ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ
- by LegalSamachar
- May 26, 2026
- 112 Views
ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಸೌಜನ್ಯಾ ಸಾವಿನ ಕುರಿತು ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ 30ರಂದು ವಜಾಗೊಳಿಸಿದ್ದ ಏಕಸದಸ್ಯ ನ್ಯಾಯಪೀಠ, ಸರ್ಕಾರದ ಮುಂದೆ ಮೇಲ್ಮನವಿ ಸಲ್ಲಿಸಿಕೊಳ್ಳುವಂತೆ ಸೂಚಿಸಿತ್ತು. ಈ ಆದೇಶ ಪ್ರಶ್ನಿಸಿ ತಿಮರೋಡಿ ಸಲ್ಲಿಸಿರುವ ಮೇಲ್ಮನವಿಯು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಹಾಗೂ ನ್ಯಾಯಮೂರ್ತಿ ಎಸ್. ರಾಚಯ್ಯ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ನಿಗದಿಯಾಗಿತ್ತು.
ವಿಚಾರಣೆ ವೇಳೆ ತಿಮರೋಡಿ ಪರ ವಕೀಲರು, ಪ್ರಕರಣವು ಸಂಪೂರ್ಣ ರಾಜಕೀಯ ಪ್ರೇರಿತವಾಗಿದ್ದು, ಅರ್ಜಿದಾರರಿಗೆ ಕಿರುಕುಳ ನೀಡಲೆಂದೇ ಇಡೀ ರಾಜ್ಯದ ಆಡಳಿತ ಯಂತ್ರ ಅವರ ಹಿಂದೆ ಬಿದ್ದಿದೆ. ಖುಲಾಸೆಗೊಂಡ ಪ್ರಕರಣಗಳನ್ನು ಉಲ್ಲೇಖಿಸಿ ಗಡಿಪಾರು ಆದೇಶ ಹೊರಡಿಸಲಾಗಿದೆ. ಅದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ. ಆದ್ದರಿಂದ, ಗಡಿಪಾರು ಆದೇಶಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದರು.
ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೋಕೇಟ್ ಜನರಲ್, ಗಡಿಪಾರು ಆದೇಶಕ್ಕೆ ತಡೆ ನೀಡುವುದಕ್ಕೆ ಬಲವಾಗಿ ಆಕ್ಷೇಪಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣದ ಮೆರಿಟ್ ಬಗ್ಗೆ ಉಲ್ಲೇಖಿಸುವುದಿಲ್ಲ. ಆದರೆ, ಮೇಲ್ಮನವಿ ಸಲ್ಲಿಸಿರುವುದರಲ್ಲಿ ತಾಂತ್ರಿಕವಾಗಿ ತಪ್ಪಾಗಿದೆ. ಏಕಸದಸ್ಯ ನ್ಯಾಯಪೀಠದ ಆದೇಶದಂತೆ ಸರ್ಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕಿತ್ತು. ನೇರವಾಗಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವುದು ಸೂಕ್ತವಲ್ಲ. ಈ ಹಿನ್ನೆಲೆಯಲ್ಲಿ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ತಡೆ ನೀಡಲಾಗದು ಎಂದು ಹೇಳಿತು.
ಅಂತಿಮವಾಗಿ ಅರ್ಜಿ ಸಂಬಂಧ ರಾಜ್ಯ ಸರ್ಕಾರ, ಪುತ್ತೂರು ವಿಭಾಗಾಧಿಕಾರಿ ಮತ್ತಿತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಜೂನ್ 1ಕ್ಕೆ ಮುಂದೂಡಿತು.
Related Articles
Thank you for your comment. It is awaiting moderation.


Comments (0)