ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಜಮೀನು ಮಂಜೂರಾತಿ ಪ್ರಶ್ನಿಸಿ ಪಿಐಎಲ್; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು‌: ತುಮಕೂರು ನಗರದ ಹೊರವಲಯದಲ್ಲಿರುವ ಕೋಟ್ಯಂತರ ರೂಪಾಯಿ ಬೆಲೆಬಾಳುವ ಸರ್ಕಾರಿ ಜಮೀನನ್ನು ‘ಕಾಂಗ್ರೆಸ್ ಭವನ ಟ್ರಸ್ಟ್’ಗೆ ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಈ ಸಂಬಂಧ ಎನ್.ಎನ್. ಗೋಪಾಲಕೃಷ್ಣ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ, ತುಮಕೂರು ಜಿಲ್ಲಾಧಿಕಾರಿ, ಪೌರಾಡಳಿತ ನಿರ್ದೇಶನಾಲಯ ಹಾಗೂ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ನೊಟೀಸ್ ಜಾರಿಗೊಳಿಸಿ, ವಿಚಾರಣೆ ಮುಂದೂಡಿತು.

ಅರ್ಜಿದಾರರ ಆಕ್ಷೇಪವೇನು?
ತುಮಕೂರು ಹೋಬಳಿಯ ಮಾರಲೂರು ಗ್ರಾಮದ ಸರ್ವೆ ನಂಬರ್ 87/1 ಮತ್ತು 87/2 ರಲ್ಲಿರುವ ಸುಮಾರು 4 ಎಕರೆ ಜಮೀನನ್ನು 1942ರಲ್ಲಿ ಮೈಸೂರು ಮಹಾರಾಜರ ಕಾಲದಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ (ನಗರದ ಕಸ ವಿಲೇವಾರಿಗಾಗಿ) ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದರೆ, ಇತ್ತೀಚೆಗೆ ಈ ಜಮೀನಿನಲ್ಲಿ 2 ಎಕರೆ ಪ್ರದೇಶವನ್ನು ‘ಕಾಂಗ್ರೆಸ್ ಭವನ ಟ್ರಸ್ಟ್’ಗೆ ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

ರಾಜೀವ್ ಗಾಂಧಿನಗರ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಹೆಸರಿನಲ್ಲಿ ಜಮೀನಿಗಾಗಿ ಅರ್ಜಿ ಸಲ್ಲಿಕೆಯಾಗಿತ್ತು. ಆದರೆ, ಮಂಜೂರಾತಿ ನೀಡುವಾಗ ಯಾವುದೇ ಅರ್ಜಿ ಸಲ್ಲಿಸದ ‘ಕಾಂಗ್ರೆಸ್ ಭವನ ಟ್ರಸ್ಟ್’ಗೆ ಜಮೀನು ನೀಡಲಾಗಿದೆ. ಜಮೀನು ಮಂಜೂರಾಗುವ ಸಂದರ್ಭದಲ್ಲಿ ಕಾಂಗ್ರೆಸ್ ಭವನ ಟ್ರಸ್ಟ್ ಅಸ್ತಿತ್ವದಲ್ಲೇ ಇರಲಿಲ್ಲ. ಸಾರ್ವಜನಿಕ ಬಳಕೆಗೆ ಮೀಸಲಾಗಿದ್ದ ಜಮೀನನ್ನು ಖಾಸಗಿ ಸಂಸ್ಥೆಗೆ ನೀಡಲಾಗಿದೆ. ಈ ಖಾಸಗಿ ಸಂಸ್ಥೆಯ ಉದ್ದೇಶವೇ ಬಹಿರಂಗವಾಗಿಲ್ಲ ಎಂದು ಅರ್ಜಿದಾರರು ದೂರಿದ್ದಾರೆ.

ಮಾರುಕಟ್ಟೆ ದರದ ಪ್ರಕಾರ ಈ ಜಮೀನಿನ ಮೌಲ್ಯ ಸುಮಾರು 23 ಕೋಟಿ ರೂ. ಆಗಿದ್ದರೂ, ಸರ್ಕಾರ ಇದನ್ನು ಕೇವಲ 17 ಲಕ್ಷ ರೂ.ಗಳಿಗೆ (ಮಾರ್ಗದರ್ಶಿ ದರದ ಶೇ. 5 ರಷ್ಟು) ನೀಡಿದೆ. ಇದರಿಂದ, ಸರ್ಕಾರದ ಬೊಕ್ಕಸಕ್ಕೆ ಭಾರಿ ನಷ್ಟ ಉಂಟಾಗಿದೆ. ಸರ್ಕಾರಿ ಸುತ್ತೋಲೆಗಳ ಪ್ರಕಾರ ಇಂಥ ಜಮೀನುಗಳನ್ನು ಮಾರುಕಟ್ಟೆ ದರದಲ್ಲಿ ಮಾತ್ರ ಮಾರಾಟ ಮಾಡಬೇಕೆಂಬ ನಿಯಮವಿದ್ದು, ಅದನ್ನು ಇಲ್ಲಿ ಗಾಳಿಗೆ ತೂರಲಾಗಿದೆ. ಆದ್ದರಿಂದ, ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಜಮೀನು ಮಂಜೂರು ಮಾಡಿರುವ ಆದೇಶ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ‌ ಮನವಿ ಮಾಡಲಾಗಿದೆ.

Related Articles

Comments (0)

Leave a Comment