ಪ್ರಸಕ್ತ ಸಾಲಿನಲ್ಲಿ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ; ಆದೇಶ ಮರುಪರಿಶೀಲನೆಗೆ ಕೋರಿ ಸರ್ಕಾರದಿಂದ ಹೈಕೋರ್ಟ್ಗೆ ಅರ್ಜಿ
- by Jagan Ramesh
- April 17, 2026
- 24 Views
ಬೆಂಗಳೂರು: ಪ್ರಸಕ್ತ ಸಾಲಿನ (2025-2026) ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ನಿರ್ದೇಶಿಸಿ ಹೊರಡಿಸಿರುವ ಆದೇಶ ಮರುಪರಿಶೀಲಿಸುವಂತೆ ಕೋರಿ ರಾಜ್ಯ ಸರ್ಕಾರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಹೈಕೋರ್ಟ್ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಸ್ವೀಕರಿಸುವಂತೆ ಸೋಮವಾರ ಅಥವಾ ಮಂಗಳವಾರ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರ ನ್ಯಾಯಪೀಠಕ್ಕೆ ಮನವಿ ಮಾಡುವ ಸಾಧ್ಯತೆ ಇದೆ.
ಸರ್ಕಾರದ ಮನವಿ ಏನು?
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ಕೆಎಸ್ಇಎಬಿ) ನಿಯಮಗಳಿಗೆ ತಿದ್ದುಪಡಿ ತರಲು ಈಗಾಗಲೇ ಕರಡು ಅಧಿಸೂಚನೆಯನ್ನು ಏಪ್ರಿಲ್ 10ರಂದು ರಾಜ್ಯ ಸರ್ಕಾರ ತನ್ನ ವಿಶೇಷ ಗೆಜೆಟ್ನಲ್ಲಿ ಪ್ರಕಟಿಸಿದೆ. ಈ ಅಂಶವನ್ನು ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತರದೇ ಆದೇಶವನ್ನು ಪಡೆದುಕೊಂಡಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿರುವ ವಿಭಾಗೀಯ ನ್ಯಾಯಪೀಠ, ಅರ್ಜಿದಾರರಿಗೆ 1 ಲಕ್ಷ ರೂ. ದಂಡ ವಿಧಿಸಿದೆ. ಈ ವಿಷಯವನ್ನು ಪ್ರಸ್ತುತ ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತರದೇ ಸತ್ಯಾಂಶ ಮರೆಮಾಚಿದ್ದಾರೆ ಎಂದು ಮರುಪರಿಶೀಲನಾ ಅರ್ಜಿಯಲ್ಲಿ ಸರ್ಕಾರ ಪ್ರತಿಪಾದಿಸಿದೆ.
ಮೂಲ ರಿಟ್ ಅರ್ಜಿ ಸಂಬಂಧ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಅವಕಾಶವೇ ಸಿಕ್ಕಿಲ್ಲ. ಅರ್ಜಿದಾರರು ಕರಡು ಅಧಿಸೂಚನೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿಲ್ಲ ಎಂದು ಆಕ್ಷೇಪಿಸಿರುವ ಸರ್ಕಾರ, ಹಿಂದಿ ಸೇರಿ ಎಲ್ಲ ತೃತೀಯ ಭಾಷೆ ಮತ್ತು ಎನ್ಎಸ್ಕ್ಯೂಎಫ್ ವಿಷಯಗಳಲ್ಲಿ 80ಕ್ಕಿಂತ ಅಧಿಕ ಅಂಕ ಪಡೆದರೆ ಎ ಶ್ರೇಣಿ, 50ರಿಂದ 79 ಅಂಕ ಪಡೆದರೆ ಬಿ ಶ್ರೇಣಿ, 49ಕ್ಕಿಂತ ಕಡಿಮೆ ಅಂಕ ಪಡೆದರೆ ಸಿ ಶ್ರೇಣಿ ಎಂದು ಗ್ರೇಡ್ ನೀಡಲಾಗುತ್ತದೆ. ಆದರೆ, ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಮಾಡುವುದಿಲ್ಲ ಎಂದು ಅರ್ಜಿಯಲ್ಲಿ ವಿವರಿಸಿದೆ.
ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳ ನಡುವೆ ಸಮಾನ ಅವಕಾಶ ಕಲ್ಪಿಸಲು ಹಾಗೂ ಪರೀಕ್ಷಾ ಒತ್ತಡವನ್ನು ಕಡಿಮೆ ಮಾಡಲು ತೃತೀಯ ಭಾಷೆ ಮತ್ತು ಎನ್ಎಸ್ಕ್ಯೂಎಫ್ ವಿಷಯಗಳಿಗೆ ಅಂಕಗಳ ಬದಲಾಗಿ ಗ್ರೇಡ್ ನೀಡಲು ಉದ್ದೇಶಿಸಲಾಗಿದೆ. ಅಂಕದ ಬದಲು ಗ್ರೇಡ್ ನೀಡುವುದು ಸುಧಾರಣಾ ಕ್ರಮವಾಗಿದೆ. ಇದು ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರಯೋಜನಕಾರಿಯಾಗಿದೆ. ಸರ್ಕಾರದ ನಡೆಯಿಂದ ತೃತೀಯ ಭಾಷೆ ತಿರಸ್ಕಾರಕ್ಕೆ ಒಳಗಾಗುತ್ತದೆ ಎಂಬ ವಾದದಲ್ಲಿ ಹುರುಳಿಲ್ಲ. ಆದ್ದರಿಂದ, ಏಪ್ರಿಲ್ 15ರಂದು ಹೊರಡಿಸಿರುವ ಆದೇಶವನ್ನು ಮರುಪರಿಶೀಲಿಸಬೇಕು ಎಂದು ಸರ್ಕಾರ ನ್ಯಾಯಾಲಯವನ್ನು ಕೋರಿದೆ.
ಪ್ರಕರಣದ ಹಿನ್ನೆಲೆ:
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಮತ್ತು ರಾಷ್ಟ್ರೀಯ ಕೌಶಲ ಅರ್ಹತಾ ಚೌಕಟ್ಟು (ಎನ್ಎಸ್ಕ್ಯೂಎಫ್) ವಿಷಯಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪರೀಕ್ಷೆ ನಡೆಯುತ್ತಿದ್ದ ಸಂದರ್ಭದಲ್ಲಿ (ಮಾರ್ಚ್ 28) ಪ್ರಕಟಿಸಿದ್ದರು. ಇದನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರಾದ ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ್, ಉಡುಪಿಯ ಅನುಷಾ ಹಾಗೂ ಸುಧಿಕ್ಷಾ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು ಏಪ್ರಿಲ್ 15ರಂದು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ, 2025-2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಅಧಿಸೂಚನೆ ಹೊರಡಿಸಿದ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ನಿಯಮದಂತೆ ಮೌಲ್ಯಮಾಪನ ನಡೆಸಬೇಕು. ಹಿಂದಿ ಸೇರಿ ತೃತೀಯ ಭಾಷೆಗಳ ವಿಷಯಗಳಿಗೆ ಗ್ರೇಡ್ ಬದಲಾಗಿ ಅಂಕ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತ್ತು. ಈ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಸರ್ಕಾರ ಶುಕ್ರವಾರ ಹೈಕೋರ್ಟ್ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ.
Related Articles
Thank you for your comment. It is awaiting moderation.



Comments (0)