ನಿಗದಿತ ಸಮಯ ಮೀರಿ ಪಟಾಕಿ ಸಿಡಿತ; ಸುಪ್ರೀಂ ಮಾರ್ಗಸೂಚಿ ಜಾರಿಗೆ ಕೈಗೊಂಡ ಕ್ರಮಗಳ ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
- by Ramya B T
- November 13, 2026
- 11 Views
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯದೆಲ್ಲೆಡೆ ನಿಗದಿತ ಸಮಯ ಮೀರಿ ತಡರಾತ್ರಿವರೆಗೂ ಪಟಾಕಿ ಸಿಡಿಸಲಾಗುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಣಕ್ಕೆ ಸಂಬಂಧಿಸಿದ ಸುಪ್ರೀಂಕೋರ್ಟ್ ಮಾರ್ಗಸೂಚಿಗಳ ಜಾರಿಗೆ ಕೈಗೊಂಡಿರುವ ಕ್ರಮಗಳ ಕುರಿತು ಮೂರು ವಾರಗಳಲ್ಲಿ ವಿಸ್ತೃತ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಸುಪ್ರೀಂಕೋರ್ಟ್ ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಪಟಾಕಿ ಸಿಡಿಸಲಾಗುತ್ತಿದೆ ಎಂದು ಆಕ್ಷೇಪಿಸಿ ಬೆಂಗಳೂರಿನ ವಿನೋದ್ ಜಾಕೋಬ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್ ಹಾಗೂ ನ್ಯಾಯಮೂರ್ತಿ ಕೆ.ಎಸ್. ಭರತ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿತು.
ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಹಬ್ಬಗಳ ಸಂದರ್ಭದಲ್ಲಿ ಪಟಾಕಿ ಸಿಡಿಸಲು ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಅವಕಾಶವಿದ್ದರೂ ಈ ಸಮಯದ ಮಿತಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿಲ್ಲ. ರಾತ್ರಿ 9.30ರ ಬಳಿಕ ಪಟಾಕಿ ಸಿಡಿಸಲು ಆರಂಭಿಸಿ, ನಸುಕಿನವರೆಗೂ ಮುಂದುವರಿಸುವ ಪ್ರವೃತ್ತಿ ಕಂಡುಬರುತ್ತಿದೆ. ಪಟಾಕಿ ಸಿಡಿಸಲು ನಿಗದಿಪಡಿಸಿರುವ ಸಮಯದ ಮಿತಿಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿತು.
ಪಟಾಕಿ ಬಳಕೆಯ ಮೇಲಿನ ಸಮಯದ ನಿರ್ಬಂಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅಗತ್ಯವನ್ನು ಒತ್ತಿಹೇಳಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್ಪಿಸಿಬಿ) ನೋಟಿಸ್ ಜಾರಿಗೊಳಿಸಿತು. ಜತೆಗೆ, ಸುಪ್ರೀಂಕೋರ್ಟ್ ಮಾರ್ಗಸೂಚಿಗಳ ಜಾರಿಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವಿವರವಾದ ವರದಿ ಸಲ್ಲಿಸುವಂತೆ ಸೂಚಿಸಿ, ವಿಚಾರಣೆಯನ್ನು ಡಿಸೆಂಬರ್ 9ಕ್ಕೆ ಮುಂದೂಡಿತು.
ಅರ್ಜಿದಾರರ ಆಕ್ಷೇಪವೇನು?
ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ದೀಪಾವಳಿಗೂ ಮುನ್ನವೇ ಪಟಾಕಿ ಬಳಕೆಗೆ ಸಂಬಂಧಿಸಿದಂತೆ ಅರ್ಜುನ್ ಗೋಪಾಲ್ ಮತ್ತು ಕೇಂದ್ರ ಸರಕಾರ ನಡುವಿನ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ದೀಪಾವಳಿ ಸಂದರ್ಭದಲ್ಲಿ ನಿಗದಿತ ಎರಡು ಗಂಟೆಗಳ ಅವಧಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂಕೋರ್ಟ್ ಅವಕಾಶ ನೀಡಿದೆ. ಇತರ ಹಬ್ಬಗಳ ಸಂದರ್ಭದಲ್ಲಿನ ಪಟಾಕಿ ಬಳಕೆಯನ್ನೂ ನಿಯಂತ್ರಿಸಲು ನಿರ್ದೇಶನಗಳನ್ನು ನೀಡಿದೆ. ಆದರೆ, ಮಾರ್ಗಸೂಚಿಗಳ ಉಲ್ಲಂಘನೆ ಕೇವಲ ದೀಪಾವಳಿಗೆ ಸೀಮಿತವಾಗಿಲ್ಲ. ಗಣೇಶೋತ್ಸವ, ದಸರಾ ಹಾಗೂ ಐಪಿಎಲ್ ಪಂದ್ಯಗಳ ಸಂಭ್ರಮಾಚರಣೆ ಸಂದರ್ಭದಲ್ಲಿಯೂ ನಿಯಮ ಉಲ್ಲಂಘಿಸಿ ಪಟಾಕಿ ಸಿಡಿಸಲಾಗುತ್ತಿದೆ ಎಂದು ಆಕ್ಷೇಪಿಸಿದರು.
ಅರ್ಜಿಯಲ್ಲೇನಿದೆ?
ಸುಪ್ರೀಂಕೋರ್ಟ್ ಮಾರ್ಗಸೂಚಿಗಳ ಪಾಲನೆಗೆ ಕೆಎಸ್ಪಿಸಿಬಿ ಸುತ್ತೋಲೆಗಳನ್ನು ಹೊರಡಿಸಿದ್ದರೂ ಸಾರ್ವಜನಿಕ ರಸ್ತೆಗಳು, ಆಸ್ಪತ್ರೆಗಳ ಸುತ್ತಮುತ್ತ ಹಾಗೂ ನಿಶ್ಶಬ್ದ ವಲಯಗಳಲ್ಲಿ ಪಟಾಕಿ ಸಿಡಿಸುವುದು ಮುಂದುವರಿದಿದೆ. ಹಸಿರು ಪಟಾಕಿಗಳಿಗಿಂತ ಕಡಿಮೆ ಬೆಲೆಗೆ ದೊರೆಯುವುದರಿಂದ ಹಸಿರೇತರ ಪಟಾಕಿಗಳು ಸ್ಥಳೀಯ ಮಾರುಕಟ್ಟೆಗಳಲ್ಲಿ ಸುಲಭವಾಗಿ ಲಭ್ಯವಾಗುತ್ತಿವೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು, ಸಂಚಾರ ಜಂಕ್ಷನ್ಗಳು ಹಾಗೂ ನಿಶ್ಶಬ್ದ ವಲಯಗಳಲ್ಲಿ ಪಟಾಕಿ ಸಿಡಿಸುವುದರ ಮೇಲಿನ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಅನುಮತಿಸಲಾದ ಪಟಾಕಿಗಳನ್ನು ಬಳಸಲು ಸಮುದಾಯ ಮೈದಾನಗಳನ್ನು ಗುರುತಿಸಿ, ಅಧಿಸೂಚನೆ ಹೊರಡಿಸಿ, ಅಲ್ಲಿ ಮೇಲ್ವಿಚಾರಣೆ ನಡೆಸಬೇಕು. ಜತೆಗೆ, ಹಸಿರು ಪಟಾಕಿಗಳಷ್ಟೇ ಮಾರಾಟವಾಗುವಂತೆ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಹಬ್ಬಗಳ ಸಂದರ್ಭದಲ್ಲಿ ನಿಯಮ ಉಲ್ಲಂಘನೆ ತಡೆಯಲು ಪ್ರತಿ ವಾರ್ಡ್ನಲ್ಲಿ ತಪಾಸಣಾ ತಂಡಗಳನ್ನು ರಚಿಸಿ, ನಿಯಮ ಜಾರಿ ಸಿಬ್ಬಂದಿ ನಿಯೋಜಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
Related Articles
Thank you for your comment. It is awaiting moderation.


Comments (0)