ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ನಿರ್ದೇಶನ ಕೋರಿ ಅರ್ಜಿ; ಸರ್ಕಾರಕ್ಕೆ‌ ಹೈಕೋರ್ಟ್ ನೋಟಿಸ್

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಬ್ಯಾಂಕ್‌ನ ನಿರ್ದೇಶಕರೂ ಆಗಿರುವ ಮಾಜಿ ಶಾಸಕ ಕೆ.ಎಸ್. ಪ್ರಕಾಶ್ ಅಲಿಯಾಸ್ ಬೆಳ್ಳಿ ಪ್ರಕಾಶ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ ಪ್ರತಿವಾದಿಗಳಾದ ರಾಜ್ಯ ಸರ್ಕಾರ, ಸಹಕಾರ ಸಂಘಗಳ ನಿಬಂಧಕರು, ಅಪೆಕ್ಸ್ ಬ್ಯಾಂಕ್ ಚುನಾವಣಾಧಿಕಾರಿ, ಸಹಕಾರ ಚುನಾವಣಾ ಪ್ರಾಧಿಕಾರ, ಬೆಂಗಳೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿತು. ಜತೆಗೆ, ಅಪೆಕ್ಸ್ ಬ್ಯಾಂಕ್‌ಗೆ ತುರ್ತು ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿತು.

ಅರ್ಜಿಯಲ್ಲೇನಿದೆ?
ಅಪೆಕ್ಸ್ ಬ್ಯಾಂಕ್‌ನ ನಿರ್ದೇಶಕ ಮಂಡಳಿಯ ಅವಧಿ 2025ರ ಡಿಸೆಂಬರ್ 21ಕ್ಕೇ ಮುಕ್ತಾಯಗೊಂಡಿದೆ. 2026ರ ಜನವರಿ 23ಕ್ಕೆ ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆಯಿತು. ಅಲ್ಲದೆ, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಜುಲೈ 29ಕ್ಕೆ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಅರ್ಜಿದಾರರು ಅದೇ ದಿನ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಆದರೆ, ಚುನಾವಣೆ ಮುಂದೂಡಲಾಯಿತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಈ ಮಧ್ಯೆ, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಅರ್ಜಿದಾರರು ಫೆಬ್ರವರಿ 17ರಂದು ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದ್ದರು. ಸಹಕಾರ ಚುನಾವಣಾ ಪ್ರಾಧಿಕಾರ ಸಹ ಫೆಬ್ರವರಿ 26 ಮತ್ತು ಮಾರ್ಚ್ 18ರಂದು ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕರಿಗೆ ಚುನಾವಣೆ ನಡೆಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಆದರೂ, ಈವರೆಗೆ ಕ್ರಮ ಆಗಿಲ್ಲ. ಆದ್ದರಿಂದ, ಬ್ಯಾಂಕ್‌ನ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ತಕ್ಷಣ ಚುನಾವಣೆ ನಡೆಸಲು ಪ್ರತಿವಾದಿಗಳಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Related Articles

Comments (0)

Leave a Comment