ಕರ್ತವ್ಯನಿರತ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ; ಶಾಸಕ ಸುರೇಶ್ ಗೌಡ ಪುತ್ರಿ ವರ್ತನೆಗೆ ಹೈಕೋರ್ಟ್ ಅಸಮಾಧಾನ
- by LegalSamachar
- September 21, 2026
- 4 Views
ಬೆಂಗಳೂರು: ದೇವಾಲಯದಲ್ಲಿ ಭದ್ರತೆಯ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಕೆನ್ನೆಗೆ ಹೊಡೆದ ಆರೋಪ ಎದುರಿಸುತ್ತಿರುವ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯಾ ಅವರ ವರ್ತನೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಐಶ್ವರ್ಯಾ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿತಲ್ಲದೆ, ಮಹಿಳಾ ಪಿಎಸ್‌ಐ ಬಳಿ ಐಶ್ವರ್ಯಾ ಕ್ಷಮೆ ಯಾಚಿಸಿದರೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಗಣಿಸಬಹುದು ಎಂದು ಮೌಖಿಕವಾಗಿ ಹೇಳಿತು.
ಈ ಕುರಿತು ಐಶ್ವರ್ಯಾ ಅವರಿಂದ ಸೂಚನೆ ಪಡೆದು ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಲು ಮಂಗಳವಾರದವರೆಗೆ ಕಾಲಾವಕಾಶ ನೀಡುವಂತೆ ಐಶ್ವರ್ಯಾ ಪರ ವಕೀಲರು ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಾಲಯ ಅರ್ಜಿ ವಿಚಾರಣೆ ಮುಂದೂಡಿತು.
ಪ್ರಕರಣವೇನು?
ಭೀಮನ ಅಮಾವಾಸ್ಯೆಯಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ಅಹಲ್ಯದೇವಿ ದೇವಸ್ಥಾನಕ್ಕೆ ಐಶ್ವರ್ಯಾ ತಮ್ಮ ಮಕ್ಕಳೊಂದಿಗೆ ತೆರಳಿದ್ದರು. ದೇವಾಲಯದ ಗರ್ಭಗುಡಿಗೆ ಪ್ರವೇಶಿಸುವ ವಿಚಾರವಾಗಿ ಅಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ಐ ಸವಿತಾ ಪಾಟೀಲ್ ಅವರೊಂದಿಗೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ. ಈ ವೇಳೆ ಐಶ್ವರ್ಯಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು. ಘಟನೆಯ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.
ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಐಶ್ವರ್ಯಾ ಮೊದಲು ಶ್ರೀರಂಗಪಟ್ಟಣದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ಕರ್ತವ್ಯನಿರತ ಸರ್ಕಾರಿ ಅಧಿಕಾರಿ ಮೇಲಿನ ಹಲ್ಲೆ ಆರೋಪದ ಗಂಭೀರತೆಯನ್ನು ಪರಿಗಣಿಸಿದ್ದ ಸೆಷನ್ಸ್ ನ್ಯಾಯಾಲಯ ಐಶ್ವರ್ಯಾ ಅರ್ಜಿ ವಜಾಗೊಳಿಸಿತ್ತು. ಇದರಿಂದ, ಐಶ್ವರ್ಯಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Related Articles
Thank you for your comment. It is awaiting moderation.


Comments (0)