ಎಸ್ಐಆರ್ ಪ್ರಕ್ರಿಯೆಯಲ್ಲಿ ಗೊಂದಲ; ಅವಧಿ ವಿಸ್ತರಣೆಗೆ ಕೋರಿ ಹೈಕೋರ್ಟ್ಗೆ ಅರ್ಜಿ
- by Prashanth Basavapatna
- July 24, 2026
- 3 Views
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (ಎಸ್ಐಆರ್) ಅವಧಿಯನ್ನು ಒಂದರಿಂದ ಮೂರು ತಿಂಗಳವರೆಗೆ ವಿಸ್ತರಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
ಸಾಹಿತಿ ದೇವನೂರು ಮಹದೇವ, ಇತಿಹಾಸ ತಜ್ಞ ರಾಮಚಂದ್ರ ಗುಹಾ, ನಿವೃತ್ತ ಮೇಜರ್ ಜನರಲ್ ಎಸ್.ಜಿ. ವಂಬಟ್ಕೆರೆ, ಲೇಖಕಿ ಸಬೀಹಾ ಭೂಮಿಗೌಡ ಅರ್ಜಿ ಸಲ್ಲಿಸಿದ್ದು, ಭಾರತ ಚುನಾವಣಾ ಆಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ, ರಾಜ್ಯ ಸರ್ಕಾರವನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿಸಲಾಗಿದೆ. ಅರ್ಜಿ ಇನ್ನಷ್ಟೇ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಬೇಕಿದೆ.
ಅರ್ಜಿಯಲ್ಲೇನಿದೆ?
ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ಅನೇಕ ಗೊಂದಲಗಳನ್ನು ಕೂಡಿದೆ. ರಾಜ್ಯ ಸರ್ಕಾರ ಮತ್ತು ಸಾರ್ವಜನಿಕ ಸಂಘ-ಸಂಸ್ಥೆಗಳು ಎತ್ತಿರುವ ಸಮಸ್ಯೆಗಳಿಗೆ ಸಮರ್ಪಕ ಉತ್ತರಗಳು ಸಿಕ್ಕಿಲ್ಲ. ಬಿಎಲ್ಒಗಳಿಗೆ ಸಮರ್ಪಕ ಮಾಹಿತಿ ಹಾಗೂ ತರಬೇತಿ ಇಲ್ಲವಾಗಿದೆ. ತಾರ್ಕಿಕ ವ್ಯತ್ಯಾಸಗಳ (ಲಾಜಿಕಲ್ ಡಿಸ್ಕ್ರಿಪೆನ್ಸಿ) ಬಗ್ಗೆ ಸ್ಪಷ್ಟತೆ ಇಲ್ಲ. ಮತದಾರರ ನೆರವು ಕೇಂದ್ರಗಳು (ವೋಟರ್ ಫೆಸಿಲಿಟೇಷನ್ ಸೆಂಟರ್ಸ್) ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ. ಜತೆಗೆ, ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟುಹೋದರೆ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ ಎಂಬಂತೆ ಮುಖ್ಯಮಂತ್ರಿಗಳು ಬಹಿರಂಗ ಹೇಳಿಕೆ ನೀಡಿದ್ದಾರೆ ಎಂದೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಎಲ್ಲ ಕಾರಣಗಳಿಂದಾಗಿ ಗಣತಿ ನಮೂನೆಗಳ ವಿತರಣೆಯಿಂದ ಅಂತಿಮ ಮತದಾರರ ಪಟ್ಟಿ ಪ್ರಕಟವಾಗುವ ಎಸ್ಐಆರ್ನ ಪ್ರತಿ ಹಂತದ ಅವಧಿಯನ್ನು ಒಂದರಿಂದ ಮೂರು ತಿಂಗಳವರೆಗೆ ವಿಸ್ತರಿಸಲು, ಪ್ರತಿ ಬೂತ್ ಮಟ್ಟದಲ್ಲಿ ಮತದಾರರ ನೆರವು ಕೇಂದ್ರಗಳನ್ನು ಸ್ಥಾಪಿಸಲು ಚುನಾವಣಾ ಆಯೋಗ ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟು ಹೋದವರಿಗೆ ಕಲ್ಯಾಣ ಯೋಜನೆಗಳನ್ನು ನಿಲ್ಲಸಿದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
Related Articles
Thank you for your comment. It is awaiting moderation.


Comments (0)