)