ಶಿರಸಿ ಪಂಡಿತ್ ಆಸ್ಪತ್ರೆ ಮೇಲ್ದರ್ಜೆ ಕಾಮಗಾರಿ ವಿಳಂಬ ಪ್ರಶ್ನಿಸಿ ಪಿಐಎಲ್; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
- by Jagan Ramesh
- June 2, 2026
- 123 Views
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪಂಡಿತ್ ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆ ಕಾಮಕಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಹಾಗೂ ವೈದ್ಯಕೀಯ ಸಿಬ್ಬಂದಿ ನೇಮಕಾತಿ ನಡೆಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಅನಂತಮೂರ್ತಿ ಹೆಗಡೆ ಚಾರಿಟಬಲ್ ಟ್ರಸ್ಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರ, ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗಳ ಆಡಳಿತ ಇಲಾಖೆಯ ನಿರ್ದೇಶಕರು, ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು, ಮುಖ್ಯ ಇಂಜಿನಿಯರ್, ಉತ್ತರ ಕನ್ನಡ ಜಿಲ್ಲಾಧಿಕಾರಿ, ಜಿಲ್ಲಾ ಸಹಾಯಕ ಆಯುಕ್ತರು ಮತ್ತು ಜಿಲ್ಲಾ ಪಂಚಾಯತ್ ಸಿಇಒಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆ ಮುಂದೂಡಿತು.
ಅರ್ಜಿದಾರರ ಮನವಿ:
ಕಾಲಮಿತಿಯೊಳಗೆ ಪಂಡಿತ್ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾಮಗಾರಿ ಪೂರ್ಣಗೊಳಿಸಬೇಕು. ಆಸ್ಪತ್ರೆಗೆ ಹೃದ್ರೋಗ ಹಾಗೂ ನರರೋಗ ತಜ್ಞರು ಸೇರಿದಂತೆ ವೈದ್ಯರು, ನರ್ಸ್, ಸಿಬ್ಬಂದಿಯನ್ನು ನೇಮಿಸಬೇಕು. ಜೀವ ಉಳಿಸುವ ವೈದ್ಯಕೀಯ ಉಪಕರಣಗಳು, ಸಿಟಿ ಸ್ಕ್ಯಾನ್, ಎಂಆರ್‌ಐ ಸ್ಕ್ಯಾನ್ ವ್ಯವಸ್ಥೆಗಳನ್ನು ಆಸ್ಪತ್ರೆಯಲ್ಲಿ ಅಳವಡಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಅರ್ಜಿದಾರರ ಆಕ್ಷೇಪವೇನು?
ರಾಜ್ಯ ಸರ್ಕಾರ 2020-21ನೇ ಸಾಲಿನ ಬಜೆಟ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿರುವ 100 ಹಾಸಿಗೆಗಳ ಪಂಡಿತ್ ಸಾರ್ವಜನಿಕ ಆಸ್ಪತ್ರೆಯನ್ನು 250 ಹಾಸಿಗೆಗಳ ಜಿಲ್ಲಾ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲಾಗುವುದು. ಅದಕ್ಕಾಗಿ 26.8 ಕೋಟಿ ರೂ. ವ್ಯಯಿಸಲಾಗುವುದು. ಮೂರು ವರ್ಷದಲ್ಲಿ ಈ ಯೊಜನೆ ಪೂರ್ಣಗೊಳಿಸಲಾಗುವುದು ಎಂದು ಘೋಷಣೆ ಮಾಡಿತ್ತು. ನಂತರ ಜಿಲ್ಲಾಸ್ಪತ್ರೆಯ ನಿರ್ಮಾಣಕ್ಕೆ ಟೆಂಡರ್ ಅಂತಿಮಗೊಳಿಸಲಾಗಿತ್ತು. ಆದರೆ, 5 ವರ್ಷ ಕಳೆದರೂ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಕಾಮಗಾರಿ ಶೇ.80 ಮಾತ್ರ ಪೂರ್ಣಗೊಳಿಸಲಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಸದ್ಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೃದ್ರೋಗ ಹಾಗೂ ನರರೋಗ ತಜ್ಞರು/ಸರ್ಜನ್‌ಗಳು ಇಲ್ಲ. ಇದರಿಂದ ಶಿರಸಿ, ಸಿದ್ದಾಪುರ, ಮುಂಡಗೋಡ ಹಾಗೂ ಹಾನಗಲ್ ಪ್ರದೇಶದಲ್ಲಿ ಹೃದ್ರೋಗ ಹಾಗೂ ನರಗಳ ಸಮಸ್ಯೆ ಅನುಭವಿಸುತ್ತಿರುವ ರೋಗಿಗಳು 125 ಕಿ.ಮೀ. ದೂರದ ಹುಬ್ಬಳ್ಳಿಯ ಆಸ್ಪತ್ರೆಗೆ ಹೋಗಬೇಕಿದೆ. ಹೃದಯಘಾತ, ಬ್ರೈನ್ ಹೆಮರೆಜ್ ಕಾಣಿಸಿಕೊಂಡಾಗ ತುರ್ತು ಚಿಕಿತ್ಸಾ ಸೇವೆ ಒದಗಿಸಲು ಹುಬ್ಬಳ್ಳಿಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಹಲವು ರೋಗಿಗಳು ಮೃತಪಟ್ಟಿದ್ದಾರೆ. ಶೇ.80 ಕಾಮಗಾರಿ ಪೂರ್ಣಗೊಂಡಿದ್ದರೂ ಸರ್ಕಾರ ಇನ್ನೂ ವೈದ್ಯರು, ನರ್ಸ್ ಹಾಗೂ ಸಿಬ್ಬಂದಿಯನ್ನು ಆಸ್ಪತ್ರೆಗೆ ನಿಯೋಜಿಸಿಲ್ಲ. ಜೀವ ಉಳಿಸುವ ವೈದ್ಯಕೀಯ ಉಪಕರಣಗಳನ್ನೂ ಖರೀದಿಸಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.
Related Articles
Thank you for your comment. It is awaiting moderation.


Comments (0)